ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಪ್ಪಗೊಂಡನಹಳ್ಳಿ ಜಲಾಶಯ ಮಲಿನ: ಪರಿಶೀಲನೆಗೆ ಸಮಿತಿ

Last Updated 26 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಕಲುಷಿತ ನೀರು ತಿಪ್ಪಗೊಂಡನಹಳ್ಳಿ ಜಲಾಶಯ ಸೇರುತ್ತಿರುವ ಬಗ್ಗೆ ಪರಿಶೀಲನೆ ನಡೆಸಲು ಉನ್ನತ ಸಮಿತಿ ರಚಿಸಲಾಗುವುದು. ಒಂದೆರಡು ವಾರದಲ್ಲಿ ಸಮಿತಿ, ಸಭೆ ಸೇರಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ~ ಎಂದು ಬೆಂಗಳೂರು ಜಲಮಂಡಲಿ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.

ಜಲಾಶಯ ಕಲುಷಿತಗೊಂಡಿದೆ ಎಂಬ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸೋಮವಾರ ಶಾಸಕ ನೆ.ಲ.ನರೇಂದ್ರ ಬಾಬು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. 

`ಜಲಾಶಯಕ್ಕೆ ಕೈಗಾರಿಕಾ ಮಾಲಿನ್ಯ ಹರಿದು ಬರುತ್ತಿರುವ ಬಗ್ಗೆ ಪರಿಶೀಲನೆ ನಡೆಸಲು ಉನ್ನತಾಧಿಕಾರಿಗಳನ್ನು ನೇಮಿಸಲಾಗುವುದು. ಕೈಗಾರಿಕಾ ಇಲಾಖೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಲಿ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾಡಳಿತ, ಕೆ.ಐ.ಎ.ಡಿ.ಬಿ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಬೆಂಗಳೂರು ಜಲಮಂಡಲಿ ಅಧಿಕಾರಿಗಳನ್ನು ಒಳಗೊಂಡ ಸಮಿತಿ ಅಧ್ಯಯನ ನಡೆಸಲಿದೆ~ ಎಂದು ಹೇಳಿದರು.

`ಜಲಾಶಯದ ನೀರನ್ನು ಸಂಸ್ಕರಿಸಿ ನಗರಕ್ಕೆ ನೀರು ಸರಬರಾಜು ಮಾಡಲಾಗುತ್ತಿದೆ. ನೀರು ಶುದ್ಧವಾಗಿದ್ದು ನಾಗರಿಕರು ಆತಂಕಪಡುವ ಅಗತ್ಯವಿಲ್ಲ~ ಎಂದರು. ನಗರ ಜಿಲ್ಲಾಧಿಕಾರಿ ಎಂ.ಕೆ.ಅಯ್ಯಪ್ಪ ಮಾತನಾಡಿ, `ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಅರ್ಕಾವತಿ ನದಿ ಪಾತ್ರದಲ್ಲಿ ಅತಿಕ್ರಮಣವಾಗಿದ್ದ 13 ಎಕರೆ ಭೂಮಿಯನ್ನು ತೆರವುಗೊಳಿಸಲಾಗಿದೆ. ಈ ಪ್ರದೇಶದಲ್ಲಿ ನಿರ್ಮಾಣವಾಗಬೇಕಿದ್ದ 24 ಬಡಾವಣೆಗಳಿಗೆ ತಡೆ ಹಿಡಿಯಲಾಗಿದೆ. ನದಿ ಸುತ್ತಮುತ್ತ ಇನ್ನೂ ಅತಿಕ್ರಮಣಗೊಂಡಿರುವ ಭೂಮಿಯನ್ನು ತೆರವುಗೊಳಿಸಲಾಗುವುದು~ ಎಂದರು.

ಶಾಸಕ ನೆ.ಲ.ನರೇಂದ್ರಬಾಬು ಮಾತನಾಡಿ `ಸಚಿವರು ಭರವಸೆ ನೀಡಿರುವುದು ಸಂತಸದ ವಿಚಾರ. ಇದು ಇಷ್ಟಕ್ಕೇ ನಿಲ್ಲಬಾರದು. ತ್ಯಾಜ್ಯ ನೀರು ಸೇರುತ್ತಿರುವ ಬಗ್ಗೆ ದಾಖಲೆಗಳಿವೆ. ಶುದ್ಧ ನೀರನ್ನು ನಗರಕ್ಕೆ ಪೂರೈಸಲು ಅಗತ್ಯ ಕ್ರಮಕೈಗೊಳ್ಳಬೇಕು~ ಎಂದರು.  ಜಲಮಂಡಲಿ ಅಧ್ಯಕ್ಷ ಪಿ.ಬಿ.ರಾಮಮೂರ್ತಿ, ಪ್ರಧಾನ ಎಂಜಿನಿಯರ್ ಟಿ.ವೆಂಕಟರಾಜು, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಲಿಯ ಸದಸ್ಯ ಕಾರ್ಯದರ್ಶಿ ಎಸ್.ಎಂ. ಪುಟ್ಟಬುದ್ದಿ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT