ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಯಕರಿಗೆ ಮತ್ತೊಂದು ಸಚಿವ ಸ್ಥಾನ ನೀಡಿ

ಸಮಾವೇಶದಲ್ಲಿ ಮುಖ್ಯಮಂತ್ರಿಗೆ ಒತ್ತಾಯ: ಜಾರಕಿಹೊಳಿ
Last Updated 11 ಜನವರಿ 2014, 5:43 IST
ಅಕ್ಷರ ಗಾತ್ರ

ಚಿತ್ರದುರ್ಗ: ನಾಯಕ ಸಮುದಾಯಕ್ಕೆ ಮತ್ತೊಂದು ಸಚಿವ ಸ್ಥಾನ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜ.11ರಂದು ನಗರದಲ್ಲಿ ನಡೆಯಲಿರುವ ರಾಜ್ಯ ವಾಲ್ಮೀಕಿ ನಾಯಕ ಸಮುದಾಯದ ಸಮಾವೇಶದಲ್ಲಿ ಮನವಿ ಮಾಡಲಾಗುವುದು ಎಂದು ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶದ ಮೂಲಕ ರಾಜ್ಯದ ನಾಯಕ ಸಮುದಾಯದವರನ್ನು ಸಂಘಟಿಸುವ, ಜಾಗೃತಗೊಳಿಸುವ ಹಾಗೂ ಅವರಲ್ಲಿ ಶಕ್ತಿ ತುಂಬುವ ಸಲುವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆಯೇ ಹೊರತು ಯಾವುದೇ ರಾಜಕೀಯ ಪ್ರಚಾರಕ್ಕಾಗಲಿ ಅಥವಾ ಚುನಾವಣಾ ಪ್ರಚಾರವಾಗಲಿ ಅಲ್ಲ ಎಂದು ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.

ರಾಜ್ಯ ಸೇರಿದಂತೆ ಆಂಧ್ರ ಪ್ರದೇಶ, ತಮಿಳುನಾಡಿನಿಂದಲೂ ನಾಯಕ ಸಮುದಾಯದ ಜನಪ್ರತಿನಿಧಿಗಳು, ಬಂಧುಗಳು ಆಗಮಿಸಲಿದ್ದಾರೆ. ೪೦ ಸಾವಿರ ಆಸನದ ವ್ಯವಸ್ಥೆ ಮಾಡಿದ್ದು, ಸುಮಾರು ೩ ಲಕ್ಷ ಮಂದಿ ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.

ಸಮಾವೇಶ ಆಯೋಜಿಸಿರುವ ಕುರಿತು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ನಾಯಕ ಸಮುದಾಯದ ಒಬ್ಬರಿಗೆ ಮಾತ್ರ ಸಚಿವ ಸ್ಥಾನ ಸಿಕ್ಕಿದ್ದು, ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ದೊರೆತಿಲ್ಲ ಎನ್ನುವ ಅಪಸ್ವರ ಎದ್ದಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಪಸ್ವರದ ಬಗ್ಗೆ ತಮಗೆ ತಿಳಿದಿಲ್ಲ. ಆದರೆ, ಪ್ರತಿ ಸರ್ಕಾರಗಳು ಸಮುದಾಯಕ್ಕೆ ಒಬ್ಬ ಸಚಿವರನ್ನು ಆಯ್ಕೆ ಮಾಡಿವೆ. ಅಧಿಕಾರ ಇರುವಾಗ ಸಮುದಾಯಕ್ಕೆ ಸೌಲಭ್ಯ ಕಲ್ಪಿಸುವ ಪ್ರಯತ್ನ ಮಾಡುತ್ತೇನೆ. ಮುಂದಿನ ಸಚಿವ ಸಂಪುಟದಲ್ಲಿ ಸಮುದಾಯದ ಇನ್ನೊಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸುತ್ತೇನೆ. ಈ ಸಮಾವೇಶದಲ್ಲೂ ಒತ್ತಾಯಿಸುತ್ತೇನೆ ಎಂದು ಭರವಸೆ ನೀಡಿದರು.

ವಿವಿಧ ಜಿಲ್ಲೆಗಳಿಂದ ಸಮಾವೇಶಕ್ಕೆ ಆಗಮಿಸುವವರಿಗೆ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ ೬ರಿಂದ ೧೦ರವರೆಗೆ ತಿಂಡಿ ವ್ಯವಸ್ಥೆ, ನಂತರ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ. ಸೂಕ್ತ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದು ತಿಳಿಸಿದರು.
ಶಾಸಕ ರಘುಮೂರ್ತಿ, ನಗರಸಭೆ ಅಧ್ಯಕ್ಷ ಕಾಂತರಾಜ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎ.ಸೇತೂರಾಂ ಇತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಮುಖ್ಯಮಂತ್ರಿಗೆ ಆತ್ಮೀಯ ಸನ್ಮಾನ
ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮುದಾಯದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಲಾಗುವುದು. ಜತೆಗೆ ೫ ಕೆಜಿ ತೂಕದ ಬೆಳ್ಳಿಯಿಂದ ತಯಾರಿಸಿರುವ ವಿಶೇಷ ವಿನ್ಯಾಸದ ಬಿಲ್ಲು, ಬಾಣವನ್ನು ನಾಯಕ ಸಮುದಾಯದ ಸಂಕೇತವಾಗಿ ಹಾಗೂ ನೆನಪಿನ ಕಾಣಿಕೆಯಾಗಿ ನೀಡಲಾಗುವುದು.
–ಸತೀಶ್ ಜಾರಕಿಹೊಳಿ, ಅಬಕಾರಿ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT