ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಲಿತಾಂಶ ದಿಕ್ಸೂಚಿಯಲ್ಲ: ಜೆಡಿಎಸ್

Last Updated 19 ಫೆಬ್ರುವರಿ 2013, 19:45 IST
ಅಕ್ಷರ ಗಾತ್ರ

ಬೆಂಗಳೂರು:  ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು, ಪ್ರತಿಷ್ಠೆಯನ್ನು ಬದಿಗೊತ್ತಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸುವಂತೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಸಲಹೆ ಮಾಡಿದ್ದಾರೆ.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಪಕ್ಷದ ಕಚೇರಿಯಲ್ಲಿ ನಡೆದ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎದುರಾಳಿಗಳನ್ನು ಹಗುರವಾಗಿ ತೆಗೆದುಕೊಳ್ಳದೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸಿದರು.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಮುಂಬರುವ ವಿಧಾನಸಭಾ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ. ಆದ್ದರಿಂದ ಎಲ್ಲ ಮುಖಂಡರು ತಮ್ಮ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಪ್ರಯತ್ನಿಸಬೇಕು ಎಂದು ಕಿವಿಮಾತು ಹೇಳಿದರು.

2007ರಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಎರಡನೇ ಸ್ಥಾನ, ಬಿಜೆಪಿ ಮೂರನೇ ಸ್ಥಾನ ಗಳಿಸಿತ್ತು. ಕಳೆದ ಬಾರಿ ಪಡೆದಷ್ಟು ಸ್ಥಾನಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸಬೇಕು. ಟಿಕೆಟ್ ನೀಡುವ ವಿಷಯಕ್ಕೆ ಸಂಬಂಧಪಟ್ಟಂತೆ ಏನಾದರೂ ಗೊಂದಲ ಉಂಟಾದರೆ ಜಿಲ್ಲಾ ಮಟ್ಟದಲ್ಲೇ ಬಗೆಹರಿಸಿಕೊಳ್ಳಬೇಕು ಎಂದರು.

ದಿಕ್ಸೂಚಿ ಅಲ್ಲ: `ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗುವುದಿಲ್ಲ. ಆದರೂ, ನಮ್ಮ ಪಕ್ಷ ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ' ಎಂದು ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಇಡೀ ದಿನ ಚರ್ಚೆ: ಗೆಲುವಿನ ಕಾರ್ಯತಂತ್ರ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಇರುವ ಸಂಘಟನಾ ಶಕ್ತಿ ಬಗ್ಗೆ ಕುಮಾರಸ್ವಾಮಿ ಅವರು ಪಕ್ಷದ ಜಿಲ್ಲಾ ಅಧ್ಯಕ್ಷರೊಂದಿಗೆ ಪ್ರತ್ಯೇಕವಾಗಿ ಚರ್ಚಿಸಿದರು. ಸಂಜೆ 4ಕ್ಕೆ ಆರಂಭವಾದ ಸಭೆ ರಾತ್ರಿವರೆಗೂ ನಡೆಯಿತು. ಗುರುವಾರದ ಒಳಗೆ `ಬಿ' ಫಾರಂ ನೀಡುವ ಮೂಲಕ ಎಲ್ಲ ಕಡೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬೇಕು ಎಂದು ಸೂಚಿಸಿದರು.

ಪಕ್ಷದ ಮಹಾಪ್ರಧಾನ ಕಾರ್ಯದರ್ಶಿ ಬಸನಗೌಡ ಪಾಟೀಲ ಯತ್ನಾಳ್, ಶಾಸಕ ಬಂಡೆಪ್ಪ ಕಾಶೆಂಪುರ, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ ಭಾಗವಹಿಸಿದ್ದರು.

ಬಿಜೆಪಿಯಿಂದ ಜೆಡಿಎಸ್‌ಗೆ
ಶಾಸಕ ಸ್ಥಾನಕ್ಕೆ ಮತ್ತು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಎರಡು ದಿನಗಳಲ್ಲಿ ರಾಜೀನಾಮೆ ನೀಡಿ, ಬಳಿಕ ಜೆಡಿಎಸ್ ಸೇರುವುದಾಗಿ ಎಚ್.ಎಸ್.ಶಂಕರಲಿಂಗೇಗೌಡ ತಿಳಿಸಿದರು.

ಜೆಡಿಎಸ್ ಮುಖಂಡರ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ರಾಜೀನಾಮೆ ನೀಡಲು ಬೆಂಗಳೂರಿಗೆ ಬಂದೆ. ಆದರೆ, ವಿಧಾನಸಭಾಧ್ಯಕ್ಷ ಕೆ.ಜಿ.ಬೋಪಯ್ಯ ನಗರದಲ್ಲಿ ಇಲ್ಲದ ಕಾರಣ ರಾಜೀನಾಮೆ ನೀಡಲು ಸಾಧ್ಯವಾಗಿಲ್ಲ. ಅವರು ಬಂದ ಕೂಡಲೇ ರಾಜೀನಾಮೆ ನೀಡುತ್ತೇನೆ' ಎಂದರು.

`ಬಿಜೆಪಿಯು ತತ್ವ -ಸಿದ್ಧಾಂತಗಳನ್ನು ಕಳೆದುಕೊಂಡಿರುವುದರಿಂದ ಪಕ್ಷ ತೊರೆಯಲು ನಿರ್ಧರಿಸಿದ್ದೇನೆ. ಜೆಡಿಎಸ್ ನನ್ನ ಮಾತೃಪಕ್ಷ. ಪುನಃ ಅಲ್ಲಿಗೇ ಹೋಗುತ್ತಿದ್ದೇನೆ. ಮತ್ತೆ ಎಂದಿಗೂ ಜೆಡಿಎಸ್ ತೊರೆಯುವುದಿಲ್ಲ' ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT