ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ

ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭರವಸೆ
Last Updated 16 ಜನವರಿ 2013, 8:53 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ರಾಜಧಾನಿ ಬೆಂಗಳೂರಿಗೆ ಹತ್ತಿರದಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಗೆ ಮೂಲಸೌಕರ್ಯಗಳನ್ನು ಕಲ್ಪಿಸಿ ಮತ್ತು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿ, ಇಡೀ ಪ್ರದೇಶವನ್ನು ಅಭಿವೃದ್ಧಿಪಡಿಸಲಾಗುವುದು. ತೀವ್ರ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭರವಸೆ ನೀಡಿದರು.

ನಗರದ ನಂದಿ ರಂಗಮಂದಿರದ ಆವರಣದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಮಿನಿ ವಿಧಾನಸೌಧ, ವಿವಿಧ ಇಲಾಖೆಗಳ ನೂತನ ಕಟ್ಟಡಗಳ ಉದ್ಘಾಟನೆ ಮತ್ತು ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, `ಚಿಕ್ಕಬಳ್ಳಾಪುರ ನೆರೆ ರಾಜ್ಯದ ಗಡಿಭಾಗದಲ್ಲಿದ್ದು, ಅಭಿವೃದ್ಧಿಪಡಿಸಲೇಬೇಕಾದ ಅಗತ್ಯವಿದೆ' ಎಂದರು.

`ಆಂಧ್ರಪ್ರದೇಶದ ಗಡಿಭಾಗದಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯು ಹಲವಾರು ವರ್ಷಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಬೇರೆ ಬೇರೆ ಜಿಲ್ಲೆಗಳು ಅಭಿವೃದ್ಧಿಯಾಗಿವೆಯಾದರೂ ಗಡಿಭಾಗದ ಜಿಲ್ಲೆಗಳು ಅಭಿವೃದ್ಧಿಯಾಗಿಲ್ಲ. ಚಿಕ್ಕಬಳ್ಳಾಪುರ ಪ್ರಧಾನವಾಗಿರಿಸಿಕೊಂಡು ಇಡೀ ಪ್ರದೇಶವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು' ಎಂದು ಅವರು ತಿಳಿಸಿದರು.

`ಚಿಕ್ಕಬಳ್ಳಾಪುರದೊಂದಿಗೆ ಕೋಲಾರ ಮತ್ತು ತುಮಕೂರು ಜಿಲ್ಲೆಗಳನ್ನು ಅಭಿವೃದ್ಧಿಪಡಿಸಿ, ಬೆಂಗಳೂರಿನ ಮೇಲೆ ಹೆಚ್ಚುತ್ತಿರುವ ಒತ್ತಡ ನಿವಾರಿಸಲಾಗುವುದು. ಬೆಂಗಳೂರಿಗೆ ಸಮಾನವಾಗಿ ಸೌಕರ್ಯಗಳನ್ನು ಪೂರೈಸಿ ಅಭಿವೃದ್ಧಿಪಡಿಸಲಾಗುವುದು. ಎಲ್ಲ ಪ್ರದೇಶಗಳು ಅಭಿವೃದ್ಧಿಪಡಿಸದಿದ್ದರೆ, ಇಡೀ ಕರ್ನಾಟಕ ಸೊರಗುತ್ತದೆ. ಯಾವುದೇ ರೀತಿಯ ಭೇದಭಾವ ಮಾಡದೇ ಮತ್ತು ತಾರತಮ್ಯ ತೋರದೇ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಪೂರೈಸಿ ಹಂತಹಂತವಾಗಿ ಅಭಿವೃದ್ಧಿಪಡಿಸಲಾಗುವುದು' ಎಂದು ಅವರು ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವರಾಗಿದ್ದಾಗ ಜಿಲ್ಲೆಗೆ ಭೇಟಿ ನೀಡಿದ್ದನ್ನು ನೆನಪಿಸಿಕೊಂಡ ಅವರು, `ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಗೊಳಿಸಲು ಮತ್ತು ವಿವಿಧ ಯೋಜನೆಗಳನ್ನು ಜಾರಿಗೆ ತರಲು ಆಗಲೇ ಪ್ರಯತ್ನಿಸಿದ್ದೆ. ಅಧಿಕಾರಿಗಳೊಂದಿಗೆ ಚರ್ಚೆ ಕೂಡ ನಡೆಸಿದ್ದೆ. ಎಸ್.ಎಸ್.ಕೃಷ್ಣ ಸರ್ಕಾರದ ಅವಧಿಯಲ್ಲಿ ವಿರೋಧಪಕ್ಷದ ನಾಯಕನಾಗಿದ್ದ ನಾನು ರಾಜ್ಯ ಸರ್ಕಾರದ ನಿಯೋಗದೊಂದಿಗೆ ನವದೆಹಲಿಗೆ ತೆರಳಿ ಶಾಶ್ವತ ನೀರಾವರಿ ಯೋಜನೆ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಕೂಡ ಹೇರಿದ್ದೆ' ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಎ.ನಾರಾಯಣಸ್ವಾಮಿ ಮಾತನಾಡಿ, `ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಹೆಚ್ಚಿನ ಅನುದಾನವನ್ನು ಚಿಕ್ಕಬಳ್ಳಾಪುರ ಜಿಲ್ಲೆಗೆ ಬಿಡುಗಡೆ ಮಾಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಡಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಇನ್ನಷ್ಟು ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು' ಎಂದರು. ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು. ಗಾಯಕ ಮಹಾಲಿಂಗಯ್ಯ ಮಠದ ಮತ್ತು ಸಂಗಡಿಗರು ನಾಡಗೀತೆ ಮತ್ತು ರೈತಗೀತೆ ಹಾಡಿದರು.

ಕೇಂದ್ರ ಸಚಿವ ವೀರಪ್ಪ ಮೊಯಿಲಿ, ವಸತಿ ಸಚಿವ ವಿ.ಸೋಮಣ್ಣ, ಶಾಸಕರಾದ ಕೆ.ಪಿ.ಬಚ್ಚೇಗೌಡ, ವಿ.ಮುನಿಯಪ್ಪ, ಎನ್.ಸಂಪಂಗಿ, ಡಾ. ಎಂ.ಸಿ.ಸುಧಾಕರ್, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ವೀರಯ್ಯ, ವೈ.ಎ.ನಾರಾಯಣಸ್ವಾಮಿ, ಪ್ರೊ. ಮುಮ್ತಾಜ್ ಅಲಿ ಖಾನ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಆರ್.ನರಸಿಂಹಮೂರ್ತಿ, ಉಪಾಧ್ಯಕ್ಷ ಎನ್.ಅಶ್ವತ್ಥಪ್ಪ, ಜಿಲ್ಲಾ ಉಸ್ತುವಾರಿ ಕಾರ್ಯದರ್ಸಿ ಎನ್.ಸಿ.ಮುನಿಯಪ್ಪ, ಜಿಲ್ಲಾಧಿಕಾರಿ ಡಾ. ಎನ್.ಮಂಜುಳಾ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಬಿ.ಎಸ್.ಶೇಖರಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

`ನಾನೇ ಬಜೆಟ್ ಮಂಡಿಸುತ್ತೇನೆ'
ಚಿಕ್ಕಬಳ್ಳಾಪುರ:
`ಯಾವುದೇ ರೀತಿಯ ಅಡ್ಡಿ-ಆತಂಕವಿಲ್ಲದೇ ಈ ಬಾರಿ ಬಜೆಟ್ ಮಂಡಿಸಲಿದ್ದೇನೆ. ಬಜೆಟ್‌ನಲ್ಲಿ ರೈತರ, ಬಡವರ ಮತ್ತು ದೀನದಲಿತರ ಕಲ್ಯಾಣಕ್ಕೆ ಪ್ರಥಮ ಆದ್ಯತೆ ನೀಡಲಾಗುವುದು. ಜನಪರ ಬಜೆಟ್ ಮಂಡಿಸಿ, ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು' ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದರು.

ನಗರದಲ್ಲಿ ಮಂಗಳವಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ರಾಜ್ಯ ಸರ್ಕಾರವು ತನ್ನ ಆಡಳಿತಾವಧಿಯನ್ನು ನಿರಾತಂಕವಾಗಿ ಪೂರೈಸಲಿದ್ದು, ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ' ಎಂದು ಸ್ಪಷ್ಟಪಡಿಸಿದರು.

`ನಮ್ಮ ಸರ್ಕಾರವು ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಹಲವಾರು ಜನಪರ ಕಾರ್ಯಗಳನ್ನು ಕೈಗೊಂಡಿದೆ. ಅವುಗಳ ಆಧಾರದ ಮೇಲೆಯೇ ನಾವು ಮುಂದಿನ ವಿಧಾನಸಭಾ ಚುನಾವಣೆ ಎದುರಿಸುತ್ತೇವೆ. ಜನರಿಗೆ ನಮ್ಮ ಸಾಧನೆಗಳನ್ನು ತಿಳಿಸಿ, ಮತಯಾಚಿಸಲಿದ್ದೇವೆ' ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT