ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಲ್ಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆ

Last Updated 7 ಫೆಬ್ರುವರಿ 2012, 5:25 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ತಾಲ್ಲೂಕಿನಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಜನಪ್ರತಿನಿಧಿಗಳಿಗೆ ಯಾವುದೇ ಮಾಹಿತಿ ನೀಡುತ್ತಿಲ್ಲ ಎಂದು ತಾ.ಪಂ. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಅರುಣ್ ಭೀಮಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಇಲ್ಲಿನ ಆರ್‌ಎಂಸಿ ಸಭಾಂಗಣದಲ್ಲಿ ತಾ.ಪಂ. ಅಧ್ಯಕ್ಷ ಎಚ್.ಕೆ. ದಿನೇಶ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಭಾಗ್ಯಲಕ್ಷ್ಮಿ ಬಾಂಡ್ ವಿತರಣೆ ಸೇರಿದಂತೆ ಇತರೇ ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಯಾವುದೇ ಮಾಹಿತಿ ಲಭಿಸುತ್ತಿಲ್ಲ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಎಂದು ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ಸದಾಶಿವಯ್ಯ ವಿರುದ್ಧ ಹರಿಹಾಯ್ದರು.

ಆರೊಗ್ಯ ರಕ್ಷಾ ಕವಚ ಸೌಲಭ್ಯಗಳನ್ನು ಕೇವಲ ಒಂದೇ ವರ್ಗದವರಿಗೆ ನೀಡುತ್ತಿರುವ ದೂರುಗಳು ಕೇಳಿ ಬರುತ್ತಿವೆ. ಕೆಲವು ಗ್ರಾಮಗಳಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಕೆಟ್ಟು ಹೋಗಿವೆ. ಆದರೂ ಸೆ  ಅವುಗಳ ದುರಸ್ತಿಗೆ ಕ್ರಮ ಕೈಗೊಂಡಿಲ್ಲ. ವಿದ್ಯುತ್ ಸಮಸ್ಯೆ ಸರಿಪಡಿಸಿದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ತಿತಿಮತಿ ಗಿರಿಜನ ಮಹಿಳಾ ವಸತಿ ನಿಲಯದ ಕಟ್ಟಡ  ಕಾಮಗಾರಿ ಅರ್ಧಕ್ಕೆ ನಿಂತಿದೆ. ಅದನ್ನು ಪೂರ್ಣಗೊಳಿಸಲು ನಿರ್ಮಿತಿ ಕೇಂದ್ರದವರು ಆಸಕ್ತಿ ವಹಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.

ಲೋಕೋಪಯೋಗಿ ಎಂಜಿನಿಯರ್ ಶಂಕರಪ್ಪ ನಾಯ್ಕೋಡ್ ಮಾತನಾಡಿ, ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗಿದೆ. ಆದ್ಯತೆ ಮೇರೆಗೆ ಕಾಮಗಾರಿ ಕೈಗೊಳ್ಳಲಾಗುವುದು. ತಾಲ್ಲೂಕಿನ ಎಲ್ಲ ರಸ್ತೆಗಳ ಕಾಮಗಾರಿ ಮಳೆಗಾಲಕ್ಕೂ ಮುನ್ನವೇ ಪೂರ್ಣಗೊಳಿಸಲಾಗುವುದು ಎಂದರು. ತೋಟಗಾರಿಕಾ ಇಲಾಖೆ ಅಧಿಕಾರಿ ದೇವಕಿ ಮಾತನಾಡಿ, ಕಿತ್ತಳೆ ಸಸಿಗೆ ಭಾರಿ ಬೇಡಿಕೆ ಬಂದಿದೆ. ತಕ್ಷಣವೇ 40 ಸಾವಿರ ಸಸಿಗಳ ಅಗತ್ಯವಿದೆ. ಇದರ ಪೂರೈಕೆಗೆ  ಕ್ರಮ ಕೈಗೊಳ್ಳಲಾಗಿದೆ ಎಂದರು.

ತಾಲ್ಲೂಕಿನಲ್ಲಿ ಕೇವಲ ಒಂದೇ 108 ಅಬುಲೆನ್ಸ್ ವಾಹನವಿದೆ. ವಿರಾಜಪೇಟೆಗೆ ಮತ್ತೊಂದು ವಾಹನ ಒದಗಿಸಲು ಕ್ರಮಕೈಗೊಳ್ಳಬೇಕು. ಹುಣಸೂರು ತಾಲ್ಲೂಕಿನಲ್ಲಿ ಎರಡು ಅಂಬುಲೆನ್ಸ್ ಒದಗಿಸಲಾಗಿದೆ. ಅದರಂತೆ ವಿರಾಜಪೇಟೆ ತಾಲ್ಲೂಕಿಗೂ ಎರಡು ವಾಹನ ಅಗತ್ಯವಿದೆ ಎಂದು ಅಧ್ಯಕ್ಷ ದಿನೇಶ್ ಹೇಳಿದರು.

ಇದಕ್ಕೆ ಉತ್ತರಿಸಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಯತಿರಾಜ್, ಜನಸಂಖ್ಯೆಗೆ ಅನುಗುಣವಾಗಿ 108 ವಾಹನ ಒದಗಿಸಲಾಗಿದೆ. ಇಲ್ಲಿಯೂ ಹೆಚ್ಚಿನ ಬೇಡಿಕೆ ಇದ್ದರೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು. ತುರ್ತು ಸಂದರ್ಭದಲ್ಲಿ ಅಮ್ಮತ್ತಿಯಿಂದ ಹೆಚ್ಚುವರಿ ಅಬುಲೆನ್ಸ್ ತರಿಸಲಾಗುತ್ತಿದೆ ಎಂದರು. ಉಪಾಧ್ಯಕ್ಷೆ ಧರಣಿ ಕಟ್ಟಿ, ಕಾರ್ಯನಿರ್ವಾಹಣಾಧಿಕಾರಿ ಕಾಂತರಾಜ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT