ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಲಿಷ್ಠ ಭಾರತ ನಿರ್ಮಾಣ; ಶಿಕ್ಷಕ ಪಾತ್ರ ಹಿರಿದು

Last Updated 6 ಸೆಪ್ಟೆಂಬರ್ 2011, 9:15 IST
ಅಕ್ಷರ ಗಾತ್ರ

ಮಡಿಕೇರಿ: ಭವ್ಯ ಭಾರತ ನಿರ್ಮಾಣ ಮಾಡು ವಲ್ಲಿ ಶಿಕ್ಷಕರ ಪಾತ್ರ ದೊಡ್ಡದು. ಆ ದಿಸೆಯಲ್ಲಿ ಶಿಕ್ಷಕರ ಜತೆಗೆ ಪೋಷಕರು ಮತ್ತು ಸಮಾಜದ ನಾಗರಿಕರೆಲ್ಲರೂ ಕೈಜೋಡಿಸಿದಾಗ ಬಲಿಷ್ಠ ಭಾರತ ಕಟ್ಟಲು ಸಾಧ್ಯ ಎಂದು ವಿಧಾನ ಸಭಾಧ್ಯಕ್ಷರಾದ ಕೆ.ಜಿ.ಬೋಪಯ್ಯ ತಿಳಿಸಿದರು.

ಕೊಡಗು ಜಿ.ಪಂ.ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಆಶ್ರಯದಲ್ಲಿ ನಗರದ ಸಂತ ಜೋಸೆಫರ ಶಾಲೆಯಲ್ಲಿ ಸೋಮವಾರ ನಡೆದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯಾವುದೇ ಒಂದು ಸಮಾಜ ಉತ್ತಮಗೊಳ್ಳಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ. ಅದನ್ನು ಅರಿತು ಶಿಕ್ಷಕರು ಮಕ್ಕಳಿಗೆ ಉತ್ತಮ ಜ್ಞಾನವನ್ನು ನೀಡುವ ಮೂಲಕ ವಿದ್ಯಾರ್ಥಿಗಳ ಏಳಿಗೆಗೆ ಶ್ರಮಿಸಬೇಕು. ಶಿಕ್ಷಕರು ಸಮಾಜದ ಶಿಲ್ಪಿಗಳಾಗಿದ್ದು. ವಿದ್ಯಾರ್ಥಿಗಳನ್ನು ಜ್ಞಾನದ ಬೆಳಕಿನತ್ತ ಕರೆದೊಯ್ಯುವ ಮಹತ್ತರ ಜವಾಬ್ದಾರಿ ಹೊಂದಿದ್ದಾರೆ ಎಂದರು.

ದುಡಿಮೆಗೆ ತಕ್ಕ ಪ್ರತಿಫಲ ಇರಬೇಕು. ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಗೆ ಇತರೆ ದಕ್ಷಿಣ ರಾಜ್ಯಗಳಿಗೆ ಹೋಲಿಸಿದರೆ ವೇತನದಲ್ಲಿ ವ್ಯತ್ಯಾಸವಿದೆ. ಶಿಕ್ಷಣ ಸಚಿವರು ಇದರ ಬಗ್ಗೆ ಗಮನಹರಿಸುತ್ತಾರೆ ಎಂದು ಕೆ.ಜಿ. ಬೋಪಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ರಾಷ್ಟ್ರಪತಿ ಡಾ. ಅಬ್ದುಲ್ ಕಲಾಂ ಅವರ ಆಶಯದಂತೆ 2020 ವೇಳೆಗೆ ಅಭಿವದ್ಧಿ ಹೊಂದಿದ ರಾಷ್ಟ್ರವಾಗಬೇಕಾದರೆ ಸುಶಿಕ್ಷಿತರ ಸಂಖ್ಯೆ ಹೆಚ್ಚಾಗಬೇಕು. ಶಿಕ್ಷಣ ಕ್ಷೇತ್ರಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚಿನ ಅನುದಾನ ನೀಡುತ್ತಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವುದರ ಜೊತೆಗೆ ಗುಣಾತ್ಮಕ ಶಿಕ್ಷಣ ನೀಡುವತ್ತ  ಗಮನ ಹರಿಸಬೇಕು ಎಂದು ಕೆ.ಜಿ. ಬೋಪಯ್ಯ ಅವರು ಹೇಳಿದರು                                             

ಜಿ.ಪಂ.ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರಿಗೆ ಸಕಾಲದಲ್ಲಿ ವೇತನ ದೊರಕಿಸಿಕೊಡಲು ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಲೆಕ್ಕಾಧಿಕಾರಿಯವರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಎನ್.ಕೃಷ್ಣಪ್ಪ, ನಿವೃತ್ತ ಪ್ರಾಧ್ಯಾಪಕ ಎಂ.ಆರ್. ನಾಗರಾಜು,ಅಖಿಲ ಕೊಡಗು ಶಿಕ್ಷಕರ ಸಹಕಾರ ಪತ್ತಿನ ಅಧ್ಯಕ್ಷರಾದ ಕೆ.ಬಿ. ಕಾಳಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಎಸ್.ಎ. ಯೋಗೇಶ್ ಮಾತನಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಚಂದ್ರೇಗೌಡ, ಡಯಟ್ ಉಪ ನಿರ್ದೇಶಕರಾದ ಸಿದ್ದಲಿಂಗಸ್ವಾಮಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಸಿ.ಟಿ. ಸೋಮಶೇಖರ, ಅನುದಾನಿತ ಪ್ರೌಢಶಾಲೆಯ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಡಿ.ಎ. ಮೋಹನ್, ಕೊಡಗು ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಜೆ.ಗೋಪಾಲ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಕೆ.ಎಂ.ಚಂಗಪ್ಪ,  ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷರಾದ ಎ.ಸದಾನಂದ,  ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಮಚ್ಚಾಡೋ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಧಿಕಾರಿ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ, ಎಸ್.ಎಸ್.ಎಲ್.ಸಿ.ಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆಗಳ ಮುಖ್ಯ ಶಿಕ್ಷಕರು, ಜಿಲ್ಲೆಯ 16 ಹೋಬಳಿಯ 16 ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು ಮತ್ತು  ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ನಿವೃತ್ತ ಶಿಕ್ಷಕರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದ ಶಿಕ್ಷಕರನ್ನು ಗೌರವಿಸಲಾಯಿತು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎನ್.ಎ. ರಾಮಸ್ವಾಮಿ ಸ್ವಾಗತಿಸಿದರು. ನಾಪೋಕ್ಲು ಮತ್ತು ಕಕ್ಕಬ್ಬೆ ಪ್ರಾಥಮಿಕ ಶಾಲೆಯ ಶಿಕ್ಷಕರು ಪ್ರಾರ್ಥಿಸಿದರು. ಶಿಕ್ಷಕರಾದ ರೋಹಿನಿ ಮತ್ತು ಶ್ರೀಧರ ನಿರೂಪಿಸಿದರು. ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಎ. ಶ್ರೀಧರ್ ವಂದಿಸಿದರು.

`ಪ್ರಾಮಾಣಿಕತೆ ರೂಢಿಸಿಕೊಳ್ಳಿ~
ಸೋಮವಾರಪೇಟೆ: ಶಿಕ್ಷಕರು ಶಿಸ್ತು, ಪ್ರಾಮಾಣಿಕತೆ ಮತ್ತು ಕರ್ತವ್ಯನಿಷ್ಠೆಯನ್ನು ರೂಢಿಸಿಕೊಳ್ಳಬೇಕೆಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಕರೆ ನೀಡಿದರು.

ಸೋಮವಾರ ಶಿಕ್ಷಕರ ಕಲ್ಯಾಣ ನಿಧಿ, ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿಯ ಆಶ್ರಯದಲ್ಲಿ ಇಲ್ಲಿನ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳ ಮನಸ್ಸನ್ನು ಅರಿತುಕೊಂಡು ಶಿಕ್ಷಕರು ಪಾಠ ಮಾಡಬೇಕು. ಕೊಡಗು ಜಿಲ್ಲೆಯು ವೀರ ಸೇನಾನಿಗಳ ನಾಡಾಗಿದ್ದು, ಶಿಸ್ತು ಮತ್ತು ಸಂಯಮ ಇಲ್ಲಿನ ಜನರಲ್ಲಿ ಹಾಸುಹೊಕ್ಕಾಗಿದ್ದರೂ ಸಮಯ ಪ್ರಜ್ಞೆಯ ಕೊರತೆಯಿದೆ. ಶಿಕ್ಷಕರು ಗುಣಾತ್ಮಕ ಶಿಕ್ಷಣದ ಜೊತೆಗೆ ದೇಶಭಕ್ತಿಯ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕೆಂದರು.

ಮುಂದಿನ ದಿನಗಳಲ್ಲಿ ಸೋಮವಾರಪೇಟೆಯಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತದೆ. ಗಿರಿಭತ್ಯೆಗೆ ಸಂಬಂಧಿಸಿದಂತೆ ಈಗಾಗಲೆ ಸರ್ಕಾರದ ಜೊತೆಗೆ ಮಾತುಕತೆ ಮುಂದುವರಿದಿದ್ದು, ಜಿಲ್ಲೆಯ 3 ತಾಲ್ಲೂಕುಗಳಿಗೂ ಅನ್ವಯವಾಗುವಂತೆ ಇದರ ಪ್ರಯೋಜನ ಸಿಗುವಂತೆ ನೋಡಿಕೊಳ್ಳ ಲಾಗುತ್ತದೆ ಎಂಬ ಭರವಸೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವಿ.ಕೆ.ಲೋಕೇಶ್ ಮಾತನಾಡಿ ದೇಶದ ಉನ್ನತಿಗೆ ಶಿಕ್ಷಣವೇ ಮೂಲವಾಗಿದೆ. ಅಂತಹ ಶಿಕ್ಷಣ ನೀಡುವ ಶಿಕ್ಷಕರನ್ನು ಗೌರವಿಸಬೇಕೆಂಬ ಉದ್ದೇಶದಿಂದ ಡಾ.ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನವಾಗಿ ಆಚರಿಸಲಾಗುತ್ತಿದೆ ಎಂದರು. ಅಂತಹ ಶಿಕ್ಷಣ ತಜ್ಞರ ಮಾರ್ಗದರ್ಶನ ಇಂದಿನ ಶಿಕ್ಷಕರಿಗೆ ಮಾದರಿಯಾಗಬೇಕಾಗಿದೆ ಎಂದು ನುಡಿದರು. 

 ಮೈಸೂರಿನ ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ.ಪಿ.ಕೆ.ರಾಜಶೇಖರ್ ಮಾತನಾಡಿ ಜ್ಞಾನದ ಬೆಳಕನ್ನು ನೀಡುವ ಗುರುವಿಗೆ ಸಮಾಜದಲ್ಲಿ ಉನ್ನತ ಸ್ಥಾನವಿದೆ ಎಂದರು. ಸಾತ್ವಿಕತೆ ಹಾಗೂ ಉತ್ತಮ ಆದರ್ಶಗಳನ್ನು ಶಿಕ್ಷಕರು ಮೈಗೂಡಿಸಿಕೊಂಡು ವಿವೇಕ, ಸಂಯಮ ಮತ್ತು ಆತ್ಮವಿಶ್ವಾಸ ಹೊಂದಿದ ಮಕ್ಕಳನ್ನು ತಯಾರುಮಾಡುವ ಹೊಣೆ ಶಿಕ್ಷಕರ ಮೇಲಿದೆ ಎಂದು ಹೇಳಿದರು.

ನಿವೃತ್ತ ಶಿಕ್ಷಕರನ್ನು ಜಿಲ್ಲಾ ಪಂಚಾಯಿತಿ ಸದಸ್ಯ ಶಿವಪ್ಪ ಸನ್ಮಾನಿಸಿದರು. ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆಯ ಮುಖ್ಯ ಶಿಕ್ಷಕರನ್ನು ಗೌರವಿಸಲಾಯಿತು.

ಜಿಲ್ಲಾ ಪಂಚಾಯಿತಿ ಸದಸ್ಯ ವೆಂಕಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಪೂರ್ಣಿಮಾ ಗೋಪಾಲ್, ಜ್ಯೋತಿ ಶಿವಣ್ಣ, ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ದೇವರಾಜ್, ತಹಶೀಲ್ದಾರ್ ಎ.ದೇವರಾಜ್, ಬಿ.ಇ.ಓ ರಾಮಚಂದ್ರರಾಜೇ ಅರಸ್, ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಪಿ.ಮಹದೇವ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕರುಂಬಯ್ಯ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಬಿ.ಪ್ರಕಾಶ್ ಉಪಸ್ಥಿತರಿದ್ದರು. ಶೇಖರ್ ಮತ್ತು ತಂಡದವರು ರೈತಗೀತೆ ಹಾಡಿದರು. ಶಿಕ್ಷಕ ಮಂಜುನಾಥ್ ನಿರೂಪಿಸಿದರು.

ಕೂಡಿಗೆ ಡಯಟ್‌ನಲ್ಲಿ ಶಿಕ್ಷಕರ ದಿನ
ಕುಶಾಲನಗರ :
`ಮಕ್ಕಳಿಗೆ ಶಾಲೆ ಎಂಬುದು ಪ್ರಯೋಗ ಶಾಲೆ ಇದ್ದಂತೆ. ಇಲ್ಲಿ ಶಿಕ್ಷಕನ ಬೋಧನೆಯ ವೇಗವು ವಿದ್ಯಾರ್ಥಿಗಳ ಗ್ರಹಿಕೆಯ ವೇಗಕ್ಕೆ ಹೊಂದಾಣಿಕೆ ಇದ್ದರೆ ಮಾತ್ರ ಪರಿಪೂರ್ಣ ಕಲಿಕೆ ಸಾಧ್ಯ~  ಎಂದು ವಿಜ್ಞಾನ ಸಂವಹನಕಾರ ಪ್ರೊ.ಎಂ.ಆರ್.ನಾಗರಾಜ್ ಹೇಳಿದರು.

ಇಲ್ಲಿಗೆ ಸಮೀಪದ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯಲ್ಲಿ ಸೋಮವಾರ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಅಧ್ಯಾಪಕನಿಗೆ ಪ್ರತಿ ಬೋಧನೆಯು ಸಂವಹನೆಯ ಹೊಸ ಪ್ರಯೋಗವಾಗಿದ್ದು, ಇದರಲ್ಲಿ ಸೋಲು- ಗೆಲುವು ಸಹಜ. ಇವುಗಳೆರಡರಿಂದಲೂ ಅಧ್ಯಾಪಕ ಬೋಧನೆಯ ಪಾಠ ಕಲಿಯಬೇಕು ಎಂದರು.

ಶಾಲೆ ಎಂಬ ಕಾರ್ಯಾಗಾರದಲ್ಲಿ ಯಾವುದೂ ತ್ಯಾಜ್ಯವಲ್ಲ. ಇಲ್ಲಿ ಎಲ್ಲವನ್ನೂ ಪೂರ್ಣವಾಗಿ ಬಳಕೆ ಮಾಡಿಕೊಳ್ಳುವ ಹೊಣೆ ಅಧ್ಯಾಪಕರ ಮೇಲಿದೆ. ತ್ಯಾಜ್ಯವೆಂಬ ಕಸವನ್ನು ಉಪಯುಕ್ತ ರಸವಾಗಿ ಬಳಸಿಕೊಂಡು ಬೋಧನೆಯ ಯಶಸ್ಸು ಸಾಧಿಸಬೇಕು ಎಂದು ನಾಗರಾಜ್ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲ ಸಿ.ಜಿ.ಸಿದ್ದಲಿಂಗಸ್ವಾಮಿ ಮಾತನಾಡಿ `ಶಿಕ್ಷಕನ ಬೋಧನೆಯು ಮಕ್ಕಳ ಕಲಿಕೆಯ ಕುತೂಹಲವನ್ನು ಕೆರಳಿಸಿ ತಣಿಸಿದಾಗ ಸಂವಹನ ಕ್ರಿಯೆ ಯಶಸ್ವಿಯಾಗುತ್ತದೆ. ಮಕ್ಕಳ ಆಲೋಚನೆಗೆ ಪೂರಕವಾಗಿ ವೀಕ್ಷಣೆ ಮತ್ತು ಚಟುವಟಿಕೆ ಇರಬೇಕು ಎಂದರು.

ಡಯಟ್ ಸಂಸ್ಥೆಯ ಸೇವಾಪೂರ್ವ ತರಬೇತಿ ವಿಭಾಗದ ಮುಖ್ಯಸ್ಥ ಎಚ್.ಕೆ.ಪಾಂಡು, ಹಿರಿಯ ಉಪನ್ಯಾಸಕ ಎಸ್.ಸುಂದರ್, ರಾಜ್ಯ ವಿಜ್ಞಾನ ಪರಿಷತ್ತಿನ ಕಾರ್ಯಕಾರಿ ಮಂಡಳಿ ಸದಸ್ಯ ಟಿ.ಜಿ.ಪ್ರೇಮಕುಮಾರ್ ಇದ್ದರು. ಇದೇ ವೇಳೆ ಪ್ರೊ ಎಂ.ಆರ್.ನಾಗರಾಜ್ ಅವರನ್ನು ಪ್ರಾಂಶು ಪಾಲ ಸಿದ್ದಲಿಂಗಸ್ವಾಮಿ ಸನ್ಮಾನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT