ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸ್ ಕಾಯ್ದೆ ಮಾರ್ಪಾಡು

Last Updated 21 ಡಿಸೆಂಬರ್ 2012, 19:29 IST
ಅಕ್ಷರ ಗಾತ್ರ

ಬೆಂಗಳೂರು: `ಪೊಲೀಸ್ ಇಲಾಖೆಯ ಆಧುನೀಕರಣ ಮತ್ತು ಬಲವರ್ಧನೆಗಾಗಿ ಕರ್ನಾಟಕ ಪೊಲೀಸ್ ಕಾಯ್ದೆಯಲ್ಲಿ ಸದ್ಯದಲ್ಲೇ ಕೆಲ ಬದಲಾವಣೆಗಳನ್ನು ತರಲಾಗುತ್ತದೆ' ಎಂದು ಉಪ ಮುಖ್ಯಮಂತ್ರಿ ಆರ್.ಅಶೋಕ ಹೇಳಿದರು.

ಭಾರತೀಯ ಪೊಲೀಸ್ ವ್ಯವಸ್ಥೆಯ 150ನೇ ವರ್ಷಾಚರಣೆ ಅಂಗವಾಗಿ ನಗರದ ಕೋರಮಂಗಲದಲ್ಲಿನ ರಾಜ್ಯ ಮೀಸಲು ಪೊಲೀಸ್ ಪಡೆ (ಕೆಎಸ್‌ಆರ್‌ಪಿ) ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಲಾಖೆಯನ್ನು ಬಲಪಡಿಸುವ ಉದ್ದೇಶದಿಂದ 2013ರಲ್ಲಿ ನಾಲ್ಕು ಸಾವಿರ ಸಿವಿಲ್ ಕಾನ್‌ಸ್ಟೇಬಲ್‌ಗಳನ್ನು ನೇಮಿಸಿಕೊಳ್ಳಲಾಗುತ್ತಿದೆ. ಸಾಮಾಜಿಕ ಪರಿಸ್ಥಿತಿ, ಅಪರಾಧ ಚಟುವಟಿಕೆಗಳು ಹಾಗೂ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ಸ್ವರೂಪಕ್ಕೆ ಅನುಗುಣವಾಗಿ ಇಲಾಖೆಯನ್ನು ಆಧುನೀಕರಣಗೊಳಿಸಲಾಗುತ್ತದೆ. ಈ ದಿಸೆಯಲ್ಲಿ ಗೃಹ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದು, ಸದ್ಯದಲ್ಲೇ ಅಂತಿಮ ರೂಪ ಸಿಗಲಿದೆ ಎಂದು ಹೇಳಿದರು.

ದೆಹಲಿಯಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆಯಾಗಿದೆ. ಇಂತಹ ಘಟನೆಗಳು ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿದ್ದು, ಅತ್ಯಾಚಾರಿಗಳಿಗೆ ಭಯ ಹುಟ್ಟಿಸುವಂತಹ ವಾತಾವರಣ ನಿರ್ಮಾಣ ಮಾಡಬೇಕಿದೆ. ಆದ್ದರಿಂದ ಬೆಂಗಳೂರಿನ ಕಾನೂನು ಮತ್ತು ಸುವ್ಯವಸ್ಥೆಗೆ ಹೆಚ್ಚು ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಗರದ ಕಾನೂನು ಸುವ್ಯವಸ್ಥೆಯನ್ನು ಸಮರ್ಥವಾಗಿ ನಿಭಾಯಿಸುವ ಉದ್ದೇಶಕ್ಕಾಗಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದಲ್ಲಿ ಇಬ್ಬರು ಹೆಚ್ಚುವರಿ ಪೊಲೀಸ್ ಕಮಿಷನರ್, ಸಂಚಾರ ವಿಭಾಗದಲ್ಲಿ ನಾಲ್ಕು ಡಿಸಿಪಿ ಹಾಗೂ ಕೇಂದ್ರ ಅಪರಾಧ ವಿಭಾಗದಲ್ಲಿ (ಸಿಸಿಬಿ) ಮೂರು ಡಿಸಿಪಿ ಹುದ್ದೆಗಳನ್ನು ಸೃಷ್ಟಿಸಲಾಗುತ್ತದೆ ಎಂದು ಅಶೋಕ ಮಾಹಿತಿ ನೀಡಿದರು.

ರಾಜ್ಯವು ದೇಶದಲ್ಲೇ ಉತ್ತಮ ಪೊಲೀಸ್ ಪಡೆ ಹೊಂದಿದೆ. ಆಂತರಿಕ ಭದ್ರತೆ ಕಾಪಾಡುವಲ್ಲಿ ಹಾಗೂ ಅಪರಾಧ ಪತ್ತೆಯಲ್ಲಿ ರಾಜ್ಯದ ಪೊಲೀಸರು ಸಮರ್ಥರಿದ್ದಾರೆ. ರಾಜ್ಯದಲ್ಲಿ 15ರಿಂದ 20 ಮಂದಿ ನಕ್ಸಲರಿದ್ದು, ಅವರನ್ನು ಬಂಧಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚು ಗಮನಹರಿಸಬೇಕು ಎಂದು ಹೇಳಿದರು.

ಕೆಎಸ್‌ಆರ್‌ಪಿ ಮೈದಾನದಲ್ಲಿ ಐದು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸುವರ್ಣ ಪೊಲೀಸ್ ಭವನಕ್ಕೆ ಅಶೋಕ ಅವರು ಇದೇ ಸಂದರ್ಭದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು. ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್) ಸಿಬ್ಬಂದಿ ಹಾಗೂ ರಾಜ್ಯ ಆಂತರಿಕ ಭದ್ರತಾ ವಿಭಾಗದ ಗರುಡ ಪಡೆ ಕಮಾಂಡೊಗಳು ಭಯೋತ್ಪಾದನಾ ಚಟುವಟಿಕೆಯಂತಹ ತುರ್ತು ಪರಿಸ್ಥಿತಿಗಳನ್ನು ನಿಯಂತ್ರಿಸುವ ಅಣಕು ಕಾರ್ಯಾಚರಣೆ ನಡೆಸಿದರು. ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ.ಉಮೇಶ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಲಾಲ್ ರೋಕುಮ ಪಚಾವೊ ಇತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT