ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಲಿಸುತ್ತಿದ್ದ ಬಸ್‌ನಲ್ಲಿ ಆಕಸ್ಮಿಕ ಬೆಂಕಿ

Last Updated 25 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಬೆಂಗಳೂರು: ಹಳೇ ಮದ್ರಾಸ್ ರಸ್ತೆಯ ಟಿನ್ ಫ್ಯಾಕ್ಟರಿ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಡೀ ವಾಹನ ಸುಟ್ಟು ಹೋಗಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ಹೆಬ್ಬಾಳದಿಂದ ಸಿಲ್ಕ್‌ಬೋರ್ಡ್ ಜಂಕ್ಷನ್ ಕಡೆಗೆ ಹೋಗುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿನ (ಮಾರ್ಗ ಸಂಖ್ಯೆ- 500ಎ) ಬ್ಯಾಟರಿ ಕಿಡಿಯಿಂದ ಟಯರ್‌ಗೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದಾಗಿ ಟಯರ್ ಸ್ಫೋಟಗೊಂಡು, ವಾಹನದ ಹಿಂಭಾಗಕ್ಕೆ ಬೆಂಕಿ ಹೊತ್ತಿಕೊಂಡಿದೆ. ವಾಹನದ ಹಿಂಭಾಗದಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿದ ಪ್ರಯಾಣಿಕರು ಹಾಗೂ ಸಿಬ್ಬಂದಿ ಕೂಡಲೇ ಬಸ್‌ನಿಂದ ಕೆಳಗಿಳಿದು, ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ವಿಷಯ ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಮೂರು ವಾಹನಗಳಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಸುಮಾರು 20 ನಿಮಿಷಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಬಸ್‌ನಲ್ಲಿ ಸುಮಾರು 30 ಪ್ರಯಾಣಿಕರಿದ್ದರು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆ ಬಸ್ ಎಲೆಕ್ಟ್ರಾನಿಕ್‌ಸಿಟಿ ಡಿಪೊಗೆ ಸೇರಿದ್ದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ರಾಮಮೂರ್ತಿನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಘಟನೆಯಿಂದಾಗಿ ಹಳೆ ಮದ್ರಾಸ್ ರಸ್ತೆ, ಕೆ.ಆರ್.ಪುರ, ಟಿನ್ ಫ್ಯಾಕ್ಟರಿ ಸುತ್ತಮುತ್ತಲ ಪ್ರದೇಶದಲ್ಲಿ ಕೆಲ ಕಾಲ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿ ವಾಹನ ಸವಾರರು ಪರದಾಡಿದರು.

ವ್ಯಕ್ತಿ ಆತ್ಮಹತ್ಯೆ: ಮಾಗಡಿ ಮುಖ್ಯರಸ್ತೆ ಸಮೀಪದ ನರಸಿಂಹಯ್ಯನಪಾಳ್ಯ ಒಂದನೇ `ಬಿ' ಅಡ್ಡರಸ್ತೆ ನಿವಾಸಿ ನಾಗರಾಜ್ (25) ಎಂಬುವರು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ನಾಗರಾಜ್, ನಗರದ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಎಂಟು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಅವರು ಪತ್ನಿ ಉಮಾದೇವಿ ಜತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಉಮಾದೇವಿ ಅವರು ಮೂರ‌್ನಾಲ್ಕು ದಿನಗಳ ಹಿಂದೆ ತವರು ಮನೆಗೆ ಹೋಗಿದ್ದರು. ಎರಡು ದಿನಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲಿದ್ದ ನಾಗರಾಜ್, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

`ಅನಾರೋಗ್ಯದಿಂದ ಬಳಲುತ್ತಿದ್ದ ತಮ್ಮ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತರ ಅಣ್ಣ ಹನುಮಂತು ಹೇಳಿಕೆ ಕೊಟ್ಟಿದ್ದಾರೆ' ಎಂದು ಪೊಲೀಸರು ತಿಳಿಸಿದ್ದಾರೆ. ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT