ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಲೆ ಏರಿಕೆ: ಕಾರ್ಮಿಕರ ಪ್ರತಿಭಟನೆ

Last Updated 20 ಡಿಸೆಂಬರ್ 2012, 10:36 IST
ಅಕ್ಷರ ಗಾತ್ರ

ಉಡುಪಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಅಂಚೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಸದಸ್ಯರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.

ಹಳೆ ತಾಲ್ಲೂಕು ಕಚೇರಿ ಬಳಿ ಬುಧವಾರ ಸಮಾವೇಶಗೊಂಡ ನೂರಕ್ಕೂ ಹೆಚ್ಚಿನ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕಾರ್ಮಿಕರ ಹಿತಾಸಕ್ತಿಯನ್ನು ಸರ್ಕಾರ ಕಡೆಗಣಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಿ ಮುತ್ತಿಗೆ ಹಾಕಲು ಯತ್ನಿಸಿದಾಗ  ಪೊಲೀಸರು ಬಂಧಿಸಿದರು.

ಆಹಾರ ಧಾನ್ಯಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಇದರಿಂದಾಗಿ ಸಾಮಾನ್ಯ ಜನರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಬೆಲೆಗಳನ್ನು ಕಡಿಮೆ ಮಾಡಲು ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರ ಸಾವಿರಾರು ಕೋಟಿ ಆಹಾರ ಸಾಮಗ್ರಿಯನ್ನು ದಾಸ್ತಾನು ಇಟ್ಟಿದೆ. ಆದರೆ ಅದನ್ನು ಪಡಿತರ ವ್ಯವಸ್ಥೆ ಮೂಲಕ ಕಡಿಮೆ ಬೆಲೆಯಲ್ಲಿ ವಿತರಣೆ ಮಾಡುತ್ತಿಲ್ಲ. ಸರ್ಕಾರಕ್ಕೆ ಜನ ಸಾಮಾನ್ಯರ ಬಗ್ಗೆ ಕಾಳಜಿಯೇ ಇಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ದೇಶದ ಕಾರ್ಮಿಕ ವರ್ಗದಲ್ಲಿ ಶೇ 93ರಷ್ಟು ಅಸಂಘಟಿತ ಕಾರ್ಮಿಕರಿದ್ದಾರೆ. ಇವರಿಗೆ ಯಾವುದೇ ರೀತಿಯ ಸಾಮಾಜಿಕ ಮತ್ತು ಆರ್ಥಿ ಭದ್ರತೆ ಇಲ್ಲವಾಗಿದೆ. ಕಾರ್ಮಿಕರು ಜೀವನ ಸಾಗಿಸಲು ಕನಿಷ್ಟ ವೇತನವೂ ಸಿಗುತ್ತಿಲ್ಲ. ಗುತ್ತಿಗೆ ಕಾರ್ಮಿಕ ಪದ್ಧತಿ ವ್ಯಾಪಕವಾಗಿದ್ದು ಶೋಷಣೆ ನಡೆಸಲಾಗುತ್ತಿದೆ. ಇದಕ್ಕೆ ಸರ್ಕಾರ ಕಡಿವಾಣ ಹಾಕಬೇಕು, ಎಲ್ಲರಿಗೂ ಭದ್ರತೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಬಹುರಾಷ್ಟ್ರೀಯ ಕಂಪೆನಿಗಳು ಮತ್ತು ಅಮೆರಿಕದ ಒತ್ತಡಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಚಿಲ್ಲರೆ ಕ್ಷೇತ್ರದಲ್ಲಿ ಶೇ. 51ರಷ್ಟು ವಿದೇಶಿ ನೇರ ಬಂಡವಾಳಕ್ಕೆ ಅವಕಾಶ ನೀಡಿದೆ. ಇದರಿಂದ ಸುಮಾರು 5 ಕೋಟಿಯಷ್ಟಿರುವ ಚಿಲ್ಲರೆ ವ್ಯಾಪಾರಿಗಳು ತೊಂದರೆ ಅನುಭವಿಸಬೇಕಾಗಿದೆ. ಈ ಕ್ಷೇತ್ರವನ್ನು ಅವಲಂಬಿಸಿದ್ದ ಉದ್ಯೋಗಿಗಳು ಬೀದಿ ಪಾಲಾಗುವಂತಾಗಿದೆ ಎಂದು ಪ್ರತಿಭಟನಾಕಾರರು ಹೇಳಿದರು.

ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಸಂಚಾಲಕ ಅದಮಾರು ಶ್ರೀಪತಿ ಆಚಾರ್ಯ, ಸಿಐಟಿಯು ಉಡುಪಿ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ, ಕೆ.ವಿ.ಭಟ್, ಕೆ. ಬಾಲಗಂಗಾಧರ ರಾವ್, ಬಿಎಸ್‌ಎನ್‌ಎಲ್ ನೌಕರರ ಸಂಘದ ಕಾರ್ಯದರ್ಶಿ ಶಶಿಧರ ಗೊಲ್ಲ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT