ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರ್ಮಿಕ ಮುಖಂಡನ ಹತ್ಯೆ

Last Updated 8 ಏಪ್ರಿಲ್ 2011, 19:30 IST
ಅಕ್ಷರ ಗಾತ್ರ

ಶ್ರೀನಗರ (ಪಿಟಿಐ): ಮೈಸುಮಾ ಪ್ರದೇಶದಲ್ಲಿರುವ ಮಸೀದಿ ಎದುರು ನಡೆದ ಬಾಂಬ್ ಸ್ಫೋಟದಲ್ಲಿ ಜಮಾತ್-ಎ-ಅಹ್ಲಿ ಹದೀಸ್ ಧಾರ್ಮಿಕ ಸಂಘಟನೆಯ ಮುಖ್ಯಸ್ಥ ಮತ್ತು ಜನಪ್ರಿಯ ಧಾರ್ಮಿಕ ನಾಯಕ ಮೌಲಾನಾ ಶೌಕತ್ ಷಾ ಹತ್ಯೆ  ಗೀಡಾಗಿದ್ದಾರೆ.

ಮಧ್ಯಾಹ್ನ 12.30ರ ಸುಮಾರಿಗೆ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಷಾ ಅವರು ಗಂಭೀರವಾಗಿ ಗಾಯಗೊಂಡರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಕೊನೆಯುಸಿರೆಳೆದರು.

ಈ ಸ್ಫೋಟದಲ್ಲಿ ಮುನಿರ್ ಅಹಮದ್ ಮಿರ್ ಎಂಬ ಯುವಕನಿಗೂ ಗಂಭೀರ ಸ್ವರೂಪದ ಗಾಯಗಳಾಗಿವೆ. ಷಾ ಅವರ ನೇತೃತ್ವದಲ್ಲಿ ಪ್ರತಿ ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ನಡೆಯುತ್ತಿತ್ತು.

ಮಸೀದಿಯ ಹಿಂಭಾಗಿಲನ ಬಳಿ ನಿಲ್ಲಿಸಲಾಗಿದ್ದ ಬೈಕ್‌ನಲ್ಲಿ ಇಡಲಾಗಿದ್ದ ಬಾಂಬ್ ಅನ್ನು ರಿಮೋಟ್ ಬಳಸಿ ಸ್ಫೋಟಿಸಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸ್ಫೋಟದ ಖಚಿತ ಕಾರಣ ಪತ್ತೆ ಹಚ್ಚಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು     ತಿಳಿಸಿದ್ದಾರೆ.

ಮಸೀದಿ ಬಳಿ ಬಾಂಬ್ ಸ್ಫೋಟ ಸಂಭವಿಸಿದ ಕೂಡಲೇ ಲಾಲ್ ಚೌಕ ಪ್ರದೇಶದ ಅಂಗಡಿ ಮುಂಗಟ್ಟುಗಳು, ಶಾಲಾ ಕಾಲೇಜುಗಳು ಮತ್ತು ಕಚೇರಿಗಳನ್ನು ಮುಚ್ಚಲಾಯಿತು.
 ಷಾ ಹತ್ಯೆಯ ಸುದ್ದಿ ಹರಡುತ್ತಿದ್ದಂತೆಯೇ ರಾಜ್ಯದ ಇತರ ಕಡೆಗಳಲ್ಲೂ ಅಂಗಡಿ ಮತ್ತು ಶಾಲೆಗಳನ್ನು ಮುಚ್ಚಲಾಯಿತು ಹಾಗೂ ವಾಹನ ಸಂಚಾರ ಸ್ಥಗಿತಗೊಂಡಿತು.
ರಾಜ್ಯದಾದ್ಯಂತ ಕಟ್ಟೆಚ್ಚರಕ್ಕೆ ಆದೇಶಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಕಾಶ್ಮೀರ ಕಣಿವೆಯಲ್ಲಿ ನಡೆಯುತ್ತಿದ್ದ ಕಲ್ಲು ತೂರಾಟ ಚಳವಳಿಗೆ ಷಾ ಅವರು ವಿರೋಧ ವ್ಯಕ್ತಪಡಿಸಿದ ನಂತರ ಅವರ ಹತ್ಯೆಗೆ ಅನೇಕ ಬಾರಿ ಪ್ರಯತ್ನಗಳು ನಡೆದಿದ್ದವು.
ಎರಡು ವರ್ಷಗಳ ನಂತರ ಕಾಶ್ಮೀರದಲ್ಲಿ ಇದೇ ಮೊದಲ ಬಾರಿಗೆ ಸುಧಾರಿತ ಸ್ಫೋಟಕ ಸಾಧನವನ್ನು ಬಳಸಿ ಬಾಂಬ್ ಸ್ಫೋಟಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT