ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ವೈದ್ಯ ಸೇವೆ ಕಡ್ಡಾಯಕ್ಕೆ ಶೀಘ್ರ ಕಾನೂನು

Last Updated 6 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ವೈದ್ಯರು ಸೇವೆ ಸಲ್ಲಿಸುವುದನ್ನು ಕಡ್ಡಾಯಗೊಳಿಸಲು ಶೀಘ್ರದಲ್ಲೇ ಕಾನೂನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಸೋಮವಾರ ವಿಧಾನ ಸಭೆಯಲ್ಲಿ ತಿಳಿಸಿದರು.

ಕಾಂಗ್ರೆಸ್‌ನ ಎನ್.ಸಂಪಂಗಿ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸದಾನಂದಗೌಡ, ಕಳೆದ ಮೂರು ವರ್ಷಗಳಲ್ಲಿ 1200 ವೈದ್ಯರ ನೇಮಕವಾಗಿದೆ. ಆದರೆ ನೇಮಕಗೊಂಡ ಮೂರು ತಿಂಗಳಲ್ಲೇ ವೈದ್ಯರು ಗ್ರಾಮೀಣ ಭಾಗದಿಂದ ಕಾಣೆಯಾಗುತ್ತಾರೆ. ಇದಕ್ಕೆ ಕಡಿವಾಣ ಹಾಕಲು ಕಾನೂನು ತರಲಾಗುವುದು ಎಂದರು.

ಕರ್ನಾಟಕ ಲೋಕಸೇವಾ ಆಯೋಗ 600 ತಜ್ಞ ವೈದ್ಯರ ನೇಮಕ ಪ್ರಕ್ರಿಯೆ ಆರಂಭಿಸಿದೆ. ಅನೇಕ ಕಡೆ ವೈದ್ಯರ ಕೊರತೆ ಇರುವುದು ನಿಜ. ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಎರಡು ತಿಂಗಳಲ್ಲಿ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ ಎಂದು ಹೇಳಿದರು.

ಬಾಗೇಪಲ್ಲಿ, ಗುಡಿಬಂಡೆ ತಾಲ್ಲೂಕು ಆಸ್ಪತ್ರೆಗಳನ್ನು 50ರಿಂದ 100 ಹಾಸಿಗೆಗಳ ಸಾಮರ್ಥ್ಯಕ್ಕೆ ಮೇಲ್ದರ್ಜೆಗೆ ಏರಿಸಲಾಗಿದೆ. ಎರಡು ತಿಂಗಳಲ್ಲಿ ಕಟ್ಟಡಗಳ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. 100 ಹಾಸಿಗೆಗಳ ಸಾಮರ್ಥ್ಯಕ್ಕೆ ಅನುಗುಣವಾಗಿ ವೈದ್ಯರು ಮತ್ತು ಇತರ ಹುದ್ದೆಗಳು ಮಂಜೂರಾಗಿವೆ. ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರ ಖಾಲಿ ಹುದ್ದೆಗಳನ್ನು ತುಂಬಲಾಗುವುದು ಎಂದರು.

ಸದ್ಯ 50 ಹಾಸಿಗೆಗಳ ಸಾಮರ್ಥ್ಯ ಇರುವುದರಿಂದ ಒಳ ರೋಗಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲು ಅವಕಾಶ ಇಲ್ಲ. 100 ಹಾಸಿಗೆ ಅಥವಾ ಅದಕ್ಕಿಂತ ಮೇಲಿನ ಸಾಮರ್ಥ್ಯದ ಆಸ್ಪತ್ರೆಗಳಲ್ಲಿ ಮಾತ್ರ ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ ಒದಗಿಸಲು ಅವಕಾಶವಿದೆ.

ಆದ್ದರಿಂದ ಈಗ ಊಟದ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ. ಎರಡು ತಿಂಗಳ ನಂತರ 100 ಹಾಸಿಗೆಗಳ ಸಾಮರ್ಥ್ಯಕ್ಕೆ ಅಧಿಕೃತವಾಗಿ ಮೇಲ್ದರ್ಜೆಗೆ ಏರಲಿದ್ದು, ಆಗ ಊಟದ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ನೀಡಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT