ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ಘೋಷಣೆಗೆ ಕೇಂದ್ರಕ್ಕೆ ಶಿಫಾರಸು

Last Updated 27 ಸೆಪ್ಟೆಂಬರ್ 2011, 8:55 IST
ಅಕ್ಷರ ಗಾತ್ರ

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಳೆ ಬಾರದೇ ತೀವ್ರ ಬರ ಪರಿಸ್ಥಿತಿ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಅಗತ್ಯವಿರುವ ಎಲ್ಲಾ ಆರ್ಥಿಕ ನೆರವು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಭರವಸೆ ನೀಡಿದ್ದಾರೆ.

ರಾಜ್ಯ ಮೀನುಗಾರಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ವಸಂತ ಅಸ್ನೋಟಿಕರ್ ಅವರ ನೇತೃತ್ವದಲ್ಲಿ ಜಿಲ್ಲೆಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರ ನಿಯೋಗವು ಸೋಮವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರ ಗೃಹ ಕಚೇರಿ `ಕೃಷ್ಣಾ~ದಲ್ಲಿ ಭೇಟಿ ಮಾಡಿ ಜಿಲ್ಲೆಯಲ್ಲಿನ ಬರಸ್ಥಿತಿಯನ್ನು ಮನವರಿಕೆ ಮಾಡಿದ ಸಂದರ್ಭದಲ್ಲಿ ಈ ಭರವಸೆ ನೀಡಿದರು.

ಜಿಲ್ಲೆ ಬರಗಾಲಕ್ಕೆ ತುತ್ತಾಗಿರುವುದರಿಂದ ್ಙ 432 ಕೋಟಿ ನಷ್ಟವಾಗಿದೆ. ಬರ ಪರಿಹಾರಕ್ಕಾಗಿ ಇದುವರೆಗೆ ್ಙ ಎರಡು ಕೋಟಿ ಬಿಡುಗಡೆಯಾಗಿದ್ದು, ಇನ್ನೂ ್ಙ ಐದು ಕೋಟಿ  ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ  ಭರವಸೆ ನೀಡಿದ್ದಾರೆ ಎಂದು ಸಚಿವ ಆನಂದ ಅಸ್ನೋಟಿಕರ್ ಹೇಳಿದರು.

ಮಳೆ ಇಲ್ಲದಿರುವುದರಿಂದ ಮೇವಿನ ಕೊರತೆಯಿಂದ ಜಾನುವಾರುಗಳ ರಕ್ಷಣೆ ಕಷ್ಟವಾಗುವುದು. ಜಾನುವಾರುಗಳ ರಕ್ಷಣೆಗಾಗಿ ಕೂಡಲೇ ಜಿಲ್ಲೆಯ 16 ಹೋಬಳಿಗಳಲ್ಲಿ ಗೋಶಾಲೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿದ್ದು, ಗೋಶಾಲೆಗೆ ಬೇಕಾದ ಮೇವು ಖರೀದಿಸಲು ಅನುದಾನ ಬಿಡುಗಡೆ ಮಾಡಲಾಗುವುದು ಮತ್ತು ಬರದಿಂದ ಕೆಲವು ಸ್ಥಳಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಬಹುದೆಂದು ಇದಕ್ಕೂ ಅಗತ್ಯವಿರುವ ಅನುದಾನ ನೀಡಲಾಗುತ್ತದೆ ಎಂದು ಹೇಳಿದರು.

ಬರ ಪರಿಸ್ಥಿತಿಯಿಂದ ಉದ್ಯೋಗದ ಸಮಸ್ಯೆ ಎದುರಾಗಲಿದ್ದು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಅಡಿ ಪ್ರತಿ ಗ್ರಾಮ ಪಂಚಾಯ್ತಿಯಿಂದ ಜನರಿಗೆ ತಕ್ಷಣ ಉದ್ಯೋಗ ನೀಡಲು ಸೂಚನೆ ನೀಡಲಾಗುತ್ತದೆ ಎಂದು ನಿಯೋಗಕ್ಕೆ ಮುಖ್ಯಮಂತ್ರಿ  ತಿಳಿಸಿದ್ದಾರೆ.

ನಿಯೋಗ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿರುವುದು ಒಟ್ಟಾರೆ ಫಲಪ್ರದವಾಗಿದೆ. ಜಿಲ್ಲೆಗೆ ಬೇಕಾದ ಎಲ್ಲಾ ಆರ್ಥಿಕ ನೆರವು ಹಾಗೂ ಸೌಲಭ್ಯ ನೀಡುವುದಾಗಿ ಸಂಪೂರ್ಣ ಭರವಸೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ ವಸಂತ ಅಸ್ನೋಟಿಕರ್ ತಿಳಿಸಿದ್ದಾರೆ.

 ಜಿಲ್ಲೆಯ 6 ತಾಲ್ಲೂಕುಗಳ ಪೈಕಿ 4 ತಾಲ್ಲೂಕುಗಳು ಬರಪೀಡಿತ ಎಂದು ಘೋಷಿಸಲು ಅರ್ಹವಾಗಿವೆ. ಉಳಿದ 2ತಾಲ್ಲೂಕುಗಳ ಪರಿಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ. ಬರಪೀಡಿತ ಎಂದು ಘೋಷಿಸಲು ಸಿದ್ಧತೆ ನಡೆದಿದೆ ಎಂದು ಅವರು ಹೇಳಿದರು.

ಚಳ್ಳಕೆರೆ, ಮೊಳಕಾಲ್ಮುರು, ಹಿರಿಯೂರು ತಾಲ್ಲೂಕುಗಳಲ್ಲಿ ಮಳೆ ಇಲ್ಲದೆ ಬಿತ್ತನೆ ಮಾಡಿಲ್ಲ. ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ ತಾಲ್ಲೂಕುಗಳಲ್ಲಿ ಬಿತ್ತನೆ ಮಾಡಿದರೂ ಮಳೆ ಬಾರದೆ ಬೆಳೆ ಸಂಪೂರ್ಣ ಒಣಗಿವೆ. ಜಿಲ್ಲೆಯನ್ನು ಬರಪೀಡಿತ ಪ್ರದೇಶ ಘೋಷಣೆ ಮಾಡಲು ಶೇ. 80ರಷ್ಟು ಮಾನದಂಡ ಒಳಗೊಂಡಿದ್ದು, ಬರ ಪ್ರದೇಶವೆಂದು ಘೋಷಣೆಗೆ ಅತಿ ಶೀಘ್ರದಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ನಿಯೋಗಕ್ಕೆ ಭರವಸೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಂದಾಜು ್ಙ 450 ಕೋಟಿ ಬೆಳೆ ನಷ್ಟವಾಗಿದೆ ಎಂದು ಮುಖ್ಯಮಂತ್ರಿಗೆ ಅಧಿಕಾರಿಗಳು ಮಾಹಿತಿ ನೀಡಿದರು.

ಸಂಸತ್ ಸದಸ್ಯ ಜನಾರ್ದನ ಸ್ವಾಮಿ, ವಿಧಾನ ಪರಿಷತ್ ಮುಖ್ಯ ಸಚೇತಕ ಡಾ.ಎ.ಎಚ್. ಶಿವಯೋಗಿಸ್ವಾಮಿ, ಶಾಸಕರಾದ ಎಂ.ಚಂದ್ರಪ್ಪ, ಗೂಳಿಹಟ್ಟಿ ಶೇಖರ್, ಜಿ.ಎಚ್. ತಿಪ್ಪಾರೆಡ್ಡಿ, ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ನಾಗರಾಜ್ ನಿಯೋಗದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT