ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು-ಉಡುಪಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿ ಪ್ರಕಟ

Last Updated 21 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ಯುವ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಸುನಿಲ್‌ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಅವರನ್ನು ಎಐಸಿಸಿ ಆಯ್ಕೆ ಮಾಡಿದೆ.

ಜೆಡಿಎಸ್ ಅಭ್ಯರ್ಥಿಯಾಗಿ ಪಕ್ಷದ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಅವರನ್ನು ಕಣಕ್ಕೆ ಇಳಿಸುವ ಸಾಧ್ಯತೆ ಇದೆ. ಆದರೆ ಇನ್ನೂ ಪ್ರಕಟಿಸಿಲ್ಲ. ಪಕ್ಷವು ಕಾದು ನೊಡುವ ತಂತ್ರ ಅನುಸರಿಸಿದೆ.

ಸುನಿಲ್‌ಕುಮಾರ್ ಅವರ ಆಯ್ಕೆಯನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಶಿವಮೊಗ್ಗದಲ್ಲಿ ಪ್ರಕಟಿಸಿದರು. ನವದೆಹಲಿಯಲ್ಲಿ ಆಸ್ಕರ್ ಫರ್ನಾಂಡಿಸ್ ಅವರು ಕಾಂಗ್ರೆಸ್ ಅಭ್ಯರ್ಥಿ ಹೆಸರನ್ನು ಪ್ರಕಟಿದರು. ಜೆಡಿಎಸ್ ಅಭ್ಯರ್ಥಿ ಹೆಸರನ್ನು ಇದೇ 27 ಅಥವಾ 28ರಂದು ಪ್ರಕಟಿಸಲಾಗುವುದು ಎಂದು ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಸುನಿಲ್‌ಕುಮಾರ್ ಅವರಿಗೆ ಕಾರ್ಕಳ ಶಾಸಕರಾಗಿ ಕೆಲಸ ಮಾಡಿದ ಅನುಭವವಿದೆ. ಅಲ್ಲದೇ ಈ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜನರೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ. ಹಾಗಾಗಿ ಪಕ್ಷ ಅವರನ್ನು ಅಭ್ಯರ್ಥಿಯಾಗಿಸಲು ತೀರ್ಮಾನಿಸಿದೆ ಎಂದು ಈಶ್ವರಪ್ಪ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು. ಈ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ  ಏಳರಲ್ಲಿ ಬಿಜೆಪಿ ಶಾಸಕರಿದ್ದಾರೆ. ಅಲ್ಲದೇ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾ ಪಂಚಾಯ್ತಿಗಳಲ್ಲಿ ಪಕ್ಷ ಅಧಿಕಾರದಲ್ಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟು ಜನರಲ್ಲಿ ಮತ ಯಾಚಿಸಲಾಗುವುದು. ಅಭಿವೃದ್ಧಿ ಕೆಲಸಗಳು ಜನರಿಗೆ ಎಷ್ಟರಮಟ್ಟಿಗೆ ಮನವರಿಕೆಯಾಗಿದೆ ಎಂಬುದಕ್ಕೆ ಈ ಚುನಾವಣೆ ಒಂದು ದಿಕ್ಸೂಚಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಜಯಪ್ರಕಾಶ್ ಹೆಗ್ಡೆ ಅವರು ಬ್ರಹ್ಮಾವರ ಶಾಸಕರಾಗಿ ಹಾಗೂ ಸಚಿವರಾಗಿಯೂ ಸೇವೆ ಸಲ್ಲಿಸಿ ಜನಮನ್ನಣೆ ಪಡೆದಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸದಾನಂದ ಗೌಡರ ವಿರುದ್ಧ ಪರಾಭವಗೊಂಡ ಇವರು ಈ ಸಾರಿ ಮತ್ತೆ ಜನಾದೇಶ ಪಡೆಯಲು ಹೊರಟಿದ್ದಾರೆ. ಸ್ಪರ್ಧೆಯನ್ನು ಸವಾಲಾಗಿ ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಘೋಷಣೆಯೊಂದಿಗೆ ಚುನಾವಣಾ ಅಖಾಡದ ಚಿತ್ರಣ ಸ್ಪಷ್ಟವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT