ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಬಂದ್ ವಿರುದ್ಧ ಕಾಂಗ್ರೆಸ್ ಧರಣಿ

Last Updated 24 ಜನವರಿ 2011, 10:20 IST
ಅಕ್ಷರ ಗಾತ್ರ

ದಾವಣಗೆರೆ: ಬಿಜೆಪಿ ಶನಿವಾರ ಕರೆ ನೀಡಿದ್ದ ರಾಜ್ಯವ್ಯಾಪಿ ಬಂದ್‌ನಿಂದ ಜನಸಾಮಾನ್ಯರಿಗಾದ ತೊಂದರೆಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾನುವಾರ ಮಹಾನಗರ ಪಾಲಿಕೆ ಆವರಣದ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಿದರು.

ಮುಖ್ಯಮಂತ್ರಿಯಂತಹ ಉನ್ನತ ಸ್ಥಾನದಲ್ಲಿರುವ ಯಡಿಯೂರಪ್ಪ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಭೂಹಗರಣವೂ ಸೇರಿದಂತೆ ಹಲವು ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ರಾಜ್ಯಪಾಲರು ‘ಲಾಯರ್ ಜಸ್ಟೀಸ್ ಫೋರಂ’ಗೆ ಅನುಮತಿ ನೀಡಿರುವುದು ಸಂವಿಧಾನಬದ್ಧವಾಗಿದೆ. ಆದರೆ, ಅದನ್ನು ಸಹಿಸಿಕೊಳ್ಳಲು ಸಾಧ್ಯವಾಗದ ಬಿಜೆಪಿ ಸುಪ್ರೀಂಕೋರ್ಟ್ ಆದೇಶವನ್ನೂ ಕಡೆಗಣಿಸಿ, ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಬಂದ್‌ಗೆ ಕರೆ ನೀಡಿದ್ದು ಕಾನೂನುಬಾಹಿರ ಎಂದು ಆರೋಪಿಸಿದರು.

ಬಿಜೆಪಿ ಸ್ವಯಂಘೋಷಿತ ಬಂದ್‌ಗೆ ಕರೆ ನೀಡಿದ್ದರೂ, ವಾಸ್ತವದಲ್ಲಿ ಆ ಪಕ್ಷದ ಕಾರ್ಯಕರ್ತರು ಬಲವಂತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಜನರ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ. ಸಂಚಾರಕ್ಕೆ ಅಡ್ಡಿಪಡಿಸಿ ಪ್ರಯಾಣಿಕರು ಪರದಾಡುವಂತೆ ಮಾಡಿದ್ದಾರೆ. ಬಸ್ ಮತ್ತಿತರ ಸಾರ್ವಜನಿಕ ಆಸ್ತಿಗೆ ಧಕ್ಕೆ ಮಾಡುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ಅಪಾರ ನಷ್ಟ ಉಂಟುಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಹಾಗೂ ಅವರ ಸಚಿವ ಸಂಪುಟದ ಸಹೋದ್ಯೋಗಿಗಳು ಕೂಡಲೇ, ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಜಬ್ಬಾರ್, ಮಾಜಿ ಶಾಸಕ ಮಹಿಮ ಪಟೇಲ್, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಡಾ.ವೈ. ರಾಮಪ್ಪ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕೆಪಿಸಿಸಿ ಸದಸ್ಯ ಡಿ. ಬಸವರಾಜ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಡಿ. ರಾಜಕುಮಾರ್, ಬಿ.ಎಚ್. ವೀರಭದ್ರಪ್ಪ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT