ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಳ ಯುವ ಘಟಕಕ್ಕೆ ಮಧು ಅಧ್ಯಕ್ಷ

Last Updated 18 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್ ರಾಜ್ಯ ಯುವ ಘಟಕದ ನೂತನ ಅಧ್ಯಕ್ಷರನ್ನಾಗಿ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಕಟಿಸಿದರು.

ಗೋಲ್ಡನ್ ಪಾಮ್ ರೆಸಾರ್ಟ್‌ನಲ್ಲಿ ಬುಧವಾರ ನಡೆದ ಹಿರಿಯ ಮುಖಂಡರ ಸಭೆ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಕ್ಕೆ ಸೆಳೆಯುವ ಮೂಲಕ ಕೆಳ ಹಂತದಿಂದ ಪಕ್ಷವನ್ನು ಸಂಘಟಿಸಲು ನಿರ್ಧರಿಸಲಾಗಿದ್ದು, ನೂತನ ಅಧ್ಯಕ್ಷರು ಈ ನಿಟ್ಟಿನಲ್ಲಿ ಕಾರ್ಯೊನ್ಮುಖರಾಗಲಿದ್ದಾರೆ ಎಂದರು.

ಸಂತಸ: `ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ಸಂತಸವಾಗಿದೆ. ಕೆಲ ದಿನಗಳ ಹಿಂದೆ ಕುಮಾರ್ ಬಂಗಾರಪ್ಪ ನನ್ನನ್ನು ಕಾಂಗ್ರೆಸ್‌ಗೆ ಆಹ್ವಾನಿಸಿದ್ದರು. ಆದರೆ ತಾವು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಕುಮಾರ್ ಕಾಂಗ್ರೆಸ್‌ನಲ್ಲಿ ಅವರ ಸ್ಥಾನವನ್ನು ಭದ್ರಪಡಿಸಿಕೊಳ್ಳಲಿ~ ಎಂದು ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದರು.

`ಪಕ್ಷ ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ವಿಶ್ವಾಸವಿದೆ. ರಾಜ್ಯದಾದ್ಯಂತ ಪ್ರವಾಸ ಮಾಡಿ ಪಕ್ಷದ ಸಂಘಟನೆಯಲ್ಲಿ ತೊಡಗುತ್ತೇನೆ. ಯುವಕರನ್ನು ಸಂಘಟಿಸಿ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ~ ಎಂಬುದಾಗಿ ಅವರು ಹೇಳಿದರು.

ಪೂಜಾ ಗಾಂಧಿ ಸೇರ್ಪಡೆ: ಚಲನಚಿತ್ರ ನಟಿ ಪೂಜಾ ಗಾಂಧಿ ಅವರು ಬುಧವಾರ ಜೆಡಿಎಸ್‌ಗೆ ಸೇರ್ಪಡೆಯಾಗುವ ಮೂಲಕ ರಾಜಕೀಯ ಕ್ಷೇತ್ರ ಪ್ರವೇಶಿಸಿದರು.

ನಗರದ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾಜಿ ಸಚಿವ ಎಂ.ಸಿ.ನಾಣಯ್ಯ, ಪಕ್ಷದ ಮುಖಂಡ ಸಿ.ನಾರಾಯಣ ಸ್ವಾಮಿ ಅವರು ಪಕ್ಷದ ಬಾವುಟ ನೀಡಿ ಪೂಜಾಗಾಂಧಿ ಅವರನ್ನು ಬರ ಮಾಡಿಕೊಂಡರು. ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿರೆಡ್ಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪಕ್ಷಕ್ಕೆ ಸೇರ್ಪಡೆಗೊಂಡ ನಂತರ ಮಾತನಾಡಿದ ಪೂಜಾ ಗಾಂಧಿ, `ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರದಲ್ಲಿ ಇದ್ದಾಗ ಮಾಡಿರುವ ಅಭಿವೃದ್ಧಿ ಕಾರ್ಯಗಳು ಜೆಡಿಎಸ್‌ಗೆ ಸೇರುವಂತೆ ನನ್ನನ್ನು ಪ್ರೇರಿಪಿಸಿದವು. ಹೀಗಾಗಿ ಆ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ~ ಎಂದರು.

`ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗುತ್ತೇನೆ. ರಾಜ್ಯದಾದ್ಯಂತ ಹೋರಾಟದಲ್ಲೂ ಭಾಗವಹಿಸುತ್ತೇನೆ~ ಎಂಬುದಾಗಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT