ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರ ಹಿತಕ್ಕೆ ಕಠಿಣ ಕಾನೂನು ಸಡಿಲಿಸಿ

ಉಪ ಮುಖ್ಯಮಂತ್ರಿ ಈಶ್ವರಪ್ಪ ಅವರಿಂದ ವಿವಿಧ ಇಲಾಖೆ ಪ್ರಗತಿ ಪರಿಶೀಲನೆ
Last Updated 19 ಡಿಸೆಂಬರ್ 2012, 10:04 IST
ಅಕ್ಷರ ಗಾತ್ರ

ಸೊರಬ: ಜನೋಪಯೋಗಿ ಕಾರ್ಯಕ್ರಮ ನೀಡುವಲ್ಲಿ ಇರುವ ಕಠಿಣ ಕಾನೂನು ಕ್ರಮ ಸಡಿಲಿಸಿ ಅರ್ಹ ಫಲಾನುಭವಿಗಳಿಗೆ ಉಪಯೋಗ ಆಗುವಂತೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.

ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ತಾಲ್ಲೂಕಿನ ವಿವಿಧ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ತಾಲ್ಲೂಕಿನಲ್ಲಿ ಬಾಕಿ ಇರುವ 15,084 ಬಗರ್‌ಹುಕುಂ ಅರ್ಜಿ ಗಳನ್ನು ಕೂಡಲೇ ಇತ್ಯರ್ಥಗೊಳಿಸ ಬೇಕು. ಕಂದಾಯ ಇಲಾಖಾ ವ್ಯಾಪ್ತಿಯ ಬಗರ್‌ಹುಕುಂ ಜಮೀನಿನಲ್ಲಿ ಸಾಗುವಳಿ ಮಾಡುವವರಿಗೆ ಯಾವುದೇ ತೊಂದರೆ ನೀಡದಂತೆ ಅರಣ್ಯ ಇಲಾಖಾಧಿಕಾರಿಗೆ ಸೂಚಿಸಿದರು. 

ತಾಲ್ಲೂಕಿನ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಅದಕ್ಕೆ ಬೇಕಾದ ನೀರು ಕುಡಿಯುವ ಯೋಜನೆ ಅಡಿ ಮಂಜೂರಾಗಿರುವ ಕಾಮಗಾರಿಗಳನ್ನು ಆದಷ್ಟು ಬೇಗ ಆರಂಭಿಸಬೇಕು. ಅದಕ್ಕೆ ಬೇಕಾದ ಅನುದಾನ ಒದಗಿಸಲಾಗುವುದು. ತಾಲ್ಲೂಕಿನಲ್ಲಿ 633 ಕೆರೆ ಒತ್ತುವರಿ ಪ್ರಕರಣ ಇದ್ದು, ಅದರಲ್ಲಿ 13 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ.

ಕೆರೆ ಒತ್ತುವರಿ ತೆರವುಗೊಳಿಸುವ ಬಗ್ಗೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಜಿಲ್ಲೆಯ ಎಲ್ಲಾ ಕೆರೆಗಳ ಸರ್ವೇ ಕಾರ್ಯ ಆರಂಭಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.

ಪಟ್ಟಣದಲ್ಲಿ ನಿರ್ಮಾಣ ಆಗುತ್ತಿರುವ ರಂಗಮಂದಿರ ಕಾಮಗಾರಿ ವಿಳಂಬದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಮುಂದಿನ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಂಡು ಕಪ್ಪುಪಟ್ಟಿಗೆ ಸೇರಿಸುವಂತೆ ತಿಳಿಸಿದರು.

ಪಟ್ಟಣದ ಮುಖ್ಯರಸ್ತೆಯಲ್ಲಿ ಅರ್ಧಭಾಗ ವಿಸ್ತರಣೆಯಾಗಿದ್ದು, ಮುಂದಿನ ಅರ್ಧಭಾಗ ವಿಸ್ತರಣೆ ಮಾಡುವ ಸಂಬಂಧ ಡಿ. 29ರಂದು ನಿವಾಸಿಗಳ ಹಾಗೂ ವರ್ತಕರ ಸಭೆ ಕರೆದು ಮುಂದಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ತಿಳಿಸಿದರು.

ಶಾಸಕ ಹಾಲಪ್ಪ ಮಾತನಾಡಿ, ಪಟ್ಟಣದ ಹಳೆಯ ತಾಲ್ಲೂಕು ಕಚೇರಿ ಕಟ್ಟಡದಲ್ಲಿ ಸುವರ್ಣಸೌಧ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ತಾಲ್ಲೂಕಿನಲ್ಲಿ ಶಿಕ್ಷಕರ ಕೊರತೆ ಇದ್ದು, ಕೊರತೆ ಇರುವ ಶಿಕ್ಷಕರನ್ನು ನೇಮಕ ಮಾಡುವಂತೆ ಹಾಗೂ ತಾಲ್ಲೂಕಿನಲ್ಲಿ 44 ಆಟಲ್‌ಜೀ ಜನಸ್ನೇಹಿ ಕೇಂದ್ರಗಳನ್ನು ಆದಷ್ಟು ಬೇಗ ಆರಂಭಿಸುವಂತೆ ಉಪ ಮುಖ್ಯಮಂತ್ರಿಗೆ ಮನವಿ ಮಾಡಿದರು.

ಜಿಲ್ಲಾಧಿಕಾರಿ ಎಂ.ವಿ. ವೇದಮೂರ್ತಿ, ಉಪ ವಿಭಾಗಾಧಿಕಾರಿ ಪ್ರವೀಣಕುಮಾರ್, ತಹಶೀಲ್ದಾರ್ ಶ್ರೀಧರಮೂರ್ತಿ ಪಂಡಿತ್, ಕಾರ್ಯ ನಿರ್ವಹಣಾಧಿಕಾರಿ ಪುಷ್ಪಾ ಕಮ್ಮಾರ್, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಮೀನಾಕ್ಷಮ್ಮ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಹುಣವಳ್ಳಿ ಗಂಗಾಧರಪ್ಪ, ಗುರುಕುಮಾರ್ ಪಾಟೀಲ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT