ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೂರು ಪರಿಹಾರ ಸಮಿತಿ ರಚನೆಗೆ 3 ತಿಂಗಳ ಗಡುವು

Last Updated 24 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಅಪರೂಪದಲ್ಲಿ ಅಪರೂಪದ ಪ್ರಕರಣಗಳಲ್ಲಿ ಮಾತ್ರ ವಕೀಲರು ನ್ಯಾಯಾಲಯದ ಕಲಾಪ ಬಹಿಷ್ಕರಿಸಬಹುದು ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್, ಹರೀಶ್ ಉಪ್ಪಳ ಮತ್ತು ಕೇಂದ್ರ ಸರ್ಕಾರದ ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಂತೆ, `ದೂರು ಪರಿಹಾರ ಸಮಿತಿ'ಯನ್ನು ಮೂರು ತಿಂಗಳಲ್ಲಿ ರಚಿಸಬೇಕು ಎಂದು ರಾಜ್ಯದ ಎಲ್ಲ ವಕೀಲರ ಸಂಘಗಳಿಗೆ ನಿರ್ದೇಶನ ನೀಡಿದೆ.


ಹರೀಶ್ ಉಪ್ಪಳ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ರಾಜ್ಯದಲ್ಲಿ ಜಾರಿಗೆ ತರುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ವಿಶ್ವನಾಥ ಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠ ಬುಧವಾರ ಈ ಆದೇಶ ನೀಡಿದೆ. ಅರ್ಜಿಯನ್ನು ಇತ್ಯರ್ಥಪಡಿಸಲಾಗಿದೆ.

ಹರೀಶ್ ಪ್ರಕರಣದ ವಿಚಾರಣೆ ವೇಳೆ ಪ್ರಮಾಣಪತ್ರ ಸಲ್ಲಿಸಿದ್ದ ಭಾರತ ವಕೀಲರ ಪರಿಷತ್ತು, 2002ರ ಸೆಪ್ಟೆಂಬರ್ 29ರಂದು ನಡೆದ ಸಭೆಯಲ್ಲಿ ತಾನು ಕೈಗೊಂಡ ನಿರ್ಣಯಗಳನ್ನು ಅದರಲ್ಲಿ ಉಲ್ಲೇಖಿಸಿತ್ತು. `ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಥವಾ ಅವರು ಸೂಚಿಸಿದ ವ್ಯಕ್ತಿ, ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ಮತ್ತು ಹೈಕೋರ್ಟ್ ವಕೀಲರ ಸಂಘದ ಅಧ್ಯಕ್ಷ, ಅಡ್ವೊಕೇಟ್ ಜನರಲ್, ಭಾರತ ವಕೀಲರ ಪರಿಷತ್ತಿನಲ್ಲಿ ಪ್ರತಿನಿಧಿಗಳಾಗಿರುವ ರಾಜ್ಯದ ವಕೀಲರನ್ನು ಒಳಗೊಂಡ ದೂರು ಪರಿಹಾರ ಸಮಿತಿಯನ್ನು ಎಲ್ಲ ಹೈಕೋರ್ಟ್ ಮಟ್ಟದಲ್ಲಿ ರಚಿಸಲು ನಿರ್ಣಯ ಕೈಗೊಳ್ಳಲಾಗಿದೆ' ಎಂದು ಪ್ರಮಾಣಪತ್ರದಲ್ಲಿ ಹೇಳಲಾಗಿತ್ತು.

ಈ ನಿರ್ಣಯವನ್ನು ಮೂರು ತಿಂಗಳಲ್ಲಿ ಅನುಷ್ಠಾನಕ್ಕೆ ತರಬೇಕು ಎಂದು ರಾಜ್ಯದ ಎಲ್ಲ ವಕೀಲರ ಸಂಘಗಳಿಗೆ ಹೈಕೋರ್ಟ್ ತಾಕೀತು ಮಾಡಿದೆ. ಹರೀಶ್ ಪ್ರಕರಣದಲ್ಲಿ ನೀಡಿರುವ ನಿರ್ದೇಶನದಂತೆ, ಹೈಕೋರ್ಟ್ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ವಕೀಲರು ಬದ್ಧರಾಗಿರಬೇಕಾದ ನಿಯಮಗಳನ್ನು ರೂಪಿಸುವ ಸಮಿತಿ ರಚನೆಗೆ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಅವರಿಗೆ ನಿರ್ದೇಶನ ನೀಡಿದೆ.

ವಕೀಲ ಸಮೂಹ ಮತ್ತು ನ್ಯಾಯಾಂಗದ ಘನತೆ, ಸಮಗ್ರತೆ ಮತ್ತು ಸ್ವಾತಂತ್ರ್ಯಕ್ಕೆ ಕುತ್ತು ಬಂದಾಗ ಬಹಿಷ್ಕಾರದಂಥ ಕಾರ್ಯಕ್ಕೆ ಮುಂದಾಗಬಹುದು. ಆ ಸಂದರ್ಭವು ನ್ಯಾಯಾಂಗದ ಘನತೆಗೆ ಕುತ್ತು ತರುವಂಥದ್ದೇ ಎಂಬುದನ್ನು ನ್ಯಾಯಾಲಯ ನಿರ್ಧರಿಸುತ್ತದೆ.

ಕಲಾಪ ಬಹಿಷ್ಕರಿಸುವ ನಿರ್ಧಾರ ಕೈಗೊಳ್ಳುವ ಮುನ್ನ ವಕೀಲರ ಸಂಘದ ಅಧ್ಯಕ್ಷರು, ಮುಖ್ಯ ನ್ಯಾಯಮೂರ್ತಿ ಅಥವಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಜೊತೆ ಮಾತುಕತೆ ನಡೆಸಬೇಕು. ನ್ಯಾಯಮೂರ್ತಿಯವರು ಕೈಗೊಳ್ಳುವ ತೀರ್ಮಾನಕ್ಕೆ ವಕೀಲರು ಬದ್ಧರಾಗಿ ಇರಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT