ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾರ್ಕಿಂಗ್‌ ಶುಲ್ಕ ಪ್ರಸ್ತಾವ ಕೈಬಿಡಲು ಒತ್ತಾಯ

ನಗರ ಜಿಲ್ಲಾ ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ
Last Updated 23 ಸೆಪ್ಟೆಂಬರ್ 2013, 19:37 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್‌ ಶುಲ್ಕ ವಿಧಿಸುವ ಪ್ರಸ್ತಾವವನ್ನು ಕೈಬಿಡುವಂತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತವನ್ನು ಒತ್ತಾಯಿಸಿ ಸೋಮವಾರ ನಡೆದ ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್‌ ಕಾರ್ಯಕಾರಿಣಿಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾರ್ಯ ಕಾರಿಣಿ­ಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಅವರು ವಿಶೇಷ ಅತಿಥಿಯಾಗಿ ಪಾಲ್ಗೊಂಡಿದ್ದರು. ಪಾರ್ಕಿಂಗ್‌ ಶುಲ್ಕ ವಿಧಿಸುವ ಪಾಲಿಕೆಯ ನಿರ್ಧಾರವನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರೂ ಆಗಿ ರುವ ಶಾಸಕ ಎಸ್‌.ಟಿ. ಸೋಮಶೇಖರ್‌ ಅವರು ಮಂಡಿಸಿದ ನಿರ್ಣಯವನ್ನು ಕಾರ್ಯಕಾರಿಣಿ ಸರ್ವಾನುಮತದಿಂದ ಅನುಮೋದಿಸಿತು.

ಮಳೆ ಸುರಿದಾಗ ಪಾಲಿಕೆ ವ್ಯಾಪ್ತಿಯ ಪ್ರದೇಶದ ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗುವುದನ್ನು ತಪ್ಪಿಸಲು ತಕ್ಷಣವೇ ರಾಜ ಕಾಲುವೆಗಳ ಹೂಳು ತೆಗೆಯುವಂತೆ ಪಾಲಿಕೆಯನ್ನು ಒತ್ತಾ ಯಿಸುವ ನಿರ್ಣಯವನ್ನೂ ಕೈಗೊಳ್ಳ ಲಾಗಿದೆ. ನಗರದ ಮೂಲ ಸೌಕರ್ಯ ಅಭಿವೃದ್ಧಿಗೆ ಮತ್ತಷ್ಟು ಕ್ರಮ ಕೈಗೊಳ್ಳು ವಂತೆಯೂ ಒತ್ತಾಯಿಸಿ ನಿರ್ಣಯ ಅಂಗೀಕರಿಸಲಾಗಿದೆ.

ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಪಕ್ಷ ಪ್ರಕಟಿಸಿದ್ದ ಪ್ರಣಾಳಿಕೆಯಲ್ಲಿ ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ನೀಡಿದ್ದ ಭರವಸೆಗಳನ್ನು ತ್ವರಿತವಾಗಿ ಅನುಷ್ಠಾನಕ್ಕೆ ತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸುವ ತೀರ್ಮಾನವನ್ನೂ ಸಭೆಯಲ್ಲಿ ತೆಗೆದುಕೊಳ್ಳಲಾಯಿತು.

ಕ್ರಮಕ್ಕೆ ಒತ್ತಾಯ: ವಿಧಾನಸಭಾ ಚುನಾವಣೆಯಲ್ಲಿ ಪಕ್ಷವಿರೋಧಿ ಚಟುವಟಿಕೆ ನಡೆಸಿರುವ ಆರೋಪ ಎದುರಿಸುತ್ತಿರುವ ಮುಖಂಡರಿಗೆ ಸರ್ಕಾರ, ಪಕ್ಷದಲ್ಲಿ ಯಾವುದೇ ಸ್ಥಾನಮಾನಗಳನ್ನು ನೀಡಬಾರದು. ಅಂತಹ ಆರೋಪ ಎದುರಿಸುತ್ತಿರುವವರ ವಿರುದ್ಧ ಶೀಘ್ರದಲ್ಲಿ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸುವ ನಿರ್ಣಯ ಅಂಗೀಕರಿಸಲಾಗಿದೆ.

ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಕಾರ್ಯಕರ್ತರು ಮತ್ತು ಮುಖಂಡರಿಗೆ ನಿಗಮ, ಮಂಡಳಿಗಳಲ್ಲಿ ಶೀಘ್ರದಲ್ಲಿ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸುವ ನಿರ್ಣಯ ತೆಗೆದುಕೊಳ್ಳಲಾಗಿದೆ. ಸಚಿವರ ಕಾರ್ಯವೈಖರಿ ಕುರಿತು ಮೌಲ್ಯಮಾಪನ ನಡೆಸುವ ಪಕ್ಷದ ನಿರ್ಧಾರವನ್ನು ಕಾರ್ಯಕಾರಿಣಿ ಸ್ವಾಗತಿಸಿದೆ.

ಶಾಸಕ ಮುನಿರತ್ನ, ವಿಧಾನ ಪರಿಷತ್‌ ಸದಸ್ಯ ದಯಾನಂದ ರೆಡ್ಡಿ, ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್‌.ಶಂಕರ್‌, ಮಾಜಿ ಸಚಿವ ಎಚ್‌.ಎಂ.ರೇವಣ್ಣ ಸೇರಿದಂತೆ ಕೆಪಿಸಿಸಿ ಸದಸ್ಯರು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು, ಬಿಬಿಎಂಪಿ ಸದಸ್ಯರು ಮತ್ತು ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ರಾಜಧಾನಿ ವ್ಯಾಪ್ತಿಯ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT