ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧ್ವಜಾರೋಹಣಕ್ಕೆ ಸಹಕರಿಸದಿದ್ದರೆ ರಾಷ್ಟ್ರಪತಿ ಆಡಳಿತ

Last Updated 23 ಜನವರಿ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಶ್ರೀನಗರದ ಲಾಲ್‌ಚೌಕದಲ್ಲಿ ತ್ರಿವರ್ಣ ಧ್ವಜ ಹಾರಿಸಲು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಸೂಕ್ತ ಸಹಕಾರ ನೀಡುವಲ್ಲಿ ವಿಫಲವಾದರೆ ಆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವುದು ಕೇಂದ್ರ ಸರ್ಕಾರದ ಕರ್ತವ್ಯವಾಗುತ್ತದೆ ಎಂದು ಜನತಾ ಪಕ್ಷದ ಮುಖ್ಯಸ್ಥ ಸುಬ್ರಹ್ಮಣಿಯಂ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಹೇಳಿಕೆಯೊಂದನ್ನು ನೀಡಿರುವ ಅವರು, ರಾಷ್ಟ್ರಧ್ವಜ ಹಾರಿಸುವುದಕ್ಕೆ ಸಂಬಂಧಿಸಿದಂತೆ ಸಂವಿಧಾನ ರೂಪಿಸಿರುವ ನಿಯಮಗಳನ್ನು ಜಾರಿಗೆ ತರುವುದು ಕೇಂದ್ರದ ಕರ್ತವ್ಯ. ಹಾಗಾಗಿ ಕಣಿವೆ ರಾಜ್ಯದ ಲಾಲ್‌ಚೌಕದಲ್ಲಿ ತ್ರಿವರ್ಣ ಧ್ವಜ ಹಾರಿಸಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.

1991ರಲ್ಲಿ ಚಂದ್ರಶೇಖರ್ ಅವರು ಪ್ರಧಾನಿಯಾಗಿದ್ದಾಗ ತಾವು ಕಾನೂನು ಸಚಿವರಾಗಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ  ನಿರ್ಣಯ ಅಂಗೀಕರಿಸಿದೆ ಎಂದಿದ್ದಾರೆ. 1990ರಲ್ಲಿ ವಿ.ಪಿ.ಸಿಂಗ್ ಅವರು ಪ್ರಧಾನ ಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಲಾಲ್‌ಚೌಕದಲ್ಲಿ ತ್ರಿವರ್ಣ ಧ್ವಜ ಹಾರಿಸುವುದನ್ನು ನಿಲ್ಲಿಸಲು ತೀರ್ಮಾನಿಸಲಾಗಿತ್ತು.

ಹಾಗಾಗಿ 1991ರಲ್ಲಿ ತಾವು ಹಿರಿಯ ಸಚಿವರಾಗಿ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ, ರಾಷ್ಟ್ರ ಧ್ವಜಾರೋಹಣಕ್ಕೆ ಅವಕಾಶ ಕಲ್ಪಿಸುವ ನಿರ್ಣಯ ಅಂಗೀಕರಿಸಲು ಒತ್ತಾಯ ಮಾಡಿದ್ದಾಗಿ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿವಿಧ ಇಲಾಖೆಗಳ ಮುಖ್ಯಸ್ಥರೊಂದಿಗಿಗೆ ಚರ್ಚಿಸಿದ ನಂತರ ಪ್ರಧಾನ ಮಂತ್ರಿ ಚಂದ್ರಶೇಖರ್ ಅವರು ಲಾಲ್‌ಚೌಕದಲ್ಲಿ ಧ್ವಜಾರೋಹಣ ಹಾರಿಸುವುದಕ್ಕೆ ಸಹಮತ ವ್ಯಕ್ತಪಡಿಸಿದ್ದರು. ಅಲ್ಲದೆ ಕಣಿವೆ ರಾಜ್ಯದ ಆಗಿನ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲ ಅವರೂ ಧ್ವಜಾರೋಹಣಕ್ಕೆ ಸಹಕಾರ ನೀಡಿದ್ದರು ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT