ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರ ಸಮಸ್ಯೆ ನಿವಾರಣೆಗೆ ತಾಕೀತು

Last Updated 17 ಅಕ್ಟೋಬರ್ 2012, 7:50 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ನಗರದ ಅಭಿವೃದ್ಧಿ ಕಾರ್ಯಗಳಲ್ಲಿ ನಿರ್ಲಕ್ಷ್ಯ ತೋರಲಾಗುತ್ತಿದೆ ಎಂದು ಆರೋಪಿಸಿ ನಗರಸಭೆ ಸದಸ್ಯರು ಆಯುಕ್ತರನ್ನು ತರಾಟೆಗೆ ತೆಗೆದುಕೊಂಡ ಘಟನೆ ಮಂಗಳವಾರ ನಡೆಯಿತು.

ನಗರಸಭೆ ಸಬಾಂಗಣದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ವಿರೋಧ ಪಕ್ಷದ ಸದಸ್ಯರು, ನಗರದಲ್ಲಿ ಯಾವುದೆ ಅಭಿವೃದ್ಧಿ ಕಾರ್ಯ ನಡೆದಿಲ್ಲ ಎಂದು ಆರೋಪಿಸಿದರು.

ನಗರಸಭೆ ಸದಸ್ಯ ಮಿಲ್ಟನ್ ವೆಂಕಟೇಶ್ ಮಾತನಾಡಿ, ನಗರಸಭೆ ಆಯುಕ್ತರು ಎಲ್ಲೆಡೆ ಸಂಚರಿಸಿ ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಬೇಕಿತ್ತು. ಎಲ್ಲೆಲ್ಲಿ ಅಭಿವೃದ್ಧಿ ಕಾರ್ಯಗಳು ಆಗಿಲ್ಲವೊ ಅಲ್ಲಿ ಕಾಮಗಾರಿ ಕೈಗೊಳ್ಳಬೇಕಿತ್ತು. ಚರಂಡಿ, ರಸ್ತೆ ನಿರ್ಮಾಣ, ನೀರಿನ ಸಮಸ್ಯೆ ಸೇರಿದಂತೆ ಯಾವ ಕಾಮಗಾರಿಯೂ ನಡೆದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಗರಸಭೆ ಸದಸ್ಯ ಎಂ.ಪ್ರಕಾಶ್ ಮಾತನಾಡಿ, ಆಯುಕ್ತರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಅಭಿವೃದ್ಧಿ ಕಾರ್ಯಗಳಲ್ಲಿ ನಗರಸಭೆ ಸದಸ್ಯರೊಂದಿಗೆ ಸಹಕರಿಸಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ನಗರದಲ್ಲಿ ಆಗಬೇಕಾಗಿರುವ ಕೆಲಸಗಳ ಬಗ್ಗೆ ಸದಸ್ಯರೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ನಗರಸಭೆ ಅಧ್ಯಕ್ಷ ಭಾಸ್ಕರ್, ಅಧಿಕಾರಿಗಳು ವಾರ್ಡ್ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು. ಜನರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ನೀಡಬೇಕು. ವಿನಾಕಾರಣ ನಗರಸಭೆ ಟೀಕೆಗೆ ಒಳಗಾಗುತ್ತಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಹೇಳಿದರು.

ನಗರಸಭೆ ಆಯುಕ್ತ  ಎಚ್.ಎಸ್.ರಾಯ್, ಶಾಸಕ ಕೆ.ಪಿ.ಬಚ್ಚೇಗೌಡ, ಉಪಾಧ್ಯಕ್ಷೆ ಸಿ.ಮಂಜುಳಾ, ನಗರಸಭೆ ಸದಸ್ಯರಾದ ಎ.ಬಿ.ಮಂಜುನಾಥ್, ಶಂಕರ್‌ರಾಜು, ಮೊಬೈಲ್ ಬಾಬು, ಸಿ.ಎಸ್.ಮಂಜುನಾಥ್, ಎಸ್.ಎಂ.ರಫೀಕ್. ಸಿ.ಎಂ.ಗಾಯಿತ್ರಿ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT