ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತ್ಯೇಕ ಅಪಘಾತ: ಇಬ್ಬರ ಸಾವು

Last Updated 19 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಕೆ.ಆರ್.ಪುರ ಮತ್ತು ಅಶೋಕನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ 24 ಗಂಟೆಗಳಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಕ್ಯಾಂಟರ್ ಡಿಕ್ಕಿ ಹೊಡೆದು ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಸ್ಟಿನ್‌ಟೌನ್‌ನ ನಾಲಾ ರಸ್ತೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

ವಿವೇಕನಗರ ಸಮೀಪದ ರುದ್ರಪ್ಪ ಗಾರ್ಡನ್ ನಿವಾಸಿ ಸೆಲ್ವರಾಜ್ (38) ಮೃತಪಟ್ಟವರು. ಪೇಂಟರ್ ಆಗಿದ್ದ ಅವರು ಬೆಳಿಗ್ಗೆ ಕೆಲಸಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಕ್ಯಾಂಟರ್ ವಾಹನ ಅವರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಅವರ ಮೇಲೆ ಅದೇ ವಾಹನದ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಚಾಲಕ ಪರಾರಿಯಾಗಿದ್ದು, ವಾಹನವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಶೋಕನಗರ ಸಂಚಾರ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಮತ್ತೊಂದು ಪ್ರಕರಣ: ಮಹದೇವಪುರ ವರ್ತುಲ ರಸ್ತೆಯಲ್ಲಿ ಶನಿವಾರ ರಾತ್ರಿ ಲಾರಿ ಡಿಕ್ಕಿ ಹೊಡೆದು ಮಂಜುನಾಥ್ (24) ಎಂಬುವರು ಮೃತಪಟ್ಟಿದ್ದಾರೆ.

ಮೂಲತಃ ಗೌರಿಬಿದನೂರಿನ ಮಂಜುನಾಥ್ ಎಲೆಕ್ಟ್ರಾನಿಕ್‌ಸಿಟಿ ಸಮೀಪದ ಸಿಂಗಸಂದ್ರದಲ್ಲಿ ವಾಸವಾಗಿದ್ದರು. ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ಅವರು ಕೆಲಸ ಮುಗಿದ ನಂತರ ದ್ವಿಚಕ್ರ ವಾಹನದಲ್ಲಿ ಮನೆಗೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಮಂಜುನಾಥ್ ಅವರು ಬಲ ತಿರುವು ಪಡೆದುಕೊಳ್ಳುತ್ತಿದ್ದ ವೇಳೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ವಾಹನದಿಂದ ಕೆಳಗೆ ಬಿದ್ದ ಅವರ ಮೇಲೆ ಅದೇ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆ.ಆರ್.ಪುರ ಸಂಚಾರ ಠಾಣೆ ಪೊಲೀಸರು ಚಾಲಕನನ್ನು ಬಂಧಿಸಿ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಾಗಿದೆ.

ವೇಶ್ಯಾವಾಟಿಕೆ : ಬಂಧನ
ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಯುವತಿಯರು ಸೇರಿದಂತೆ ನಾಲ್ಕು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕೋಲ್ಕತ್ತಾ ಮೂಲದ ದೇಬು (22), ದೀಪಕ್ (22) ಮತ್ತು ಇಬ್ಬರು ಯುವತಿಯರನ್ನು ಬಂಧಿಸಲಾಗಿದೆ. ಆರೋಪಿಗಳು ಬೇರೆ ರಾಜ್ಯಗಳಿಂದ ಯುವತಿಯರನ್ನು ಕರೆದುಕೊಂಡು ಬಂದು ಹೆಣ್ಣೂರು ಸಮೀಪದ ಸಂಚಾರನಗರ ಬಡಾವಣೆಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಬಂಧಿತರಿಂದ ಮೂರು ಸಾವಿರ ನಗದು ಮತ್ತು ನಾಲ್ಕು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಇತರೆ ಆರೋಪಿಗಳಾದ ಸೋಮನಾಥ ಮಂಡಲ್ ಮತ್ತು ಚಂದನ್ ಮಂಡಲ್ ಎಂಬುವರು ಪರಾರಿಯಾಗಿದ್ದಾರೆ. ಬಂಧಿತರ ವಿರುದ್ಧ ಹೆಣ್ಣೂರು ಠಾಣೆಯಲ್ಲಿ  ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಟ್ಟಿಂಗ್: ಬಂಧನ
ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದ ಮೇಲೆ ಓಕಳಿಪುರದ ಪ್ರವೀಣ್ (23) ಎಂಬಾತನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 69 ಸಾವಿರ ನಗದು, ಮತ್ತು ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಕ್ರಿಕೆಟ್ ಪಂದ್ಯದ ಮೇಲೆ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ. ಆತನ ವಿರುದ್ಧ ಚಿಕ್ಕಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಪೊಲೀಸರು ಹೇಳಿದರು. ಎಸಿಪಿ ಬಿ.ಎನ್.ನ್ಯಾಮಗೌಡ ಮತ್ತು ಸಿಬ್ಬಂದಿ ಆರೋಪಿ ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT