ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರಿಗೆ ಹೊಸ ಕಾನೂನುಗಳ ಜಾಗೃತಿ ಅಗತ್ಯ

Last Updated 22 ಅಕ್ಟೋಬರ್ 2012, 4:55 IST
ಅಕ್ಷರ ಗಾತ್ರ

ಶಿವಮೊಗ್ಗ: ಸೈಬರ್ ಕ್ರೈಂ ಸೇರಿದಂತೆ ಹೊಸ ಬಗೆಯ ಅಪರಾಧಗಳು ಸಮಾಜದಲ್ಲಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಹೊಸ ಕಾನೂನುಗಳ ಜಾಗೃತಿ ಹಾಗೂ ತರಬೇತಿ ಅಗತ್ಯ ಎಂದು ಜಿಲ್ಲಾಧಿಕಾರಿ ಎಂ.ವಿ. ವೇದಮೂರ್ತಿ ಅಭಿಪ್ರಾಯಪಟ್ಟರು.

ನಗರದ ಸಶಸ್ತ್ರ ಪೊಲೀಸ್ ಮೀಸಲು ಪಡೆ ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪೊಲೀಸ್ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾರ್ವಜನಿಕ ಆಸ್ತಿ ಪಾಸ್ತಿಗಳ ರಕ್ಷಣೆ ಹಾಗೂ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಪಾತ್ರ ಬಹುಮುಖ್ಯ. ಈ ಹಿನ್ನೆಲೆಯಲ್ಲಿ ಪೊಲೀಸ್ ಪಡೆಯನ್ನು ಆಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಸೂಕ್ತ ತರಬೇತಿ ನೀಡಿ ಮತ್ತಷ್ಟು ಬಲಪಡಿಸಬೇಕಿದೆ, ಹಾಗೂ ಕಾಲ ಕಾಲಕ್ಕೆ ಹೊಸ ಹೊಸ ಕಾನೂನುಗಳ ಕುರಿತು ಅರಿವು ಮೂಡಿಸುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಬೇಕಿದೆ ಎಂದರು.

ಸಮರ್ಪಣಾ ಭಾವನೆಯಿಂದ ಕೆಲಸ ಮಾಡುವ ಪೊಲೀಸ್ ಸಿಬ್ಬಂದಿ ಕಲ್ಯಾಣಕ್ಕೆ ಈಗಾಗಲೇ ಯೋಜನೆಗಳಿದ್ದರೂ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ಕೊಡಬೇಕಿದೆ. ಹುತಾತ್ಮ ಪೊಲೀಸರ ಮಕ್ಕಳಿಗೆ ವಿದ್ಯಾಭ್ಯಾಸ, ನೆರವನ್ನು ಒದಗಿಸುವ ಮೂಲಕ ವಿಶ್ವಾಸ ಹೆಚ್ಚಿಸಬೇಕು. ಇದರಲ್ಲಿ ಸಾರ್ವಜನಿಕರ ಸಹಕಾರವೂ ಮುಖ್ಯ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಮನ್ ಗುಪ್ತ, 2011 ಸೆ. 1ರಿಂದ 2012 ಆ. 31ರವರೆಗೆ ವಿವಿಧೆಡೆ ಕರ್ತವ್ಯದಲ್ಲಿದ್ದು ಹುತಾತ್ಮರಾದ ಕರ್ನಾಟಕದ ಐದು ಮಂದಿ ಪೊಲೀಸರ ಹೆಸರನ್ನು ಸ್ಮರಿಸಿದರು.

ವಿಧಾನ ಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್, ಸೂಡಾ ಅಧ್ಯಕ್ಷ ಎಸ್. ದತ್ತಾತ್ರಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಸವರಾಜು ಸೇರಿದಂತೆ ವಿವಿಧ ಗಣ್ಯರು ಪೊಲೀಸ್ ಹುತಾತ್ಮ ಸ್ಮಾರಕಕ್ಕೆ ಪುಷ್ಪಗುಚ್ಛ ಇರಿಸಿ ಗೌರವ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT