ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ವೈಫಲ್ಯ ಮನವರಿಕೆಗೆ ಕಾಂಗ್ರೆಸ್ ಪಾದಯಾತ್ರೆ

Last Updated 18 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನ ಮಂಡಲ ಅಧಿವೇಶನ ಮುಗಿದ ಬೆನ್ನಿಗೇ ಮುಂಬರುವ ವಿಧಾನಸಭಾ ಚುನಾವಣೆಯತ್ತ ಕಾಂಗ್ರೆಸ್ ದೃಷ್ಟಿ ನೆಟ್ಟಿದೆ. ಜನಜಾಗೃತಿಗಾಗಿ 24 ಜಿಲ್ಲೆಗಳಲ್ಲಿ ಪ್ರವಾಸ, 12 ಜಿಲ್ಲೆಗಳಲ್ಲಿ ಮೂರು ಹಂತದ ಪಾದಯಾತ್ರೆ ಹಮ್ಮಿಕೊಂಡಿದೆ.

ಇದೇ 23ರಂದು ಕೋಲಾರ ಜಿಲ್ಲೆಯಿಂದ ಆರಂಭವಾಗುವ ಪ್ರವಾಸದಲ್ಲಿ ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕೆಪಿಸಿಸಿ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಪಕ್ಷದ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಅಧ್ಯಕ್ಷರ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪರಮೇಶ್ವರ್, 23ರಿಂದ ಆರಂಭವಾಗುವ ಪ್ರವಾಸ ಫೆಬ್ರುವರಿ ಕೊನೆ ಅಥವಾ ಮಾರ್ಚ್ ಮೊದಲ ವಾರದವರೆಗೆ ನಡೆಯಲಿದೆ. 24 ಜಿಲ್ಲೆಗಳಲ್ಲಿ ಸಮಾವೇಶಗಳನ್ನು ಏರ್ಪಡಿಸುವ ಮೂಲಕ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.

ಕೃಷ್ಣಾ `ಬಿ' ಸ್ಕೀಂ ಯೋಜನೆಯ ಅನುಷ್ಠಾನದಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಇದರಿಂದಾಗಿ 400 ಟಿಎಂಸಿ ಅಡಿ ನೀರು ಆಂಧ್ರಪ್ರದೇಶಕ್ಕೆ ಹೋಗುತ್ತಿದೆ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಮೊದಲ ಹಂತದಲ್ಲಿ ಜನವರಿ 6ರಿಂದ 14ರವರೆಗೆ ಹೊಸಪೇಟೆಯಿಂದ ಕೂಡಲಸಂಗಮದವರೆಗೆ 130 ಕಿ.ಮೀ. ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.

ಕೇಂದ್ರ ಸರ್ಕಾರ ಸಂವಿಧಾನದ 371ನೇ ಕಲಂಗೆ ತಿದ್ದುಪಡಿ ತರುವ ಮೂಲಕ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿದೆ. ಇದರಿಂದ ಆಗುವ ಅನುಕೂಲಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಫೆಬ್ರುವರಿ 3ರಿಂದ 9ರವರೆಗೆ ಬಸವಕಲ್ಯಾಣದಿಂದ ಜೇವರ್ಗಿವರೆಗೆ 115 ಕಿ.ಮೀ. ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.

ರಾಜ್ಯ ಸರ್ಕಾರದ ವೈಫಲ್ಯಗಳು, ಭ್ರಷ್ಟಾಚಾರ, ದುರಾಡಳಿತದ ಬಗ್ಗೆ ಜನರ ಗಮನ ಸೆಳೆಯಲು ಫೆಬ್ರುವರಿ 23ರಿಂದ ಮಾರ್ಚ್ 2ರವರೆಗೆ ಮೈಸೂರಿನಿಂದ ಬೆಂಗಳೂರು ಹೊರವಲಯದ ಕೆಂಗೇರಿವರೆಗೆ ಪಾದಯಾತ್ರೆ ಏರ್ಪಡಿಸಲಾಗಿದೆ ಎಂದು ಅವರು ತಿಳಿಸಿದರು.

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಎಲ್ಲ ಜಿಲ್ಲೆಗಳಿಂದ ಆಕಾಂಕ್ಷಿಗಳ ಪಟ್ಟಿ ಬಂದಿದೆ. ರಾಜ್ಯ ಚುನಾವಣಾ ಸಮಿತಿ ಪರಿಶೀಲನೆ ನಡೆಸಿದ ನಂತರ ಕೇಂದ್ರ ಚುನಾವಣಾ ಸಮಿತಿಗೆ ಪಟ್ಟಿಯನ್ನು ಕಳುಹಿಸಿಕೊಡಲಿದೆ. ಟಿಕೆಟ್ ನೀಡುವ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.ಯಾವ ಪಕ್ಷದೊಂದಿಗೂ ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿಲ್ಲ. ಕಾಂಗ್ರೆಸ್ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿದೆ. ಸ್ಥಳೀಯ ನಾಯಕರೊಂದಿಗೆ ಚರ್ಚಿಸಿದ ನಂತರವೇ ಕಾಂಗ್ರೆಸ್‌ಗೆ ಬರುವವರನ್ನು ಸೇರಿಸಿಕೊಳ್ಳಲಾಗುವುದು ಎಂದು ಉತ್ತರಿಸಿದರು.

ಮೋಹನ್‌ದಾಸ್ ಉಚ್ಚಾಟನೆ

ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ಕಾರಣಕ್ಕೆ ಕೆಪಿಸಿಸಿ ಕಾರ್ಯದರ್ಶಿ ಮೋಹನ್‌ದಾಸ್ ಹೆಗ್ಡೆ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ಎಸ್.ಬೋಸರಾಜು ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರನ್ನು ಬದಲಾಯಿಸದಿದ್ದರೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರಾಜಯಗೊಳ್ಳಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಹೆಗ್ಡೆ ಪತ್ರ ಬರೆದಿದ್ದರು. ಅಲ್ಲದೆ ಕಾಂಗ್ರೆಸ್ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಕೆಲವು ಶಾಸಕರ ವಿರುದ್ಧವೂ ಆರೋಪ ಮಾಡಿದ್ದರು. ಹೀಗಾಗಿ ಹೆಗ್ಡೆ ಅವರನ್ನು ಆರು ವರ್ಷಗಳ ಕಾಲ ಉಚ್ಚಾಟಿಸಿ ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ ಎಂದು ಬೋಸರಾಜು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT