ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಲೆ ಏರಿಕೆ ವಿರೋಧಿಸಿ ಸಿಪಿಐನಿಂದ ಪ್ರತಿಭಟನೆ

Last Updated 1 ಜುಲೈ 2013, 19:37 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು ಎಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಪಕ್ಷದ ನಗರ ಜಿಲ್ಲಾ ಘಟಕದ ಕಾರ್ಯದರ್ಶಿ ಎಂ.ಡಿ.ಹರಿಗೋವಿಂದ, `ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಹೆಚ್ಚು ಮಾಡುತ್ತಲೇ ಇದೆ. ಇದರಿಂದ ಅಗತ್ಯ ವಸ್ತುಗಳ ಬೆಲೆಯೂ ಏರುತ್ತಿದೆ. ಇತ್ತೀಚೆಗೆ ರಾಜ್ಯ ಸರ್ಕಾರ ಬಸ್ ದರವನ್ನು ಶೇ 16ರಷ್ಟು ಏರಿಸಿದೆ. ಇದರ ಹೊರೆ ಜನ ಸಾಮಾನ್ಯರ ಮೇಲೆ ಬೀಳುತ್ತಿದೆ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು' ಎಂದು ಒತ್ತಾಯಿಸಿದರು.

`ಬಿಪಿಎಲ್ ಪಡಿತರ ಚೀಟಿಗಳಿಗೆ ಕಡಿಮೆ ದರದಲ್ಲಿ ಅಕ್ಕಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರ ಎಪಿಎಲ್ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ. ಇದರಿಂದ ರಾಜ್ಯದ ಸುಮಾರು 35 ಲಕ್ಷ ಮಧ್ಯಮ ವರ್ಗದ ಕುಟುಂಬಗಳಿಗೆ ಅನ್ಯಾಯವಾಗುತ್ತಿದೆ. ಇದಲ್ಲದೇ ಮತ್ತೊಮ್ಮೆ ವಿದ್ಯುತ್ ದರ ಏರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಜನರು ಬದುಕುವುದೇ ಕಷ್ಟವಾಗಲಿದೆ' ಎಂದರು.

`ರಾಜ್ಯದ ಗ್ರಾಮೀಣ ಭಾಗಗಳಿಗೆ ಶುದ್ಧ ಕುಡಿಯುವ ನೀರಿನ ಸೌಕರ್ಯ ಒದಗಿಸಲು ಸರ್ಕಾರ ಮುಂದಾಗಬೇಕು. ಬಜೆಟ್‌ಗೂ ಮುನ್ನ ಮುಖ್ಯಮಂತ್ರಿಯವರು ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳ ಸಭೆ ಕರೆದು ಚರ್ಚೆ ನಡೆಸಬೇಕು' ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT