ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲೇ ಅತ್ಯುತ್ತಮ ಕಾನೂನು ಸುವ್ಯವಸ್ಥೆ

ಸಚಿವೆ ಶೋಭಾ ಹೇಳಿಕೆಗೆ ಅಶೋಕ ತಿರುಗೇಟು
Last Updated 4 ಜನವರಿ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: `ರಾಜ್ಯವು ದೇಶದಲ್ಲೇ ಅತ್ಯುತ್ತಮ ಕಾನೂನು ಮತ್ತು ಸುವ್ಯವಸ್ಥೆ ಹೊಂದಿದೆ' ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಆರ್. ಅಶೋಕ ಅವರು ಸಚಿವೆ ಶೋಭಾ ಕರಂದ್ಲಾಜೆ ಅವರ ಹೇಳಿಕೆಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಶುಕ್ರವಾರ 24ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, `ರಾಜ್ಯದಲ್ಲಿ ಕಳೆದ ವರ್ಷ ಯಾವುದೇ ಕೋಮುಗಲಭೆ ಅಥವಾ ಗೋಲಿಬಾರ್ ಪ್ರಕರಣಗಳು ನಡೆದಿಲ್ಲ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಹಾಗೂ ಬೆಂಗಳೂರಿನಲ್ಲಿ 2012ರಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ' ಎಂದರು.

`ರಾಜ್ಯದಲ್ಲಿ ಇತ್ತೀಚೆಗೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಎರಡು ತಿಂಗಳ ಅವಧಿಯಲ್ಲಿ 20ಕ್ಕೂ ಹೆಚ್ಚು ಅತ್ಯಾಚಾರ ಪ್ರಕರಣಗಳು ನಡೆದಿವೆ. ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ತವರು ಜಿಲ್ಲೆಯಲ್ಲೇ ಮಹಿಳೆಯರಿಗೆ ರಕ್ಷಣೆ ಇಲ್ಲದಾಗಿದೆ. ಸರ್ಕಾರವೇ ಅತ್ಯಾಚಾರ ಪ್ರಕರಣಗಳ ಹೊಣೆ ಹೊರಬೇಕಾಗುತ್ತದೆ' ಎಂದು   ಕರಂದ್ಲಾಜೆ ಗುರುವಾರ ಆರೋಪಿಸಿದ್ದರು.

ಈ ಆರೋಪಕ್ಕೆ ಪ್ರತಿಕ್ರಿಯೆಯ ದಾಟಿಯಲ್ಲಿ ಮಾತನಾಡಿದ ಅಶೋಕ, ರಾಜ್ಯದಲ್ಲಿ ಭಯೋತ್ಪಾದನೆ ಹಾಗೂ ನಕ್ಸಲ್ ಚಟುವಟಿಕೆಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಪೊಲೀಸರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರತಿವರ್ಷ ಜನಸಂಖ್ಯೆ ಹಾಗೂ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಅಪರಾಧಗಳು ಹಾಗೂ ಅಪಘಾತಗಳ ಪ್ರಮಾಣ ಕಡಿಮೆಯಾಗುತ್ತಿದೆ. ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸುತ್ತಿದ್ದಾರೆ ಎಂದು ಹೇಳಿದರು.

20 ವರ್ಷಗಳ ಅಂಕಿ-ಅಂಶಕ್ಕೆ ಹೋಲಿಸಿದರೆ ನಗರದಲ್ಲಿ 2012ರಲ್ಲಿ ಅಪಘಾತಗಳ ಪ್ರಮಾಣ ಹಾಗೂ ಅಪಘಾತಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕಡಿಮೆಯಾಗಿದೆ. ಸಂಚಾರ ನಿಯಮ ಉಲ್ಲಂಘಿಸುವ ವಾಹನ ಚಾಲಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತಿದೆ. ಹಿಂದಿನ ವರ್ಷ ಸಂಚಾರ ನಿಯಮ ಉಲ್ಲಂಘನೆ ಸಂಬಂಧ 50 ಲಕ್ಷ ಪ್ರಕರಣಗಳನ್ನು ದಾಖಲಿಸಿ, 52 ಕೋಟಿ ರೂಪಾಯಿ ದಂಡ ಸಂಗ್ರಹಿಸಲಾಗಿದೆ. 4,537 ವಾಹನ ಸವಾರರ ಚಾಲನಾ ಪರವಾನಗಿ (ಡಿ.ಎಲ್) ರದ್ದುಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಂಚಾರ ನಿಯಮ ಪಾಲನೆಯ ಸಂದೇಶಗಳನ್ನು ಒಳಗೊಂಡ ಸಿ.ಡಿ.ಯನ್ನು ಇದೇ ವೇಳೆ ಬಿಡುಗಡೆಗೊಳಿಸಲಾಯಿತು. ಸಂಚಾರ ನಿಯಮ ಪಾಲಿಸುವ ಬಗ್ಗೆ ವಾಹನ ಸವಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಶಾಲಾ ಮಕ್ಕಳು ಮಗರತ್ ರಸ್ತೆಯಿಂದ ಎಂ.ಜಿ.ರಸ್ತೆಯ ಅನಿಲ್‌ಕುಂಬ್ಳೆ ವೃತ್ತದವರೆಗೆ ಕಾಲ್ನಡಿಗೆ ಜಾಥಾ ನಡೆಸಿದರು.

ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ.ಉಮೇಶ್, ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ, ಹೆಚ್ಚುವರಿ ಪೊಲೀಸ್ ಕಮಿಷನರ್‌ಗಳಾದ ಡಾ.ಎಂ.ಎ.ಸಲೀಂ, ಟಿ.ಸುನಿಲ್‌ಕುಮಾರ್ ಇತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT