ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂ ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಳ್ಳಿ

Last Updated 25 ಜನವರಿ 2012, 4:45 IST
ಅಕ್ಷರ ಗಾತ್ರ

ಮಡಿಕೇರಿ: ಒತ್ತುವರಿಯಾಗಿರುವ ಸರ್ಕಾರಿ ಜಾಗವನ್ನು ಸ್ವಾಧೀನಪಡಿಸಿಕೊಳ್ಳಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಿ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಎಲ್ಲರಿಗೂ ಒಂದೇ ಕಾನೂನು. ಕಾನೂನಿನಡಿ ನೀಡಲಾಗಿರುವ ಅಧಿಕಾರವನ್ನು ಬಳಸಿ, ಸರ್ಕಾರಿ ಜಾಗವನ್ನು ತೆರವುಗೊಳಿಸಿ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜಕುಮಾರ್ ಖತ್ರಿ ಅವರು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಕೋಟೆ ವಿಧಾನಸಭಾಂಗಣದಲ್ಲಿ ಮಂಗಳವಾರ ನಡೆದ ಇಲಾಖಾ ಪ್ರಗತಿ ಪರಿಶೀಲನೆ ನಡೆಸಿದ ಅವರು, ಸ್ಥಳೀಯ ಜನಪ್ರತಿನಿಧಿಗಳ ಜೊತೆ ಚರ್ಚಿಸಿ, ಸರ್ಕಾರಿ ಸ್ವತ್ತನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಅಗತ್ಯ ಕ್ರಮಕೈಗೊಳ್ಳಿ ಎಂದು ಸೂಚಿಸಿದರು.

ಜನಪ್ರತಿನಿಧಿಗಳ ಬಗ್ಗೆ ಯಾವುದೇ ಪೂರ್ವಾಗ್ರಹ ಇಟ್ಟುಕೊಳ್ಳದೇ ಅವರೊಂದಿಗೆ ಸಮಾಲೋಚಿಸಿ, ತೆರವುಗೊಳಿಸುವ ಕೆಲಸಕ್ಕೆ ಮುಂದಾಗಬೇಕು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಸಹಕಾರವನ್ನೂ ಪಡೆದುಕೊಳ್ಳಿ ಎಂದು ಅವರು ಹೇಳಿದರು.

ಭೂಮಿ ಒತ್ತುವರಿ ತಡೆ ಕಾರ್ಯಪಡೆಯ ನೇತೃತ್ವ ವಹಿಸಿರುವ ಹಿರಿಯ ಉಪವಿಭಾಗಾಧಿಕಾರಿ ಡಾ.ಎಂ.ಆರ್. ರವಿ ಮಾತನಾಡಿ, ಒತ್ತುವರಿಯಾಗಿರುವ ಸರ್ಕಾರಿ ಜಾಗವನ್ನು ಸ್ವಾಧೀನ ಪಡಿಸಿಕೊಳ್ಳುವ ಸಂಬಂಧ ಜಿಲ್ಲೆಯ ಮೂರೂ ತಾಲ್ಲೂಕುಗಳಲ್ಲಿ ಕಾರ್ಯಪಡೆ ರಚಿಸಲಾಗಿದ್ದು, ಕಾರ್ಯೋನ್ಮುಖವಾಗಿದೆ ಎಂದರು.

ಇದುವರೆಗೆ ಮಡಿಕೇರಿಯಲ್ಲಿ 49, ಸೋಮವಾರಪೇಟೆಯಲ್ಲಿ 35 ಹಾಗೂ ವಿರಾಜಪೇಟೆಯಲ್ಲಿ 15 ಒತ್ತುವರಿ ಪ್ರಕರಣಗಳನ್ನು ಗುರುತಿಸಲಾಗಿದ್ದು, ಒತ್ತುವರಿದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ವಿವರಣೆ ನೀಡಿದರು.

ತೆರವುಗೊಳಿಸದಿರುವ ಅತಿಕ್ರಮಣದಾರರ ಮೇಲೆ ಕ್ರಿಮಿನಲ್ ಮೊಕದ್ದಮೆಗಳನ್ನೂ ಸಹ ಹಾಕಲಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ 5, ಸೋಮವಾರಪೇಟೆಯಲ್ಲಿ 8 ಹಾಗೂ ವಿರಾಜಪೇಟೆಯಲ್ಲಿ 7 ಒಟ್ಟು 20 ಪ್ರಕರಣಗಳಲ್ಲಿ ಕ್ರಿಮಿನಲ್ ಮೊಕದ್ದಮೆ ಹಾಕಲಾಗಿದೆ ಎಂದು ಹೇಳಿದರು.

ಮಧ್ಯೆಪ್ರವೇಶಿಸಿದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಸರ್ಕಾರಿ ಜಮೀನಿನಲ್ಲಿ ಕಾಫಿ ಬೆಳೆಸಿಕೊಂಡು ಉಪಜೀವನ ಮಾಡುತ್ತಿರುವವರ ಜಮೀನನ್ನು ಕಂದಾಯ ಅಧಿಕಾರಿಗಳು ಸ್ವಾಧೀನಪಡಿಸಿಕೊಳ್ಳುತ್ತಿರುವುದಕ್ಕೆ ತಮ್ಮ ಆಕ್ಷೇಪವಿದೆ ಎಂದರು.

ಹಳ್ಳಿಗಳನ್ನು ಬಿಟ್ಟು, ನಗರ ಪ್ರದೇಶದಲ್ಲಾಗಿರುವ ಒತ್ತುವರಿಯನ್ನು ತೆರವುಗೊಳಿಸಿ ಅವರು ಒತ್ತಾಯಿಸಿದರು.
ಇದಕ್ಕೆ ಪ್ರತಿಯಾಗಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಎಂ.ಸಿ. ನಾಣಯ್ಯ ಅವರು, ಮಡಿಕೇರಿ ನಗರದ ಸುತ್ತಮುತ್ತ ಸುಮಾರು 1,000 ಎಕರೆಯಷ್ಟು ಸರ್ಕಾರಿ ಜಮೀನು ಅತಿಕ್ರಮಣವಾಗಿದೆ. ಇದರ ಬಗ್ಗೆ ಜಿಲ್ಲಾಡಳಿತಕ್ಕೆ, ಸರ್ಕಾರಕ್ಕೆ ಹಲವು ಬಾರಿ ಪತ್ರ ಬರೆದರೂ ಯಾವ ಪ್ರಯೋಜನವೂ ಆಗಿಲ್ಲ ಎಂದು ಹೇಳಿದರು.
ಕೊಡಗಿನ ಪರಿಸರದ ಮೇಲೆ ದಾಳಿ ನಡೆಸುತ್ತಿರುವ ಈ ಅತಿಕ್ರಮಣದಾರರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಿ, ಯಾವುದೇ ರಾಜಕೀಯ ಒತ್ತಡಕ್ಕೂ ಮಣಿಯಬೇಡಿ, ಇಲ್ಲಿನ ಗಿರಿ ಕಂದರ, ಪರ್ವತ, ನಿಸರ್ಗವನ್ನು ರಕ್ಷಿಸಲು ಸಹಕರಿಸಿ ಎಂದರು.

`ಸಮಿತಿಯಲ್ಲಿ ಜೇನು ಕುರುಬರೇ ಇಲ್ಲ~
`ಜೇನು ಕುರುಬರಿಗೆ ಮೂಲಸೌಕರ್ಯ ಕಲ್ಪಿಸುವುದು ಹಾಗೂ ಪೌಷ್ಠಿಕ ಆಹಾರ ಪೂರೈಕೆಗೆ ಸಂಬಂಧಿಸಿದಂತೆ ರಚಿಸಲಾಗಿರುವ ಸಮಿತಿಯಲ್ಲಿ ಜೇನು ಕುರುಬ ಸಮುದಾಯದವರೇ ಇಲ್ಲ~ ಎಂದು ವಿಧಾನಪರಿಷತ್ ಸದಸ್ಯ ಎಂ.ಸಿ. ನಾಣಯ್ಯ ಹೇಳಿದರು.

ಸಭೆಯಲ್ಲಿ ಮಾತನಾಡಿದ ಅವರು, ಯಾವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಸಮಿತಿ ರಚಿಸಲಾಗಿದೆಯೋ ಆ ಜನಾಂಗಕ್ಕೆ ಸೇರಿದ ಒಬ್ಬ ವ್ಯಕ್ತಿಯೂ ಈ ಸಮಿತಿಯಲ್ಲಿ ಇಲ್ಲ ಎನ್ನುವ ಅಂಶವನ್ನು ಬಹಿರಂಗಪಡಿಸಿದರು.

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ರಚಿಸಲಾಗಿರುವ ಈ ಸಮಿತಿಯಲ್ಲಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಸಮನ್ವಯಾಧಿಕಾರಿ, ಆಹಾರ ಇಲಾಖೆ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಕೆಲವು ರಾಜಕಾರಣಿಗಳೇ ಇಲ್ಲಿ ಸದಸ್ಯರಾಗಿದ್ದಾರೆ ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಮಂಜುನಾಥ ಅಣ್ಣಿಗೇರಿ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಚಂದ್ರೇಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ಆನಂದ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಯೋಜನಾಧಿಕಾರಿ ಪ್ರಭುಸ್ವಾಮಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿ ತಮ್ಮ ತಮ್ಮ ಇಲಾಖೆಯಲ್ಲಿ ಕೈಗೊಂಡಿರುವ ಪ್ರಗತಿಯ ಮಾಹಿತಿ ನೀಡಿದರು.

ಕೇಳಿದ್ದು 36 ಕೋಟಿ, ಸಿಕ್ಕಿದ್ದು 2 ಕೋಟಿ

ಮಳೆ ಹಾನಿ ಪರಿಹಾರಕ್ಕೆಂದು ರೂ 36 ಕೋಟಿ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಿಕೊಟ್ಟಿದ್ದರೆ, ಜಿಲ್ಲೆಗೆ ದೊರೆತಿದ್ದು ಕೇವಲ ರೂ 2 ಕೋಟಿ! ಎಂದು ವಿಧಾನಪರಿಷತ್ ಸದಸ್ಯ ಎಂ.ಸಿ. ನಾಣಯ್ಯ ಹೇಳಿದರು.

ಕೊಡಗು ಮಲೆನಾಡು ಪ್ರದೇಶದ ವ್ಯಾಪ್ತಿಯೊಳಗೆ ಬರುವ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಇದರಿಂದಾಗಿ ರಸ್ತೆಗಳು ಹಾಳಾಗಿವೆ. ಇದನ್ನು ರಿಪೇರಿ ಮಾಡಬೇಕಾದರೆ ಪ್ರತಿ ವರ್ಷ ಕನಿಷ್ಠ ರೂ 10 ಕೋಟಿಯಾದರೂ ಬೇಕು ಎಂದು ಅಹವಾಲು ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಾರ್ಯದರ್ಶಿ ರಾಜಕುಮಾರ್ ಖತ್ರಿ, ತಕ್ಷಣ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿ ಹೆಚ್ಚುವರಿ ಹಣ ಬಿಡುಗಡೆಗೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT