ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಅಧಿಕಾರ ಸ್ವೀಕಾರ

Last Updated 1 ಫೆಬ್ರುವರಿ 2011, 9:05 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಟಿ. ಪ್ರದೀಪ್ ಅವರ ಅಧಿಕಾರ ಸ್ವೀಕಾರ ಸಮಾರಂಭ ಫೆ. 2ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕಾವೇರಿ ಹಾಲ್‌ನಲ್ಲಿ ನಡೆಯಲಿದೆ.

ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಸಂಸದ ಎಚ್. ವಿಶ್ವನಾಥ್, ನಟ ಅಂಬರೀಶ್, ವಿಧಾನ ಪರಿಷತ್‌ನ ಮಾಜಿ ಸಭಾಪತಿ ಬಿ.ಎಲ್. ಶಂಕರ್, ಶಾಸಕರಾದ ದಿನೇಶ್ ಗುಂಡೂರಾವ್, ಎನ್.ಎ. ಹ್ಯಾರಿಸ್, ಪಕ್ಷದ ಕೊಡಗು ಜಿಲ್ಲಾ ಉಸ್ತುವಾರಿ ವಹಿಸಿಕೊಂಡಿರುವ ತನ್ವೀರ್‌ಸೇಟ್, ಮಾಜಿ ಸಚಿವೆ ರಾಣಿ ಸತೀಶ್ ಸೇರಿದಂತೆ ಪಕ್ಷದ ಅನೇಕ ಮುಖಂಡರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿ.ಟಿ. ಪ್ರದೀಪ್ ಸೋಮವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಅಂದು ಬೆಳಿಗ್ಗೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. ಆನಂತರ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅಲ್ಲಿಯೇ ಪಕ್ಷದ ಮುಖಂಡರನ್ನು ಸ್ವಾಗತಿಸಲಾಗುವುದು. ಆನಂತರ ಮೇಜರ್ ಮಂಗೇರಿರ ಮುತ್ತಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅಲ್ಲಿಂದ ಮುಖ್ಯರಸ್ತೆ, ಕಾಲೇಜು ರಸ್ತೆಯ ಮೂಲಕ ಕಾವೇರಿ ಹಾಲ್‌ವರೆಗೆ ಮೆರವಣಿಗೆಯಲ್ಲಿ ತೆರಳಲಾಗುವುದು ಎಂದರು.

ಕಾವೇರಿ ಹಾಲ್‌ನಲ್ಲಿ ಸಭಾ ಕಾರ್ಯಕ್ರಮ ಹಾಗೂ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ. ಕೊಡಗಿನ ಮಾಜಿ ಸಚಿವರಾದ ಟಿ. ಜಾನ್, ಎಂ.ಎಂ. ನಾಣಯ್ಯ, ಸುಮಾ ವಸಂತ್, ಮುಖಂಡರಾದ ಮಿಟ್ಟು ಚಂಗಪ್ಪ, ಜೆ.ಎ. ಕರುಂಬಯ್ಯ, ಸಿ.ಎಸ್. ಅರುಣ್ ಮಾಚಯ್ಯ, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷೆ ವೀಣಾ ಅಚ್ಚಯ್ಯ, ಕೆಪಿಸಿಸಿ ಸದಸ್ಯರಾದ ಕೆ.ಪಿ. ಚಂದ್ರಕಲಾ, ಟಿ.ಪಿ. ರಮೇಶ್, ನಾಮನಿರ್ದೇಶಿತ ಸದಸ್ಯರಾದ ತಾರಾ ಅಯ್ಯಮ್ಮ, ಪದ್ಮಿನಿ ಪೊನ್ನಪ್ಪ ಅವರನ್ನೂ ಸಮಾರಂಭಕ್ಕೆ ಆಹ್ವಾನಿಸಲಾಗಿದೆ ಎಂದರು.

ಎರಡು ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ: ಸಮಾರಂಭದಲ್ಲಿ ಮೂರು ತಾಲ್ಲೂಕುಗಳಿಂದ ಸುಮಾರು ಎರಡು ಸಾವಿರ ಮಂದಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

ಗೋಣಿಕೊಪ್ಪಲು ಹಾಗೂ ಪೊನ್ನಂಪೇಟೆ ಗ್ರಾಮ ಪಂಚಾಯ್ತಿ ಚುನಾವಣೆ ಮುಗಿದ ನಂತರ ಬ್ಲಾಕ್ ಮತ್ತು ವಲಯ ಅಧ್ಯಕ್ಷರಿಗೆ ಅಧಿಕಾರ ನೀಡಲಾಗುವುದು. ಪಕ್ಷದಿಂದ ದೂರ ಉಳಿದವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಸಂಬಂಧ ವಲಯ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಜತೆ ಚರ್ಚಿಸಿದ ನಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯಲ್ಲಿ ಚರ್ಚೆ ಮಾಡಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಏಕಪಕ್ಷೀಯ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಗೋಣಿಕೊಪ್ಪಲು ಹಾಗೂ ಪೊನ್ನಂಪೇಟೆ ಗ್ರಾಮ ಪಂಚಾಯ್ತಿ ಚುನಾವಣೆಗಳಲ್ಲಿ ಹೆಚ್ಚು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಅವರು, ಫೆ. 2ರಂದು ಅಧಿಕಾರ ಸ್ವೀಕಾರ ಸಮಾರಂಭ ಮುಗಿದ ನಂತರ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರನ್ನು ಗೋಣಿಕೊಪ್ಪಲು ಹಾಗೂ ಪೊನ್ನಂಪೇಟೆ ಕಚೇರಿಗೆ ಕರೆದೊಯ್ಯಲು ಚಿಂತಿಸಲಾಗುತ್ತಿದೆ. ಆದರೆ, ಅಂದು ಸಂಜೆ ಕೆಪಿಸಿಸಿ ಅಧ್ಯಕ್ಷರು ದೆಹಲಿಗೆ ತೆರಳುವ ಕಾರ್ಯಕ್ರಮವಿದೆ. ಉದ್ದೇಶಿತ ಈ ಕಾರ್ಯಕ್ರಮದಲ್ಲಿ ಬದಲಾವಣೆಯಾದಲ್ಲಿ ಮಾತ್ರ ಗೋಣಿಕೊಪ್ಪಲು ಹಾಗೂ ಪೊನ್ನಂಪೇಟೆಗಳಿಗೆ ಕೆಪಿಸಿಸಿ ಅಧ್ಯಕ್ಷರನ್ನು ಕರೆದೊಯ್ಯಲು ಸಾಧ್ಯವಾಗಲಿದೆ ಎಂದರು.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನೂ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ನವದೆಹಲಿಯಲ್ಲಿ ಅಂದು ಕಾರ್ಯಕ್ರಮ ನಿಗದಿಯಾಗಿರುವುದರಿಂದ ಅವರು ಸಮಾರಂಭದಲ್ಲಿ ಭಾಗವಹಿಸುವುದು ಇನ್ನೂ ಖಚಿತವಾಗಿಲ್ಲ ಎಂದು ಪ್ರದೀಪ್ ತಿಳಿಸಿದರು.ವಿರಾಜಪೇಟೆ ತಾಲ್ಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷ ದೇವಲಿಂಗಯ್ಯ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೊಲ್ಯದ ಗಿರೀಶ್ ಹಾಗೂ ಮುಖಂಡ ಅಬ್ದುಲ್ ರೆಹಮಾನ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT