ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯದ ಕೊರತೆ

Last Updated 9 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯದ ವ್ಯವಸ್ಥೆಯನ್ನು ಸರಿಯಾಗಿ ಕಲ್ಪಿಸದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಸೋಮವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

`ಎಷ್ಟೊಂದು ಕಡೆಗಳಲ್ಲಿ ಶೌಚಾಲಯದ ವ್ಯವಸ್ಥೆಯೇ ಇಲ್ಲ. ಮಹಿಳೆಯರ ಪರಿಸ್ಥಿತಿಯಂತೂ ಹೇಳತೀರದಾಗಿದೆ. ಹಗಲಿನ ಅವಧಿಯಲ್ಲಿ ಮೂತ್ರಕ್ಕೆ ಬಯಲಿಗೆ ಹೋಗುವುದು ಅವರಿಗೆ ಕಷ್ಟವಾಗಿದೆ. ಇದರಿಂದ ಎಷ್ಟೋ ಮಹಿಳೆಯರು ನೀರನ್ನೇ ಕುಡಿಯುತ್ತಿಲ್ಲ, ನೀರು ಕುಡಿದರೂ ಮೂತ್ರಕ್ಕೆ ಹೋಗದೆ ತೊಂದರೆ ಅನುಭವಿಸುತ್ತಿದ್ದಾರೆ.

`ಇದರಿಂದ ಅವರು ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಕುರಿತು ಸೂಕ್ತ ಕ್ರಮ ತೆಗೆದುಕೊಳ್ಳುವ ಅಗತ್ಯ ಇದೆ~ ಎಂದು ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ತಿಳಿಸಿತು.

ಮಲಹೊರುವ ಮತ್ತು ಯಂತ್ರಗಳ ಸಹಾಯವಿಲ್ಲದೇ ಒಳಚರಂಡಿ ಶುಚಿಗೊಳಿಸುವ ಪದ್ಧತಿಗಳನ್ನು ನಿರ್ಮೂಲನ ಮಾಡಲು ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಮಾಜಿ ಅಡ್ವೊಕೇಟ್ ಜನರಲ್, ಹಿರಿಯ ವಕೀಲ ಆರ್.ಎನ್.ನರಸಿಂಹಮೂರ್ತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಪೀಠ ನಡೆಸುತ್ತಿದೆ.

`ಮಲ ಹೋರುವ ಪದ್ಧತಿಯನ್ನು ಅನುಸರಿಸುತ್ತಿದ್ದ 296 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲಾಗಿದೆ. ಸದ್ಯ ಅವರ ಸಂಖ್ಯೆ ಹೆಚ್ಚಿಗೆ ಇಲ್ಲ~ ಎಂದು ಸರ್ಕಾರದ ಪರ ವಕೀಲರು ತಿಳಿಸಿದರು. ವಿವಾದ ಕುರಿತಾಗಿ ಹೆಚ್ಚಿನ ಮಾಹಿತಿ ನೀಡುವಂತೆ ನಿರ್ದೇಶಿಸಿದ ಪೀಠ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿತು.

ವಿಚಾರಣೆ ಮುಂದೂಡಿಕೆ
ಡಿನೋಟಿಫಿಕೇಷನ್ ಹಗರಣದಲ್ಲಿ ಸಿಲುಕಿರುವ ಸಚಿವ ವಿ.ಸೋಮಣ್ಣ ಹಾಗೂ ಅವರ ಪತ್ನಿ ಶೈಲಜಾ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಇದೇ ಗುರುವಾರಕ್ಕೆ ಮುಂದೂಡಿದೆ.

`ನಾಗದೇವನಹಳ್ಳಿ ಬಳಿಯ ಸರ್ವೆ ನಂ. 47 ಮತ್ತು 48ರಲ್ಲಿರುವ 3.40 ಎಕರೆ ಜಮೀನಿನನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವ ವಿವಾದ ಇದಾಗಿದೆ. ಇವರ ವಿರುದ್ಧ ನಗರದ ರವಿಕೃಷ್ಣ ರೆಡ್ಡಿ ಅವರು ಲೋಕಾಯುಕ್ತ ವಿಶೇಷ ಕೋರ್ಟ್‌ನಲ್ಲಿ ದೂರು ದಾಖಲು ಮಾಡಿದ್ದರು. ಈ ದೂರಿನ ಆಧಾರದ ಮೇಲೆ ತನಿಖೆ ನಡೆಸುವಂತೆ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ತಮ್ಮನ್ನು ಪೊಲೀಸರು ಬಂಧಿಸುವ ಸಾಧ್ಯತೆ ಇದೆ ಎಂದು ಇವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT