ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿ ರಾಜಕಾರಣ ಪ್ರಜಾಪ್ರಭುತ್ವಕ್ಕೆ ಮಾರಕ

Last Updated 13 ಜುಲೈ 2012, 18:30 IST
ಅಕ್ಷರ ಗಾತ್ರ

ಬೆಂಗಳೂರು:  `ದೇಶ ಮತ್ತು ರಾಜ್ಯದಲ್ಲಿ ಇಂದು ಜಾತಿ ಆಧಾರದಲ್ಲಿ ರಾಜಕಾರಣ ನಡೆಯುತ್ತಿದ್ದು, ಈ ಬೆಳವಣಿಗೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ~ ಎಂದು ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅಭಿಪ್ರಾಯಪಟ್ಟರು.

ವಂಚನೆ ತಪಾಸಕರ ಸಂಸ್ಥೆಯ (ಅಸೋಸಿಯೇಷನ್ ಆಫ್ ಸರ್ಟಿಫೈಡ್ ಫ್ರಾಡ್ ಎಗ್ಸಾಮೈನರ್ಸ್‌- ಎಸಿಎಫ್‌ಇ) ಬೆಂಗಳೂರು ಶಾಖೆಯು ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಎರಡನೇ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, `ಜಾತಿ ಆಧಾರದಲ್ಲಿ ರಾಜಕಾರಣ ಮಾಡುವುದು ತಪ್ಪು. ಅದು ಸಂವಿಧಾನದ ಆಶಯಗಳಿಗೆ ವಿರುದ್ಧ~ ಎಂದರು.

ಇತ್ತೀಚಿನ ದಿನಗಳಲ್ಲಿ ಜೀವನ ಮೌಲ್ಯಗಳು ಕುಸಿಯುತ್ತಿದ್ದು, ಎಲ್ಲೆಡೆ ಭ್ರಷ್ಟಾಚಾರ ಮತ್ತು ವಂಚನೆ ಹೆಚ್ಚಾಗುತ್ತಿದೆ. ಈ ಸಾಮಾಜಿಕ ಪಿಡುಗುಗಳು ದೇಶದ ಅಭಿವೃದ್ಧಿಗೆ ಮಾರಕವಾಗಿವೆ. ಆದ್ದರಿಂದ ಧರ್ಮ-ಧರ್ಮಗಳ ನಡುವೆ, ಜನಾಂಗಗಳ ಮಧ್ಯೆ ಪ್ರೀತಿ ವಿಶ್ವಾಸದ ಸೇತುವೆ ನಿರ್ಮಿಸುವ ಕೆಲಸ ಮಾಡಬೇಕು. ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಖಾಸಗಿ ಸಂಘ ಸಂಸ್ಥೆಗಳು ಗಂಭೀರ ಪ್ರಯತ್ನ ನಡೆಸಬೇಕು ಎಂದು ಹೇಳಿದರು.

ಭಾರತ ಸಮೃದ್ಧ ರಾಷ್ಟ್ರವಾಗಿದೆ. ದೇಶದಲ್ಲಿ ನೈಸರ್ಗಿಕ ಸಂಪತ್ತು, ಮಾನವ ಸಂಪನ್ಮೂಲ ಹೇರಳವಾಗಿದೆ. ಈ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಗುಣಮಟ್ಟದ ತನಿಖೆ, ಪ್ರಕರಣಗಳ ಶೀಘ್ರ ವಿಚಾರಣೆ ಮತ್ತು ಅಪರಾಧಿಗಳಿಗೆ ಬೇಗನೆ ಶಿಕ್ಷೆಯಾಗುವುದು ಬಹಳ ಮುಖ್ಯ. ಈ ನಿಟ್ಟಿನಲ್ಲಿ ಸರ್ಕಾರ, ತನಿಖಾ ಸಂಸ್ಥೆಗಳ ನೆರವು ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

ದೇಶದಲ್ಲಿ ಶಾಸಕಾಂಗ ಹಾಗೂ ಕಾರ್ಯಾಂಗಕ್ಕಿಂತ ನ್ಯಾಯಾಂಗದ ಮೇಲೆ ಜನರಿಗೆ ಹೆಚ್ಚಿನ ನಂಬಿಕೆ ಇದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು. ಆದ್ದರಿಂದ ನ್ಯಾಯಾಧೀಶರು ಪ್ರಾಮಾಣಿಕರಾಗಿರಬೇಕು.

ರಾಜ್ಯ ಸರ್ಕಾರ ಲೋಕಾಯುಕ್ತ ಸಂಸ್ಥೆಯನ್ನು ನಿಷ್ಕ್ರಿಯಗೊಳಿಸಬಾರದು. ಆದಷ್ಟು ಬೇಗ ಲೋಕಾಯುಕ್ತರನ್ನು ನೇಮಿಸಬೇಕು ಎಂದು ಶಿವರಾಜ್ ಪಾಟೀಲ್ ಸಲಹೆ ನೀಡಿದರು.ಎಸಿಎಫ್‌ಇ ಸಂಸ್ಥೆಯ ಬೆಂಗಳೂರು ಶಾಖೆ ಅಧ್ಯಕ್ಷ ಸಾಕೇತ್ ಭಾರ್ತಿಯಾ, ಬೆಂಗಳೂರು ದೂರದರ್ಶನ ಕೇಂದ್ರದ ಉಪ ಮಹಾನಿರ್ದೇಶಕ ಡಾ.ಮಹೇಶ್‌ಜೋಷಿ ಇತರರು ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT