ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾರಿ ತಪ್ಪಿಸುತ್ತಿರುವ ಕಾಂಗ್ರೆಸ್: ಆರೋಪ

Last Updated 4 ಮೇ 2012, 7:35 IST
ಅಕ್ಷರ ಗಾತ್ರ

ಹೊನ್ನಾಳಿ: ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರ ರಾಜಕೀಯ ಬೆಳವಣಿಗೆ ಸಹಿಸಲಾರದೇ ಕಾಂಗ್ರೆಸ್ ಮುಖಂಡರು ತಾಲ್ಲೂಕಿನ ಅಮಾಯಕ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ.

ಸಕಾರಣ ಇಲ್ಲದೇ ಸೋಮವಾರ ತಾಲ್ಲೂಕು ಪಂಚಾಯ್ತಿ ಎದುರು ಪ್ರತಿಭಟನೆ ನಡೆಸುವ ಮೂಲಕ ಅಧಿಕಾರಿಗಳಿಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ತಾಲ್ಲೂಕು ಬಿಜೆಪಿ ಅಧ್ಯಕ್ಷ ಶಾಂತರಾಜ್ ಪಾಟೀಲ್ ಬಲಮುರಿ ಆರೋಪಿಸಿದರು.

ಸೂರು ಇಲ್ಲದ ಬಡವರಿಗೆ ಸೂರು ಒದಗಿಸಬೇಕು ಎಂಬ ಸದುದ್ದೇಶದಿಂದ ರೇಣುಕಾಚಾರ್ಯ ಗ್ರಾಮಗಳಿಗೆ ತೆರಳಿ ಸಭೆಗಳನ್ನು ನಡೆಸುತ್ತಿದ್ದಾರೆ. ಇದನ್ನು ಕಾಂಗ್ರೆಸ್ ತಪ್ಪಾಗಿ ಅರ್ಥೈಸಿಕೊಂಡಿದೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.

ತಾಲ್ಲೂಕಿನ ಅರಕೆರೆ ಗ್ರಾಮದಲ್ಲಿ ಈಚೆಗೆ ನಡೆದ ಸಭೆಯಲ್ಲಿ ಕಾಂಗ್ರೆಸ್ ಬೆಂಬಲಿತ ತಾ.ಪಂ. ಸದಸ್ಯರೊಬ್ಬರು ಪಾಲ್ಗೊಂಡು ಬಸವ-ಇಂದಿರಾ ವಸತಿ ಯೋಜನೆಯಡಿ ಮನೆ ವಿತರಣೆಗೆ ಶ್ರಮಿಸುತ್ತಿರುವ ಸಚಿವರ ಕಾರ್ಯವನ್ನು ಶ್ಲಾಘಿಸಿದ್ದಾರೆ. ನ್ಯಾಮತಿ ಹೋಬಳಿಯಲ್ಲಿ ನಡೆದ ಗ್ರಾಮಸಭೆಯಲ್ಲಿ ಪಾಲ್ಗೊಂಡ ಜಿ.ಪಂ. ಸದಸ್ಯರೊಬ್ಬರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಷ್ಟಾದರೂ ಕಾಂಗ್ರೆಸ್ ಮುಂಖಡರು ಜನರಿಗೆ ತಪ್ಪು ಮಾಹಿತಿ ನೀಡಲು ಯತ್ನಿಸುತ್ತಿರುವುದು ಸರಿಯಲ್ಲ ಎಂದರು.

ಈ ಹಿಂದಿನ ಸರ್ಕಾರಗಳು ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ತಾಲ್ಲೂಕಿನ ಗ್ರಾ.ಪಂ.ಗೆ ತಲಾ 4-13 ಮನೆಗಳನ್ನು ನೀಡುತ್ತಿದ್ದವು. ಆದರೆ, ರೇಣುಕಾಚಾರ್ಯ ಮೊದಲ ಬಾರಿಗೆ ತಾಲ್ಲೂಕಿನ ಪ್ರತಿ ಗ್ರಾ.ಪಂ.ಗೆ 40-70 ಮನೆಗಳನ್ನು ವಿತರಿಸಿದ್ದಾರೆ. ಇದೀಗ 14ಸಾವಿರ ಮನೆಗಳನ್ನು ತಾಲ್ಲೂಕಿಗೆ ಮಂಜೂರು ಮಾಡಿಸಿಕೊಂಡು ಬಂದಿದ್ದಾರೆ. ವಸತಿ ಫಲಾನುಭವಿಗಳ ಆಯ್ಕೆಗೆಂದು ಗ್ರಾಮಗಳಲ್ಲಿ ಸಭೆ ನಡೆಸಿದ ಮಾತ್ರಕ್ಕೆ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸುವುದು  ಎಷ್ಟರಮಟ್ಟಿಗೆ ಸರಿ ಎಂದು ಅವರು ಪ್ರಶ್ನಿಸಿದರು.

ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಎ.ಬಿ. ಹನುಮಂತಪ್ಪ ಮಾತನಾಡಿ, ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ಮೇ 5ರಂದು ಗ್ರಾಮಸಭೆಗಳ ಸಮಾರೋಪ ಸಮಾರಂಭ ನಡೆಯಲಿದೆ. ವಸತಿ ಸಚಿವ ವಿ. ಸೋಮಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರವೀಂದ್ರನಾಥ್, ಸಂಸದ ಜಿ.ಎಂ. ಸಿದ್ದೇಶ್ವರ್, ಜಿ.ಪಂ. ಹಾಗೂ ತಾ.ಪಂ. ಸದಸ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿದ್ದ ವಿವಿಧ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರು  ವಸತಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಸಮರ್ಪಕವಾಗಿ ನಡೆಯುತ್ತಿದೆ ಎಂದು ಹೇಳಿದರು.ಜಿ.ಪಂ. ಸದಸ್ಯರಾದ ಅಂಬಿಕಾ ರಾಜಪ್ಪ, ಶೀಲಾ ಗದ್ದಿಗೇಶ್, ಉಷಾ ಅಶೋಕ್, ತಾ.ಪಂ. ಸದಸ್ಯ ಸುರೇಶ್, ಮಂಜುನಾಥ್, ತಾಲ್ಲೂಕಿನ 37 ಗ್ರಾ.ಪಂ. ಅಧ್ಯಕ್ಷರು-ಉಪಾಧ್ಯಕ್ಷರು ಪತ್ರಿಕಾಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT