ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

Last Updated 21 ಸೆಪ್ಟೆಂಬರ್ 2013, 5:37 IST
ಅಕ್ಷರ ಗಾತ್ರ

ಕುಶಾಲನಗರ: ಓದಿನೊಂದಿಗೆ ಕ್ರೀಡೆಯಲ್ಲಿ ಭಾಗವಹಿಸಿ ಉನ್ನತ ಮಟ್ಟಕ್ಕೇರಲು ಅವಕಾಶವಿರುವುದರಿಂದ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ. ಶಿವಪ್ಪ ಕರೆ ನೀಡಿದರು.

ಕೊಡಗು ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯ ಕ್ರೀಡಾ ಸಂಘಗಳ ಸಂಯುಕ್ತಾಶ್ರಯದಲ್ಲಿ ಬುಧವಾರ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ನೀಡಿದ ಕೊಡಗು ಜಿಲ್ಲೆಯಲ್ಲಿ ವಿವಿಧ ಕ್ರೀಡೆಗಳಲ್ಲಿ ಸಾಧನೆ ಮಾಡುವವರಿಗೆ ಕೊರತೆಯಿಲ್ಲ. ಆದರೆ ಅವರನ್ನು ಗುರುತಿಸಿ ಬೆಳೆಸಬೇಕಾದ ಜವಾಬ್ದಾರಿ ಶಿಕ್ಷಕರು, ಇಲಾಖೆ ಮತ್ತು ಸರ್ಕಾರಗಳ ಮೇಲೆ ಇದೆ ಎಂದರು.

ಕ್ರೀಡಾಜ್ಯೋತಿ ಬೆಳಗಿಸಿದ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಬಿ. ಭಾರತೀಶ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದೊಂದಿಗೆ ಕ್ರೀಡೆಯಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಮಾನಸಿಕ ಸದೃಢತೆ ಹೊಂದಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಅರೆಯೂರು ಜಯಣ್ಣ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ತಾಲ್ಲೂಕಿನ ವಿವಿಧ ಶಾಲೆಗಳಿಂದ ನೂರಾರು ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿದ್ದರು. ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ ಕಬಡ್ಡಿ, ಥ್ರೋಬಾಲ್, ವಾಲಿಬಾಲ್ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆದವು.

ಅಧ್ಯಕ್ಷತೆ ವಹಿಸಿದ್ದ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಎ. ಉಸ್ಮಾನ್ ಕ್ರೀಡಾಕೂಟದ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಅಭಿನಂದನೆ ಸಲ್ಲಿಸಿದರು.

ಜಿಲ್ಲಾ ಫುಟ್‌ಬಾಲ್ ಸಂಸ್ಥೆ ಅಧ್ಯಕ್ಷ ಎ. ಲೋಕೇಶ್ ಕುಮಾರ್ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ವೈ.ಎಂ. ಕರುಂಬಯ್ಯ, ಪ್ರಾಂಶುಪಾಲರಾದ ಡಾ. ಎಂ.ವಿ. ರಮಾ, ತಾಲ್ಲೂಕು ದೈಹಿಕ ಶಿಕ್ಷಣ ಅಧೀಕ್ಷಕಿ ಎ.ಎಂ. ಕಾವೇರಮ್ಮ, ಕಾಲೇಜು ಪ್ರಾಂಶುಪಾಲ ಬಾಲಕೃಷ್ಣ, ಜಿಲ್ಲಾ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್  ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT