ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ನಿವಾಸದ ಎದುರು ಧರಣಿಗೆ ನಿರ್ಧಾರ

ಬೆಳಗಾವಿ ನಗರ ಸಮಗ್ರ ಅಭಿವೃದ್ಧಿ ಯೋಜನೆ
Last Updated 26 ಡಿಸೆಂಬರ್ 2012, 9:39 IST
ಅಕ್ಷರ ಗಾತ್ರ

ಬೆಳಗಾವಿ: `ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸವಿನೆನಪಿಗಾಗಿ ನಗರದ ಸಮಗ್ರ ಅಭಿವೃದ್ಧಿ ಯೋಜನೆಗೆ ಒಪ್ಪಿಗೆ ನೀಡುವಂತೆ ಒತ್ತಾಯಿಸಿ ಸ್ವಾತಂತ್ರ್ಯ ಹೋರಾಟಗಾರರು, ಜನಪ್ರತಿನಿಧಿಗಳು ಪ್ರಧಾನಿ ಮನಮೋಹನ್ ಸಿಂಗ್ ನಿವಾಸದ ಎದುರು ಜನವರಿ ಎರಡನೇ ವಾರದಲ್ಲಿ ಧರಣಿ ನಡೆಸಲಿದ್ದಾರೆ' ಎಂದು ಶಾಸಕ ಅಭಯ ಪಾಟೀಲ ತಿಳಿಸಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಕಾಂಗ್ರೆಸ್ ಅಧಿವೇಶನದ ಸ್ಮರಣೆಗಾಗಿ ಸ್ವಾತಂತ್ರ್ಯ ಯೋಧರು, ಜನಪ್ರತಿನಿಧಿಗಳು ಹಾಗೂ ಗಣ್ಯ ವ್ಯಕ್ತಿಗಳು ಸೇರಿ 5350 ಕೋಟಿ ರೂಪಾಯಿ ವೆಚ್ಚದ ಸಮಗ್ರ ಅಭಿವೃದ್ಧಿ ಯೋಜನೆ ರೂಪುರೇಷೆ ಸಿದ್ಧಪಡಿಸಿದ್ದರು. ರಾಜ್ಯ ಸರ್ಕಾರವು ಈ ಯೋಜನೆಯ ಶೇ. 10ರಷ್ಟು ಅನುದಾನ ನೀಡುವುದಾಗಿ ಭರವಸೆ ನೀಡಿ ಪ್ರಸ್ತಾವವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಟ್ಟಿದೆ. ಈ ಯೋಜನೆಗೆ ಮಂಜೂರಾತಿ ನೀಡುವಂತೆ ಮುಖ್ಯಮಂತ್ರಿಗಳು 7 ಬಾರಿ ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ. ಆದರೆ, ಯಾವುದೇ ಸಮರ್ಪಕವಾದ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಪ್ರಧಾನಿ ಈ ಯೋಜನೆಯ ಬಗ್ಗೆ ಪರಿಶೀಲಿಸಿಲ್ಲ ಎಂಬುದು ಇದರಿಂದ ಅರ್ಥವಾಗುತ್ತದೆ. ಹೀಗಾಗಿ ಪ್ರಧಾನಿಯ ಗಮನ ಸೆಳೆಯಲು ಧರಣಿ ನಡೆಸಲಾಗುವುದು' ಎಂದು ಅಭಯ ಪಾಟೀಲ ತಿಳಿಸಿದರು.

`ಈ ಬಗ್ಗೆ ಈಗಾಗಲೇ ಸ್ವಾತಂತ್ರ್ಯಯೋಧರು, ಜನಪ್ರತಿನಿಧಿಗಳು ಹಾಗೂ ಗಣ್ಯರೊಂದಿಗೆ ಚರ್ಚಿಸಲಾಗಿದೆ. ಸಂಸದ ಸುರೇಶ ಅಂಗಡಿ ಹಾಗೂ ರಾಜ್ಯಸಭೆ ಸದಸ್ಯ ಪ್ರಭಾಕರ ಕೋರೆ ನೇತೃತ್ವದಲ್ಲಿ ಧರಣಿ ನಡೆಸಲಾಗುವುದು. ನಗರದ 50ಕ್ಕೂ ಹೆಚ್ಚು ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆ ಇದೆ' ಎಂದು ಹೇಳಿದರು.

`ಮಹಾತ್ಮ ಗಾಂಧಿ ಭಾವಚಿತ್ರವನ್ನು ಬಳಸಿಕೊಂಡು ಪ್ರಚಾರ ಪಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಮುಖಂಡರು ಈ ಯೋಜನೆಯ ಮಹತ್ವದ ಬಗ್ಗೆ ಪ್ರಧಾನಿಗಳಿಗೆ ಮನವರಿಕೆ ಮಾಡಿಕೊಡಬೇಕಿತ್ತು. ವಿಧಾನಸಭೆಯಲ್ಲಿ ಮಂಡಿಸಿದ ಪ್ರೈವೇಟ್ ಮೆಂಬರ್ಸ್‌ ಬಿಲ್‌ಅನ್ನು ಕಾಂಗ್ರೆಸ್‌ನವರು ಬೆಂಬಲಿಸಿದ್ದಾರೆ. ಹೀಗಾಗಿ ಪ್ರಧಾನಿಯ ಗಮನ ಸೆಳೆಯಬೇಕು' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT