ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಪ್ರಚಾರಕ್ಕಿಳಿದರೆ ಕಠಿಣ ಕ್ರಮ'

ಮತದಾರರ ಜಾಗೃತಿ ಆಂದೋಲನದಲ್ಲಿ ಸರ್ಕಾರಿ ನೌಕರರಿಗೆ ಜಿಲ್ಲಾಧಿಕಾರಿ ಎಚ್ಚರಿಕೆ
Last Updated 4 ಏಪ್ರಿಲ್ 2013, 8:21 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಯಾವುದೇ ಪಕ್ಷ ಮತ್ತು ಅಭ್ಯರ್ಥಿಗಳ ಪರವಾಗಿ ಸರ್ಕಾರಿ ನೌಕರರು ಪ್ರಚಾರ ನಡೆಸುವ ದುಸ್ಸಾಹಸಕ್ಕೆ ಕೈಹಾಕಿರುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ವಿ.ಯಶವಂತ್ ಎಚ್ಚರಿಕೆ ನೀಡಿದರು.

ಕುವೆಂಪು ಕಲಾ ಮಂದಿರದಲ್ಲಿ ಬುಧವಾರ ನಡೆದ ಮತದಾರರಲ್ಲಿ ಜಾಗೃತಿ ಆಂದೋಲನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಹೊಸದಾಗಿ 26 ಸಾವಿರ ಮಂದಿ ಮತದಾರರನ್ನು ನೋಂದಾಯಿಸಿಕೊಳ್ಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಮತದಾನದಲ್ಲಿ ಮತದಾರರು ಪಾಲ್ಗೊಳ್ಳುವಿಕೆ ಕಡಿಮೆಯಾಗುತ್ತಿರುವುದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇ.73ರಷ್ಟಿದ್ದ ಮತದಾನ 2009ರ ವೇಳೆಗೆ ಶೇ.65ಕ್ಕೆ ಕುಸಿತಗೊಂಡಿತು. ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶದಲ್ಲಿ ಮತದಾನದ ಪ್ರಮಾಣ ಕಡಿಮೆಯಾಗುತ್ತಿದೆ. ಆದರೆ, ಗ್ರಾಮಾಂತರ ಪ್ರದೇಶದಲ್ಲಿ ಶೇ.75ರಷ್ಟು ಮತದಾನ ನಡೆಯುತ್ತಿದೆ ಎಂದು ಹೇಳಿದರು.

ಮತದಾರರ ಹಕ್ಕಿನ ಬಗ್ಗೆ ಅರಿವು ಮೂಡಿಸಲು ಹಾಗೂ ಮತದಾರರು ಮತದಾನದಲ್ಲಿ ಪಾಲ್ಗೊಳ್ಳುವಂತೆ ಮಾಡಲು ಸ್ವೀಪ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾರರ ಹೆಸರು ನಾಪತ್ತೆಯಾಗಿರುವ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಇದೇ 7ರವರೆಗೆ 18 ವರ್ಷ ತುಂಬಿರುವ ವ್ಯಕ್ತಿಗಳು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅವಕಾಶ ಇದೆ ಎಂದರು.

ಮತದಾನದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ವಿವಿಧ ಸಂಘ, ಸಂಸ್ಥೆಗಳು, 30 ಸರ್ಕಾರೇತರ ಸಂಸ್ಥೆಗಳು, ಮಹಿಳಾ ಮಂಡಳಿ, ಯುವಕ ಸಂಘ, ನೆಹರು ಯುವ ಕೇಂದ್ರ ಜಾಥಾದಲ್ಲಿ ಪಾಲ್ಗೊಳ್ಳುತ್ತಿವೆ ಎಂದು ತಿಳಿಸಿದರು.

ಈಗಾಗಲೇ ಜಿಲ್ಲೆಯಲ್ಲಿ ಶೇ.95ರಷ್ಟು ಮತದಾರರ ಗುರುತಿನ ಚೀಟಿ ವಿತರಿಸಲಾಗಿದೆ. ಈ ಹಿಂದೆ ನಡೆದ ಚುನಾವಣೆಯಲ್ಲಿ ಮತದಾರರು ಭಾವಚಿತ್ರ ಹೊಂದಿರುವ ಗುರುತಿನ ಚೀಟಿ ಇಲ್ಲದಿದ್ದರೆ, ಪಡಿತರ ಚೀಟಿ ಸೇರಿದಂತೆ ಇತರೆ ಆಯೋಗ ಸೂಚಿಸಿದ್ದ ಇತರೆ ಗುರುತಿನ ಚೀಟಿ ತೋರಿಸಿ ಮತದಾನ ಮಾಡ ಬಹುದಾಗಿತ್ತು.

ಆದರೆ, ಈ ಬಾರಿ ಭಾವಚಿತ್ರ ಇರುವ ಮತದಾನದ ಗುರುತಿನ ಚೀಟಿ ಹಾಗೂ ಚುನಾವಣೆ ಹಿಂದಿನ ದಿನಗಳಲ್ಲಿ ಬೂತ್‌ಮಟ್ಟದ ಅಧಿಕಾರಿಗಳು ನೀಡುವ ಮತದಾನದ ಗುರುತಿನ ಚೀಟಿ ತೋರಿಸಿದರೆ, ಮಾತ್ರ ಮತದಾನಕ್ಕೆ ಅವಕಾಶ ಇದೆ ಎಂದು ಸ್ಪಷ್ಟಪಡಿಸಿದರು.

ಜಿಲ್ಲಾ  ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಾಲಕ್ಕಿಗೌಡ, ಬಿ.ಇಡಿ ಕಾಲೇಜಿನ ಉಪನ್ಯಾಸಕ ಗಣೇಶ್ ಮಾತನಾಡಿದರು. ಅಧಿಕಾರಿಗಳಾದ ಜಗದೀಶ ಕುಮಾರ್, ಎಸ್.ಜಿ.ನಾಗೇಶ್, ಮೃತ್ಯುಂಜಯ, ಲೋಕೇಶ್, ಬಸವರಾಜ್ ವೇದಿಕೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT