ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Last Updated 9 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು:  ನಗರದ ನಂದಿನಿಲೇಔಟ್ ಮತ್ತು ಸುಬ್ರಹ್ಮಣ್ಯನಗರ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂದಿನಿಲೇಔಟ್ ಸಮೀಪದ ಜೈಮಾರುತಿನಗರದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ಜೈಮಾರುತಿನಗರ ಮೂರನೇ ಅಡ್ಡರಸ್ತೆ ನಿವಾಸಿ ಮುನಿಸ್ವಾಮಿರಾವ್ (62) ಆತ್ಮಹತ್ಯೆ ಮಾಡಿಕೊಂಡವರು. ಮದ್ಯವ್ಯಸನಿಯಾಗಿದ್ದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕುಟುಂಬ ಸದಸ್ಯರೆಲ್ಲ ಹೊರಗೆ ಹೋಗಿದ್ದಾಗ ಅವರು ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ನಂದಿನಿಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮತ್ತೊಂದು ಪ್ರಕರಣ: ಗಾಯಿತ್ರಿನಗರ ಐದನೇ ಅಡ್ಡರಸ್ತೆ ನಿವಾಸಿ ನಾಗರಾಜು (42) ಎಂಬುವರು ನಿಗದಿತ ಮಿತಿಗಿಂತ ಹೆಚ್ಚಿನ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ಪೇಂಟರ್ ಆಗಿದ್ದ ನಾಗರಾಜ್ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದರು. ರಾತ್ರಿ ಹೆಚ್ಚು ಮಾತ್ರೆಗಳನ್ನು ನುಂಗಿ ಅಸ್ವಸ್ಥಗೊಂಡ ಅವರು ಮನೆಯಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸುಬ್ರಹ್ಮಣ್ಯನಗರ ಪೊಲೀಸರು ಹೇಳಿದ್ದಾರೆ.

ಅಗ್ನಿ ಅನಾಹುತ: ಕೋಣನಕುಂಟೆ ಕ್ರಾಸ್ ಸಮೀಪದ ನ್ಯೂ ಬ್ಯಾಂಕ್ ಕಾಲೊನಿಯಲ್ಲಿರುವ ಸಿಲಿಕಾನ್ ಸಿಟಿ ಪಬ್ಲಿಕ್ ಶಾಲೆಯ ಕೊಠಡಿಯೊಂದರಲ್ಲಿ ಸೋಮವಾರ ಮಧ್ಯಾಹ್ನ ಅಗ್ನಿ ಅನಾಹುತ ಸಂಭವಿಸಿದ ಪರಿಣಾಮ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಶಾಲೆಯ ದಾಖಲೆ ಪುಸ್ತಕಗಳನ್ನು ಸಂಗ್ರಹಿಸಿಟ್ಟಿದ್ದ ಕೊಠಡಿಯಲ್ಲಿ ಮಧ್ಯಾಹ್ನ 12.45ರ ಸುಮಾರಿಗೆ ಬೆಂಕಿ ಹೊತ್ತಿಕೊಂಡು ಹೊಗೆ ಬರಲಾರಂಭಿಸಿತು. ಇದನ್ನು ನೋಡಿದ ಶಿಕ್ಷಕರು ವಿದ್ಯಾರ್ಥಿಗಳನ್ನು ಶಾಲಾ ಕಟ್ಟಡದಿಂದ ಹೊರಗೆ ಕಳುಹಿಸಿ ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ವಿಷಯ ತಿಳಿಸಿದರು. ಎರಡು ಅಗ್ನಿನಂದಕ ವಾಹನಗಳಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಪೀಠೋಪಕರಣಗಳು, ದಾಖಲೆ ಪುಸ್ತಕಗಳು ಸುಟ್ಟು ಹೋಗಿವೆ. ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT