ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತ್ಯೇಕ ಅಪಘಾತ: ಇಬ್ಬರ ಸಾವು

Last Updated 10 ಡಿಸೆಂಬರ್ 2012, 21:01 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಯಲಹಂಕ ಮತ್ತು ಎಲೆಕ್ಟ್ರಾನಿಕ್‌ಸಿಟಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.ಯಲಹಂಕ ರಸ್ತೆಯಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಶ್ರೀಮೂರ್ತಿ (35) ಎಂಬುವರು ಮೃತಪಟ್ಟಿದ್ದಾರೆ. ಜಕ್ಕೂರು ನಿವಾಸಿಯಾದ ಅವರು ಕಿರಾಣಿ ಅಂಗಡಿ ಇಟ್ಟುಕೊಂಡಿದ್ದರು.

ಅವರು ಬೆಳಿಗ್ಗೆ ಆರು ಗಂಟೆ ಸುಮಾರಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಅವರ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಅವರು ಹೆಲ್ಮೆಟ್ ಧರಿಸಿರಲಿಲ್ಲ. ಘಟನೆ ನಂತರ ಬಸ್ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಯಲಹಂಕ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ.

ಮತ್ತೊಂದು ಪ್ರಕರಣ: ನೈಸ್ ರಸ್ತೆಯ ಬೇಗೂರು ಕೆರೆ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದು ಕಿರಣ್‌ಕುಮಾರ್ (21) ಎಂಬುವರು ಮೃತಪಟ್ಟಿದ್ದಾರೆ.ಮೂಲತಃ ಚನ್ನಪಟ್ಟಣ ತಾಲ್ಲೂಕಿನ ಕಿರಣ್‌ಕುಮಾರ್, ನಗರದ ಟ್ರಾವೆಲ್ಸ್ ಕಂಪೆನಿಯೊಂದರಲ್ಲಿ ಮೆಕ್ಯಾನಿಕ್ ಆಗಿದ್ದರು. ಮೈಸೂರು ರಸ್ತೆಯ ಆಜಾದ್‌ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅವರು ಕೆಲಸದ ನಿಮಿತ್ತ ಬೈಕ್‌ನಲ್ಲಿ ಎಲೆಕ್ಟ್ರಾನಿಕ್‌ಸಿಟಿಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಅಪರಿಚಿತ ವಾಹನ ಅವರ ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಅವರ ಮೇಲೆ ಅದೇ ವಾಹನ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಾಹನದ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಎಲೆಕ್ಟ್ರಾನಿಕ್‌ಸಿಟಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದರೋಡೆ
ಶಿವಾಜಿನಗರದ ಅರುಣಾಚಲಂ ಮೊದಲಿಯಾರ್ ರಸ್ತೆಯಲ್ಲಿನ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಚಿನ್ನಾಭರಣ ದರೋಡೆ ಮಾಡಿರುವ ಘಟನೆ ಭಾನುವಾರ ನಡೆದಿದೆ.ಅರುಣಾಚಲಂ ಮೊದಲಿಯಾರ್ ರಸ್ತೆಯ ನಿವಾಸಿ ಉಮಾ ಮತ್ತು ಅವರ ಸಂಬಂಧಿಕರು ರಾತ್ರಿ ಎಂಟು ಗಂಟೆ ಸುಮಾರಿಗೆ ಮನೆಯಲ್ಲಿ ಊಟ ಮಾಡುತ್ತಿದ್ದರು.

ಈ ವೇಳೆ ಅಪರಿಚಿತ ವ್ಯಕ್ತಿಗಳಿಬ್ಬರು ಅವರ ಮನೆಯ ಬಳಿ ಬಂದು ಬಾಗಿಲು ಬಡಿದಿದ್ದಾರೆ. ಉಮಾ ಅವರು ಬಾಗಿಲು ತೆರೆಯುತ್ತಿದ್ದಂತೆ ಒಳ ನುಗ್ಗಿದ ಆ ವ್ಯಕ್ತಿಗಳು ಮಾರಕಾಸ್ತ್ರಗಳಿಂದ ಬೆದರಿಸಿ ಚಿನ್ನದ ಸರ ಮತ್ತು ಉಂಗುರ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ದರೋಡೆಯಾಗಿರುವ ಆಭರಣಗಳ ಮೌಲ್ಯ 26 ಸಾವಿರ ರೂಪಾಯಿ ಎಂದು ಪೊಲೀಸರು ಹೇಳಿದ್ದಾರೆ. ಶಿವಾಜಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಧನ
ಬೈಕ್ ಕಳವು ಮಾಡುತ್ತಿದ್ದ ಆರೋಪದ ಮೇಲೆ ಹೊಂಗಸಂದ್ರದ ಯೋಗಾನಂದ (28) ಎಂಬಾತನನ್ನು ಬಂಧಿಸಿರುವ ಮಾಗಡಿ ರಸ್ತೆ ಪೊಲೀಸರು ಸುಮಾರು 19 ಲಕ್ಷ ರೂಪಾಯಿ ಮೌಲ್ಯದ ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಯೋಗಾನಂದ, ಬನ್ನೇರುಘಟ್ಟ ರಸ್ತೆಯ ಖಾಸಗಿ ಕಂಪೆನಿಯೊಂದರಲ್ಲಿ ಮೇಲ್ವಿಚಾರಕನಾಗಿದ್ದ.ಅಲ್ಲದೇ ಚೀಟಿ ವ್ಯವಹಾರ ಮಾಡುತ್ತಿದ್ದ ಆತ, ಆ ವ್ಯವಹಾರದಲ್ಲಿ ನಷ್ಟ ಅನುಭವಿಸಿ ಐದು ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ.

ಸಾಲದ ಹಣ ತೀರಿಸುವ ಉದ್ದೇಶದಿಂದ ಬೈಕ್‌ಗಳನ್ನು ಕಳವು ಮಾಡಿ ಮಾರುತ್ತಿದ್ದ. ಅದರಿಂದ ಬಂದ ಹಣದಲ್ಲಿ ನಾಲ್ಕು ಲಕ್ಷ ರೂಪಾಯಿ ಸಾಲ ಸಹ ತೀರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.ಆತ ಹುಳಿಮಾವು, ಮಡಿವಾಳ, ಆಡುಗೋಡಿ, ಮೈಕೊಲೇಔಟ್, ತಿಲಕ್‌ನಗರ ಮತ್ತು ಕೋರಮಂಗಲ ಠಾಣೆ ವ್ಯಾಪ್ತಿಯಲ್ಲಿ ಬೈಕ್‌ಗಳನ್ನು ಕಳವು ಮಾಡಿದ್ದ.

ಆರೋಪಿಯ ಬಂಧನದಿಂದ 35 ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ.
ಇನ್‌ಸ್ಪೆಕ್ಟರ್ ಶ್ರೀಧರ್ ಕೆ.ಪೂಜಾರ್ ಮತ್ತು ಸಿಬ್ಬಂದಿ ಆರೋಪಿಯನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT