ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್ಯವಿವಾಹ: ಎಚ್ಚರ ವಹಿಸಲು ಸೂಚನೆ

Last Updated 6 ಡಿಸೆಂಬರ್ 2012, 8:49 IST
ಅಕ್ಷರ ಗಾತ್ರ

ಹಾಸನ: `ಜಿಲ್ಲೆಯಲ್ಲಿ ಸಾಮೂಹಿಕ ವಿವಾಹ ಅಥವಾ ಇನ್ನಿತರ ಯಾವುದೇ ಸಂದರ್ಭದಲ್ಲಿ ಬಾಲ್ಯ ವಿವಾಹ ನಡೆಯದಂತೆ ಎಚ್ಚರ ವಹಿಸಬೇಕು' ಎಂದು ಜಿಲ್ಲಾಧಿಕಾರಿ ಕೆ.ಪಿ. ಮೋಹನ್ ರಾಜ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. `ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಶಾಲೆ ಬಿಟ್ಟರೆ ಅಂಥ ವಿದ್ಯಾರ್ಥಿನಿಯರ ಬಗ್ಗೆ ಮಾಹಿತಿ ಪಡೆದು ವರದಿ ನೀಡಬೇಕು ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು. ಎಲ್ಲೇ ಆಗಲಿ ಬಾಲ್ಯ ವಿವಾಹ ನಡೆದರೆ ಅಂಥವರ ವಿರುದ್ಧ ಪ್ರಕರಣ ದಾಖಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.

ಮಹಿಳೆಯರ ಮೇಲೆ ಕೌಟುಂಬಿಕ ದೌರ್ಜನ್ಯ ನಡೆದ ಸಂದರ್ಭದಲ್ಲಿ 24 ಗಂಟೆಯೊಳಗೆ ವಿಷಯವನ್ನು ಪೊಲೀಸ್ ವರಿಷ್ಠಾಧಿಕಾರಿ ಗಮನಕ್ಕೆ ತರಬೇಕು. ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಹೆಣ್ಣು ಮಕ್ಕಳು ಕಾಣೆಯಾಗುತ್ತಿರುವುದು ಯಾವ ಕಾರಣಕ್ಕೆ ಎಂಬುದನ್ನು ಪತ್ತೆ ಹಚ್ಚಬೇಕು ಎಂದರಲ್ಲದೇ, ಹೆಣ್ಣು ಮಕ್ಕಳಿಗೆ ತಿಳಿವಳಿಕೆ ನೀಡಲು ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಪುರುಷ ಹಾಗೂ ಸ್ತ್ರೀಯರ ಲಿಂಗಾನುಪಾತದಲ್ಲಿ ವ್ಯತ್ಯಾಸ ಉಂಟಾಗಿದೆ. ಸಾವಿರ ಪುರುಷರಿಗೆ 964 ಸ್ತ್ರೀಯರು ಮಾತ್ರ ಇದ್ದು, ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ನಡೆಯುತ್ತಿರುವ ಸಾಧ್ಯತೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಶಂಕೆ ವ್ಯಕ್ತಪಡಿಸಿದರು.

ಈ ಬಗ್ಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ಸ್ವಯಂ ಸೇವಾ ಸಂಸ್ಥೆ ಪ್ರತಿನಿಧಿಗಳು ಜಂಟಿಯಾಗಿ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದರು.

ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳು ಉತ್ಪಾದಿಸುವ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಕಲ್ಪಿಸಲು ಟಿ.ಎಂ.ಸಿ. ಮೂಲಕ ಜಾಗ ನೀಡಿ ಕಟ್ಟಡ ನಿರ್ಮಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

162 ಮಹಿಳೆಯರು ನಾಪತ್ತೆ
ಜಿಲ್ಲೆಯಲ್ಲಿ ಕಳೆದ ಏಪ್ರಿಲ್‌ನಿಂದ ಈವರೆಗೆ 162 ಮಹಿಳೆಯರು ಕಾಣೆಯಾಗಿದ್ದು ಅವರಲ್ಲಿ 116 ಮಹಿಳೆಯರು ಪತ್ತೆಯಾಗಿದ್ದಾರೆ. 46 ಮಹಿಳೆಯರ ಬಗ್ಗೆ ಮಾಹಿತಿ ಲಭಿಸಿಲ್ಲ. ಇದಲ್ಲದೆ 38 ಗಂಡು ಮಕ್ಕಳು ಕಾಣೆಯಾಗಿದ್ದು ಅವರಲ್ಲಿ 26 ಮಂದಿ ಪತ್ತೆಯಾಗಿದ್ದಾರೆ. 12 ಮಕ್ಕಳು ಪತ್ತೆಯಾಗಿಲ್ಲ. 89 ಹೆಣ್ಣು ಮಕ್ಕಳು ಕಾಣೆಯಾಗಿದ್ದು 59 ಮಕ್ಕಳು ಪತ್ತೆಯಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 123 ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಾಗಿವೆ. ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಚನ್ನರಾಯಪಟ್ಟಣದ ಸ್ವಧಾರ ಕೇಂದ್ರದಲ್ಲಿ ನೆಲೆ ಒದಗಿಸಲಾಗುತ್ತಿದೆ ಎಂದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪುಟ್ಟಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ಯಾಮಲಾದೇವಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸವರಾಜು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆ ಪದಾಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT