ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಧನಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ

Last Updated 5 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಅವರ ಬಂಧನಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, `ಆಂಧ್ರಪ್ರದೇಶದಲ್ಲಿ ನಡೆದ ಅಕ್ರಮ ಗಣಿಗಾರಿಕೆ ಕುರಿತ ತನಿಖೆಯನ್ನು ಅಲ್ಲಿನ ಸರ್ಕಾರ 2009ರಲ್ಲಿ ಸಿಬಿಐಗೆ ಒಪ್ಪಿಸಿತ್ತು. ಈ ಹಿನ್ನೆಲೆಯಲ್ಲಿ ರೆಡ್ಡಿ ಅವರನ್ನು ಸಿಬಿಐ ಬಂಧಿಸಿದೆ~ ಎಂದು ಹೇಳಿದರು.

`ರಾಜ್ಯದಲ್ಲಿ ನಡೆದ ಅಕ್ರಮ ಗಣಿಗಾರಿಕೆ ಕುರಿತ ತನಿಖೆಯನ್ನು ಸಿಬಿಐಗೆ ನೀಡಬೇಕು ಎಂಬ ನಿಲುವಿಗೆ ಪಕ್ಷ ಈಗಲೂ ಬದ್ಧ~ ಎಂದ ಅವರು, `ಅಕ್ರಮ ಗಣಿಗಾರಿಕೆ ಕುರಿತ ಲೋಕಾಯುಕ್ತ ವರದಿಯಲ್ಲಿ ದೋಷಾರೋಪಕ್ಕೆ ಒಳಗಾಗಿರುವವರ ವಿರುದ್ಧ ಸರ್ಕಾರ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು~ ಎಂದು ಒತ್ತಾಯಿಸಿದರು.

ಲೋಕಾಯುಕ್ತ ವರದಿ ಹಿನ್ನೆಲೆಯಲ್ಲಿ ಮಾಜಿ ಸಚಿವ ವಿ. ಮುನಿಯಪ್ಪ ಮತ್ತು ಶಾಸಕ ಅನಿಲ್ ಲಾಡ್ ಅವರಿಗೆ ಪಕ್ಷದ ಕಡೆಯಿಂದ ನೋಟಿಸ್ ನೀಡಲಾಗಿದೆ. ತಪ್ಪಿತಸ್ಥರು ಎಂದು ಸಾಬೀತಾದರೆ ಅವರ ವಿರುದ್ಧವೂ ಪಕ್ಷ ಕ್ರಮ ತೆಗೆದುಕೊಳ್ಳಲಿದೆ ಎಂದರು.

~ಗಣಿ ಅಕ್ರಮ: ಎಲ್ಲರನ್ನೂ ಬಂಧಿಸಲಿ~
ಮೈಸೂರು: ~ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಎಲ್ಲರನ್ನೂ ಸಿಬಿಐ ಬಂಧಿಸಬೇಕು~ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಹೇಳಿದರು. ~ಯಾರೇ ಆದರೂ ಸರಿ ಅಕ್ರಮವಾಗಿ ಗಳಿಸಿರುವ ಸಂಪತ್ತನ್ನು ಸರ್ಕಾರ ವಶಕ್ಕೆ ತೆಗೆದುಕೊಳ್ಳಬೇಕು~ ಎಂದು ಆಗ್ರಹಿಸಿದರು.

~ಕಳೆದ ವರ್ಷ ಕಾಂಗ್ರೆಸ್ ಪಕ್ಷ ಅಕ್ರಮ ಗಣಿಗಾರಿಕೆ ವಿಷಯವನ್ನು ಮುಂದಿಟ್ಟುಕೊಂಡು ಬೆಂಗಳೂರಿನಿಂದ ಬಳ್ಳಾರಿ ತನಕ ಪಾದಯಾತ್ರೆ ನಡೆಸಿತ್ತು. ಇದರ ಫಲವಾಗಿ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಬಂಧನವಾಗಿದೆ. ಇದರ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿಲ್ಲ. ಬಿಜೆಪಿ ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದೆ. ಸಿಬಿಐ ಸಂವಿಧಾನಾತ್ಮಕವಾಗಿ ಕೆಲಸ ಮಾಡುತ್ತಿದೆ. ಇದರ ಮೇಲೆ ಯಾರೂ ಒತ್ತಡ ಹೇರಲು ಆಗುವುದಿಲ್ಲ~ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT