ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗರಿಕರ ಸಂಚಾರ ವೇದಿಕೆ ಆರಂಭ

Last Updated 11 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸಂಚಾರ ವ್ಯವಸ್ಥೆಗೆ ಸಂಬಂಧಿಸಿದ ಸಾರ್ವಜನಿಕರ ದೂರುಗಳನ್ನು ಆಲಿಸಲು ನಗರ ಸಂಚಾರ ಪೊಲೀಸರು ಪ್ರತಿ ತಿಂಗಳ ಮೂರನೇ ಶನಿವಾರದಂದು `ನಾಗರಿಕರ ಸಂಚಾರ ವೇದಿಕೆ~ ಎಂಬ ವಿನೂತನ ಕಾರ್ಯಕ್ರಮವನ್ನು ಆರಂಭಿಸಲು ನಿರ್ಧರಿಸಿದ್ದಾರೆ.

ಅ. 15ರಿಂದ ಈ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದ್ದು, ಸಂಚಾರ ವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ತಮ್ಮ ಬಡಾವಣೆ ವ್ಯಾಪ್ತಿಯ ಠಾಣೆಗೆ ತೆರಳಿ ದೂರು ನೀಡಬಹುದಾಗಿದೆ.

ನಗರದ ಎಲ್ಲ ಸಂಚಾರ ಪೊಲೀಸ್ ಠಾಣೆಗಳ ಇನ್‌ಸ್ಪೆಕ್ಟರ್‌ಗಳು ತಿಂಗಳ ಮೂರನೇ ಶನಿವಾರದಂದು ಬೆಳಿಗ್ಗೆ 11.30ರಿಂದ ಮಧ್ಯಾಹ್ನ 1.30ರವರೆಗೆ ಕಡ್ಡಾಯವಾಗಿ ಠಾಣೆಯಲ್ಲೇ ಹಾಜರಿದ್ದು ಸಾರ್ವಜನಿಕರ ದೂರುಗಳನ್ನು ಸ್ವೀಕರಿಸಲಿದ್ದಾರೆ.

`ಇಲಾಖೆಗೆ ಸಂಬಂಧಿಸಿದ ಫೇಸ್‌ಬುಕ್ ಮತ್ತು ವೆಬ್‌ಸೈಟ್ ವಿಳಾಸಕ್ಕೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿವೆ. ಆ ದೂರುಗಳ ಬಗ್ಗೆ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಅಲ್ಲದೇ ದೂರುಗಳಲ್ಲಿ ಪ್ರಸ್ತಾಪಿಸಲಾದ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ದೂರುದಾರರಿಗೆ ಮಾಹಿತಿಯೂ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ಈ ಕಾರ್ಯಕ್ರಮವನ್ನು ಆರಂಭಿಸಲಾಗುತ್ತಿದೆ~ ಎಂದು ನಗರ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಡಾ.ಎಂ.ಎ.ಸಲೀಂ `ಪ್ರಜಾವಾಣಿ~ಗೆ ತಿಳಿಸಿದರು.

ಸಂಚಾರ ದಟ್ಟಣೆ, ವಾಹನ ನಿಲುಗಡೆ ಸ್ಥಳ ಸೇರಿದಂತೆ ಸಂಚಾರ ವ್ಯವಸ್ಥೆಯಲ್ಲಿನ ಇತರೆ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ನೇರವಾಗಿ ಠಾಣೆಗೆ ಬಂದು ದೂರು ನೀಡಲು ಈ ಕಾರ್ಯಕ್ರಮದಲ್ಲಿ ಅವಕಾಶ ಕಲ್ಪಿಸಲಾಗಿದೆ.
ಇನ್‌ಸ್ಪೆಕ್ಟರ್ ಠಾಣೆಯಲ್ಲಿ ಕಡ್ಡಾಯವಾಗಿ ಹಾಜರಿದ್ದು ದೂರುಗಳನ್ನು ಸ್ವೀಕರಿಸಲಿದ್ದಾರೆ. ಮೂಲ ಸೌಕರ್ಯ ಸಮಸ್ಯೆಗಳಿಗೆ ಸಂಬಂಧಿಸಿದ ದೂರುಗಳು ಬಂದರೆ ಅವುಗಳನ್ನು ಬಿಬಿಎಂಪಿ ಅಥವಾ ಬಿಡಿಎ ಅಧಿಕಾರಿಗಳ ಗಮನಕ್ಕೆ ತರಲಾಗುತ್ತದೆ ಎಂದರು.

ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ದೂರುದಾರರು, ದೂರು ನೀಡಿದ ನಂತರದ ತಿಂಗಳಿನ ಮೂರನೇ ಶನಿವಾರದಂದು ಇನ್‌ಸ್ಪೆಕ್ಟರ್ ಅವರಿಂದ ನೇರವಾಗಿ ಮಾಹಿತಿ ಪಡೆಯಬಹುದು.

ಇದರಿಂದ ನಾಗರಿಕರ ಸಮಸ್ಯೆಗಳು ಆದಷ್ಟು ಬೇಗ ಬಗೆಹರಿಯುತ್ತವೆ ಎಂಬ ವಿಶ್ವಾಸವಿದೆ. ಇಲಾಖೆಯ ಹಿರಿಯ ಅಧಿಕಾರಿಗಳು ಆಗಾಗ್ಗೆ ಠಾಣೆಗಳಿಗೆ ಭೇಟಿ ಕೊಟ್ಟು ಕಾರ್ಯಕ್ರಮದ ಬಗ್ಗೆ ಪರಿಶೀಲನೆ ನಡೆಸುತ್ತಾರೆ ಎಂದು ಸಲೀಂ ತಿಳಿಸಿದರು.


ಸಂಚಾರ ಸಲಹಾ ಮತ್ತು ನಿರ್ವಹಣಾ ಸಮಿತಿ: ಆಯಾ ಬಡಾವಣೆಗಳ ವ್ಯಾಪ್ತಿಯ ಸಂಚಾರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಹಾಗೂ ಸಲಹೆ ಸೂಚನೆಗಳನ್ನು ನೀಡುವ ಕಾರಣಕ್ಕಾಗಿ ಪ್ರತಿ ಠಾಣೆಯಲ್ಲೂ ಸಂಚಾರ ಸಲಹಾ ಮತ್ತು ನಿರ್ವಹಣಾ ಸಮಿತಿ ರಚಿಸಲಾಗುತ್ತಿದೆ.

ಸ್ಥಳೀಯರು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ನಿವಾಸಿಗಳ ಹಿತರಕ್ಷಣಾ ಸಮಿತಿ ಸದಸ್ಯರು ಈ ಸಮಿತಿಯಲ್ಲಿರುತ್ತಾರೆ~ ಎಂದು ಅವರು ಮಾಹಿತಿ ನೀಡಿದರು.

`ಈ ಸಮಿತಿಯ ಸದಸ್ಯರು ಹಾಗೂ ಸಂಬಂಧಪಟ್ಟ ಠಾಣೆಯ ಇನ್‌ಸ್ಪೆಕ್ಟರ್ ಪ್ರತಿ ತಿಂಗಳ ಮೂರನೇ ಶನಿವಾರ ಸಭೆ ಸೇರಿ ಸಂಚಾರ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಾರೆ. ಸದಸ್ಯರು ಸಭೆಯಲ್ಲಿ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ಕೂಡ ನೀಡಬಹುದಾಗಿದೆ~ ಎಂದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT