ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿಯಲ್ಲಿ ಅಧಿವೇಶನ ಅಸಾಧ್ಯ: ಸಿಎಂ

Last Updated 10 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಳಗಾವಿ: ಸುವರ್ಣಸೌಧ ಕಾಮಗಾರಿ ನಿರೀಕ್ಷಿತ ವೇಗದಲ್ಲಿ ನಡೆದಿಲ್ಲ. ಡಿಸೆಂಬರ್ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳುವುದಿಲ್ಲ. ಆದ್ದರಿಂದ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಸ್ಪಷ್ಟಪಡಿಸಿದರು.

`ನವೆಂಬರ್ ಅಂತ್ಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ವಿಧಾನಮಂಡಲ ಅಧಿವೇಶನ ನಡೆಸಬೇಕಾಗಿದೆ. ಅಷ್ಟರೊಳಗೆ ಕಟ್ಟಡ ಪೂರ್ಣಗೊಳ್ಳುವುದಿಲ್ಲ. ಮಾರ್ಚ್ 15 ರೊಳಗೆ ಕಟ್ಟಡ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ~ ಎಂದು ಅವರು ಸೊಮವಾರ ಸುದ್ದಿಗಾರರಿಗೆ ತಿಳಿಸಿದರು.

`ಬೆಳಗಾವಿಯಲ್ಲಿ ಪರ್ಯಾಯ ಕಟ್ಟಡದಲ್ಲಿ ಅಧಿವೇಶನ ಮಾಡುವ ಸಾಧ್ಯತೆಗಳು ಕಡಿಮೆ. ಈ ಕುರಿತು ಅ.13 ರಂದು ನಡೆಯುವ ಸಚಿವ ಸಂಪುಟದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು~ ಎಂದು ಅವರು ಹೇಳಿದರು.

`ಸುವರ್ಣಸೌಧ ಕಟ್ಟಡದ ಕಾಮಗಾರಿ ಗುಣಮಟ್ಟದ್ದಾಗಿದೆ. ನಿರೀಕ್ಷಿಸಿದ ವೇಗದಲ್ಲಿ ಆಗಿಲ್ಲ. ವಿದ್ಯುತ್, ಸ್ಕೇಪಿಂಗ್, ಪೀಠೋಪಕರಣ ಕಾಮಗಾರಿ ಕೈಗೆತ್ತಿಕೊಳ್ಳುವಲ್ಲಿ ಸರ್ಕಾರದಿಂದ ವಿಳಂಬವಾಗಿದೆ. ಕಾಮಗಾರಿ ವಿಳಂಬಕ್ಕೆ ಸರ್ಕಾರವೇ ಹೊಣೆಯಾಗಿದೆ~ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

`ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಈಗಾಗಲೇ 14 ಕೋಟಿ ರೂಪಾಯಿ ಪಾವತಿಸಲಾಗಿದೆ. ಆದರೆ ಕೆಲಸ ಪ್ರಾರಂಭವಾಗಿಲ್ಲ~ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿ ಹತ್ತು ದಿನಕ್ಕೊಮ್ಮೆ ಸುವರ್ಣಸೌಧ ಕಾಮಗಾರಿ ಪ್ರಗತಿ ಪರಿಶೀಲನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚಿಸಿದ್ದೇನೆ ಎಂದು ಅವರು ಹೇಳಿದರು.

`ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಂಗಳಿಗೆ ಎರಡು ಬಾರಿ ಆಯಾ ಜಿಲ್ಲೆಗಳಿಗೆ ಭೇಟಿ ನೀಡಬೇಕು ಎಂದು ಸೂಚಿಸಿದ್ದೇನೆ. ಕಡತಗಳನ್ನು 15 ದಿನಗಳಲ್ಲಿ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ~ ಎಂದು ಅವರು ತಿಳಿಸಿದರು.

`ಲೋಕಾಯುಕ್ತರು ನೀಡಿದ್ದ ಗಣಿ ವರದಿ ಕುರಿತು ಅಧ್ಯಯನ ನಡೆಸಲು ರಚಿಸಲಾಗಿದ್ದ ಸಮಿತಿಯು ಈ ವಾರದಲ್ಲಿ ವರದಿ ನೀಡಲಿದೆ. ಆ ಬಗೆಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು~ ಎಂದರು.

`ಕರ್ನಾಟಕದಲ್ಲಿ ಕನ್ನಡಕ್ಕೇ ಅಗ್ರಸ್ಥಾನ. ಹಾಗೆಂದು ನಾವು ಯಾವುದೇ ಭಾಷೆಯ ವಿರುದ್ಧ ಇಲ್ಲ. ಭಾಷಾ ವಿಷಯದಲ್ಲಿ ಸಹಕಾರ ನೀಡಬೇಕು ಎಂದು ಕೇರಳ ಹಾಗೂ ಮಹಾರಾಷ್ಟ್ರ ಸರ್ಕಾರಗಳಿಗೆ ಪತ್ರ ಬರೆಯಲಾಗಿದೆ~ ಎಂದು ಅವರು ಹೇಳಿದರು.

ಸಚಿವರಾದ ಸಿ.ಎಂ. ಉದಾಸಿ, ಉಮೇಶ ಕತ್ತಿ, ಲಕ್ಷ್ಮಣ ಸವದಿ, ಬಾಲಚಂದ್ರ ಜಾರಕಿಹೊಳಿ ಮತ್ತಿತರರು ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT