ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕಿರುಕುಳ...

Last Updated 19 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ರಾಮನಗರ: ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಮೇಲೆ ದೌರ್ಜನ್ಯ ಎಸಗುವ ಜನಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದರ ಜತೆಗೆ ಅವರ ಸದಸ್ಯತ್ವವನ್ನು ಅನರ್ಹತೆಗೊಳಿಸಲು ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಜಗದೀಶ್ ಶೆಟ್ಟರ್ ಎಚ್ಚರಿಸಿದರು.

ನಗರಸಭೆಯ ಪ್ರಶಸ್ತಿ ಭವನದಲ್ಲಿ ಬುಧವಾರ ನಡೆದ ಜಿಲ್ಲಾ ಪಂಚಾಯಿತಿಯ ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ಅವರು ಸುದ್ದಿಗಾರರ ಜತೆ ಮಾತನಾಡಿದರು.ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಗ್ರಾಮ ಪಂಚಾಯಿತಿಯೊಂದರಲ್ಲಿ ಪಿಡಿಒ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರನ್ನು ಅನರ್ಹತೆಗೊಳಿಸಲು ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ.

ಜನಪ್ರತಿನಿಧಿಗಳ ಅಸಭ್ಯ ವರ್ತನೆ ಮುಂದುವರೆದರೆ ಇದೇ ರೀತಿಯ ಕ್ರಮಗಳನ್ನು ಸರ್ಕಾರ ನಿರ್ದಾಕ್ಷಿಣ್ಯವಾಗಿ ತೆಗೆದುಕೊಳ್ಳುತ್ತದೆ ಎಂದು ಅವರು ಪ್ರತಿಕ್ರಿಯಿಸಿದರು.

ರಾಜ್ಯದ ವಿವಿಧ ಭಾಗಗಳಲ್ಲಿ ಪಿಡಿಒಗಳ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ದೌರ್ಜನ್ಯ ನಡೆಸಿದ ಜನಪ್ರತಿನಿಧಿಗಳು ಮತ್ತು ಇತರರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾಗಿದೆ.

ಬೀದರ್ ಮತ್ತು ಗುಲ್ಬರ್ಗ ಪ್ರಕರಣಗಳಲ್ಲಿ ಈಗಾಗಲೇ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದರು.

ರಾಜೀನಾಮೆ ಹಿಂಪಡೆಯಿರಿ: `ಇಂತಹ ದೌರ್ಜನ್ಯ ಪ್ರಕರಣಗಳಿಂದ ಬೇಸತ್ತು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಮೂಹಿಕ ರಾಜೀನಾಮೆ ನೀಡಿರುವ ಪಿಡಿಒಗಳು ತಮ್ಮ ರಾಜೀನಾಮೆಯನ್ನು ಹಿಂಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ~ ಸಚಿವರು ಕರೆ ನೀಡಿದರು.

ಗುಲ್ಬರ್ಗದಲ್ಲಿ ಪಿಡಿಒ ಆತ್ಮಹತ್ಯೆ ಪ್ರಕರಣವನ್ನು ಭಾವನಾತ್ಮಕವಾಗಿ ತೆಗೆದುಕೊಂಡಿರುವ ರಾಜ್ಯದ ವಿವಿಧ ಜಿಲ್ಲೆಗಳ ಪಿಡಿಒಗಳು ಸಾಮೂಹಿಕ ರಾಜೀನಾಮೆ ಮುಂದಾಗಿರುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಸರ್ಕಾರಿ ಕೆಲಸದಲ್ಲಿ ಇದ್ದುಕೊಂಡು ಗ್ರಾಮೀಣ ಜನತೆಯ ಸೇವೆ ಮಾಡುವ ಅವಕಾಶ ಎಲ್ಲರಿಗೂ ದೊರೆಯುವುದಿಲ್ಲ. ಅಂತಹ ಅವಕಾಶ ದೊರೆತಿರುವ ಪಿಡಿಒ ಗಳು ಬಂದಿರುವ ಸವಾಲನ್ನು ಸಮರ್ಥವಾಗಿ ಎದುರಿಸದೆ ನಿರಾಶೆಯಿಂದ ಪಲಾಯನ ಮಾಡುವುದು ಔಚಿತ್ಯವಲ್ಲ ಎಂದು ಕಿವಿಮಾತು ಹೇಳಿದರು.

ಪಿಡಿಒಗಳ ಹಿತಾಸಕ್ತಿ ಕಾಯ್ದುಕೊಳ್ಳಲು ಸರ್ಕಾರ ಸಿದ್ಧವಿದೆ. ಅವರಿಗೆ ಸೂಕ್ತ ರಕ್ಷಣೆ ಹಾಗೂ ಸೇವಾ ಭದ್ರತೆಗೆ ಪೂರಕವಾದ ನಿಯಮಗಳನ್ನು ರೂಪಿಸಲಾಗುವುದು. ಅಲ್ಲದೆ ಬಡ್ತಿ ವಿಚಾರವಾಗಿಯೂ ಕ್ರಮ ತೆಗೆದುಕೊಳ್ಳಲಾಗುವುದು ಎಂದ ಅವರು, ಸಾಮೂಹಿಕ ರಾಜೀನಾಮೆಗಳಿಂದ ಸಮಸ್ಯೆಗಳು ಪರಿಹಾರ ಆಗುವುದಿಲ್ಲ ಎಂದರು.

ಶೀಘ್ರದಲ್ಲಿಯೇ 1350 ಪಿಡಿಒ ಹುದ್ದೆಗಳು ಭರ್ತಿ
ರಾಜ್ಯದ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ 1350 ಪಿಡಿಒ ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲಿಯೇ ಚಾಲನೆ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಈ ಹುದ್ದೆಗಳ ನೇಮಕಾತಿಗೆ ಈ ಮೊದಲು ಕ್ರಮ ತೆಗೆದುಕೊಳ್ಳಲಾಗಿತ್ತು. ಆದರೆ ಕೆಲವರು ಹೈಕೋರ್ಟ್ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದರೆ ನೇಮಕಾತಿ ಪ್ರಕ್ರಿಯೆ ಸ್ಥಗಿತವಾಗಿತ್ತು. ಈ ತಡೆಯಾಜ್ಞೆ ಇದೀಗ ತೆರವಾಗಿದ್ದು, ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಡಿಸೆಂಬರ್ ತಿಂಗಳಿನಲ್ಲಿ ಈ ಸಂಬಂಧ ಪರೀಕ್ಷೆ ನಡೆಯಲಿದ್ದು, ಶೀಘ್ರದಲ್ಲಿಯೇ ಖಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಅವರು ಹೇಳಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT