ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಣಾಳಿಕೆ ಜಾರಿಗೆ ಒತ್ತಡ

ಸಿದ್ದರಾಮಯ್ಯಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಪತ್ರ
Last Updated 6 ಜುಲೈ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರ ಮತ್ತು ಪ್ರದೇಶ ಕಾಂಗ್ರೆಸ್ ನಡುವಣ ಸಮನ್ವಯ ಸಾಧಿಸಲು ಸಮಿತಿ ರಚಿಸುವ ಪ್ರಕಟಣೆ ಹೊರಬಿದ್ದ ಬೆನ್ನಲ್ಲೇ, ಬಜೆಟ್‌ನಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿನ ಪ್ರಮುಖ ಅಂಶಗಳನ್ನೂ ಅಳವಡಿಸುವಂತೆ ಸಲಹೆ ನೀಡಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರ ಬಹಿರಂಗವಾಗಿದೆ.

ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿರುವ 102 ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಅಲ್ಲಿ ಪಕ್ಷದ ಅಭ್ಯರ್ಥಿಗಳಾಗಿದ್ದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷರು ಕೋರಿದ್ದಾರೆ. ಈ ಸಂಬಂಧ ಎಲ್ಲಾ ಸಚಿವರಿಗೂ ಸ್ಪಷ್ಟ ನಿರ್ದೇಶನ ನೀಡುವಂತೆಯೂ ಆಗ್ರಹಿಸಿದ್ದಾರೆ.

ಈ ಪತ್ರದ ಜೊತೆ ವಿಧಾನಸಭಾ ಚುನಾವಣೆ ವೇಳೆ ಪಕ್ಷ ಪ್ರಕಟಿಸಿದ್ದ ಪ್ರಣಾಳಿಕೆಯ ಪ್ರತಿಯನ್ನೂ ಪರಮೇಶ್ವರ್ ಅವರು ಸಿದ್ದರಾಮಯ್ಯ ಅವರಿಗೆ ತಲುಪಿಸಿದ್ದಾರೆ.

ಜೂನ್ 28ರಂದೇ ಬರೆದ ಪತ್ರ ಶನಿವಾರ ಬಹಿರಂಗವಾಗಿದೆ. ಜೂನ್ 30ರಂದು ಸಿದ್ದರಾಮಯ್ಯ ಅವರು ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿದ್ದರು. ಬಜೆಟ್ ತಯಾರಿ ಬಗ್ಗೆಯೂ ಸಮಾಲೋಚನೆ ನಡೆಸಿರುವುದಾಗಿ ಪರಮೇಶ್ವರ್ ತಿಳಿಸಿದ್ದರು. ಆಗ ಈ ಪತ್ರದ ಬಗ್ಗೆ ಪ್ರಸ್ತಾಪವಾದುದು ವರದಿಯಾಗಿರಲಿಲ್ಲ.

ವಿಶ್ವಾಸ ಉಳಿಸಿ:  `ರಾಜ್ಯದ ಜನರು ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇರಿಸಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಜನತೆಯ ಬದುಕಿನಲ್ಲಿ ಅಗಾಧವಾದ ಬದಲಾವಣೆಗಳನ್ನು ತರುತ್ತೇವೆ ಎಂಬ ಆಶ್ವಾಸನೆಯನ್ನು ನಾವು ಪ್ರಣಾಳಿಕೆಯಲ್ಲಿ ನೀಡಿದ್ದೆವು. ಈ ಕಾರಣದಿಂದ ಜನರ ನಿರೀಕ್ಷೆಗಳ ಪ್ರಮಾಣವೂ ದೊಡ್ಡದಿದೆ. ಆದ್ದರಿಂದ ಜನರ ನಿರೀಕ್ಷೆಗಳನ್ನು ಈಡೇರಿಸಲು ಸಾಧ್ಯವಾದಷ್ಟು ಪ್ರಯತ್ನ ಮಾಡಬೇಕು' ಎಂದು ಕೆಪಿಸಿಸಿ ಅಧ್ಯಕ್ಷರು ಈ ಪತ್ರದಲ್ಲಿ ಸಲಹೆ ಮಾಡಿದ್ದಾರೆ.

`ಲೋಕಸಭಾ ಚುನಾವಣೆ ಎದುರಿಸಲು ಪಕ್ಷ ಸಜ್ಜಾಗಬೇಕಿದೆ. ವಿಧಾನಸಭಾ ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಮೂಲಕ ಮತದಾರರ ವಿಶ್ವಾಸ ಉಳಿಸಿಕೊಳ್ಳಬೇಕಿದೆ. ತಾವು ರೂಪಿಸುತ್ತಿರುವ ಬಜೆಟ್‌ನಲ್ಲಿ ಈ ವಿಷಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ವಿವಿಧ ಇಲಾಖೆಗಳು ರೂಪಿಸುವ ಕಾರ್ಯಕ್ರಮಗಳಲ್ಲೂ ಪ್ರಣಾಳಿಕೆಯಲ್ಲಿನ ಭರವಸೆಗಳನ್ನು ಈಡೇರಿಸುವುದಕ್ಕೆ ಆದ್ಯತೆ ನೀಡುವಂತೆ ಎಲ್ಲಾ ಸಚಿವರಿಗೂ ಸೂಚನೆ ನೀಡಬೇಕು' ಎಂದು ಕೋರಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮತ್ತು ಪಕ್ಷದ ನಡುವೆ ಸಮನ್ವಯ ಸಾಧಿಸಲು ಉನ್ನತಮಟ್ಟದ ಸಮನ್ವಯ ಸಮಿತಿ ರಚಿಸುವಂತೆ ಒತ್ತಾಯಿಸಿ ಕಾಂಗ್ರೆಸ್‌ನ ಹಿರಿಯ ಮುಖಂಡ ಎಂ.ವಿ.ರಾಜಶೇಖರನ್ ಅವರು ಕೆಲ ದಿನಗಳ ಹಿಂದೆ ಪಕ್ಷದ ಹೈಕಮಾಂಡ್‌ಗೆ ಪತ್ರ ಬರೆದಿದ್ದರು. ಜುಲೈ 2ರಂದು ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿಯೂ ಆಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು, ಸಮನ್ವಯ ಸಮಿತಿ ರಚಿಸುವುದಾಗಿ ಪ್ರಕಟಿಸಿದ್ದರು. ಪಕ್ಷದ ಪ್ರಣಾಳಿಕೆಯಲ್ಲಿನ ಭರವಸೆಗಳನ್ನು ಈಡೇರಿಸುವುದಕ್ಕಾಗಿ ಪ್ರಣಾಳಿಕೆ ಅನುಷ್ಠಾನ ಸಮಿತಿಯನ್ನೂ ಅಸ್ತಿತ್ವಕ್ಕೆ ತರುವುದಾಗಿ ಘೋಷಿಸಿದ್ದರು. ಸಿದ್ದರಾಮಯ್ಯ ಸರ್ಕಾರಕ್ಕೆ ಮೂಗುದಾರ ಹಾಕಲು ಸಮನ್ವಯ ಸಮಿತಿ ರಚಿಸಲಾಗುತ್ತಿದೆ ಎಂಬ ವಿಶ್ಲೇಷಿಸಲಾಗಿತ್ತು. ಈ ಎಲ್ಲಾ ಬೆಳವಣಿಗೆಗಳ ನಂತರ ಶನಿವಾರ ದಿಢೀರನೆ ಪರಮೇಶ್ವರ ಅವರ ಪತ್ರ ಹೊರಬಿದ್ದಿದೆ.

ದಿಗ್ವಿಜಯ್‌ಸಿಂಗ್ ಸಮನ್ವಯ ಸಮಿತಿ ರಚನೆ ವಿಷಯ ಪ್ರಸ್ತಾಪಿಸಿದಾಗ ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೂಗುದಾರ ಎಂದೇ ಭಾವಿಸಲಾಗಿತ್ತು.  ಈಗ ಪರಮೇಶ್ವರ್ ಪತ್ರ ಹೊಸ ಚರ್ಚೆಗೆ ಕಾರಣವಾಗಿದೆ.

ಪತ್ರ ಬಂದಿಲ್ಲ: ಸಿದ್ದರಾಮಯ್ಯ
ಮೈಸೂರು: `ಕಾಂಗ್ರೆಸ್ ಅಭ್ಯರ್ಥಿಗಳು ಸೋಲುಂಡ ಕ್ಷೇತ್ರಗಳ ಬಗ್ಗೆ ವಿಶೇಷ ಗಮನ ಹರಿಸಿ ಅಭಿವೃದ್ಧಿ ಮಾಡುವಂತೆ ಕೆಪಿಸಿಸಿ ಅಧ್ಯಕ್ಷರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ ಎಂಬುದು ಸುಳ್ಳು. ಅಂಥ ಯಾವುದೇ ಪತ್ರ ನಮಗೆ ಬಂದಿಲ್ಲ. ಇಷ್ಟಕ್ಕೂ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವ ಪ್ರಮೇಯವೇ ಇಲ್ಲ. ಆ ಕ್ಷೇತ್ರ, ಈ ಕ್ಷೇತ್ರ ಎಂಬ ಭೇದ ತೋರದೇ ಇಡೀ ರಾಜ್ಯದ ಸಮಗ್ರ ಅಭಿವೃದ್ಧಿಗೆ ನಾವು ಆದ್ಯತೆ ನೀಡುತ್ತೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಎಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಶನಿವಾರ ಮಧ್ಯಾಹ್ನ ಬಾಗಿನ ಅರ್ಪಿಸಿ ಮಾತನಾಡಿದ ಅವರು, ಪತ್ರಕರ್ತರ ಪ್ರಶ್ನೆಗೆ ಚುಟುಕಾಗಿ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT