ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡಳಿಯಲ್ಲೇ ಉಳಿದ 1200 ಕೋಟಿ

Last Updated 16 ಜುಲೈ 2012, 9:05 IST
ಅಕ್ಷರ ಗಾತ್ರ

ಧಾರವಾಡ: “ಕಾರ್ಮಿಕರಿಗೆ ಕಲ್ಯಾಣ ಮಂಡಳಿಯಿಂದ ಕಟ್ಟಡ ಹಾಗೂ ಇತರೆ ಕಾರ್ಮಿಕರಿಗೆ ದೊರೆಯುವ ಸೌಲಭ್ಯಗಳ ಮಾಹಿತಿ ಇಲ್ಲದೇ ಇರುವುದರಿಂದ 1200 ಕೋಟಿ ಹಣ ಹಾಗೆಯೇ ಉಳಿದಿದೆ” ಎಂದು ಹೈಕೋರ್ಟ್ ನ್ಯಾಯಮೂರ್ತಿ ಕೆ.ಶ್ರೀಧರರಾವ್ ತಿಳಿಸಿದರು.

ಸತ್ತೂರಿನ ಡಾ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಭಾನುವಾರ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಧಾರವಾಡ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆಡಳಿತ ಮತ್ತಿತರ ಸಂಘಟನೆಗಳ ಆಶ್ರಯದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಯೋಜನೆ ಕುರಿತ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ಕಾರ್ಮಿಕರೂ ರೂ 50ನ್ನು ಪಾವತಿ ಮಾಡಿ ಫಾರಂ ಪಡೆದು ಭರ್ತಿ ಮಾಡಿ ಮಂಡಳಿಗೆ ಸಲ್ಲಿಸಬೇಕು. ನಂತರ ಸ್ಮಾರ್ಟ್ ಕಾರ್ಡ್ ನೀಡಲಾಗುವುದು. ಸೌಲಭ್ಯ ವಿತರಣೆಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸುವ ಉದ್ದೇಶದಿಂದ ಶೂನ್ಯ ಶಿಲ್ಕು ಬ್ಯಾಂಕ್ ಖಾತೆಯನ್ನು ಕಾರ್ಮಿಕರ ಹೆಸರಿನಲ್ಲಿ ತೆರೆಯಲಾಗುತ್ತಿದೆ. ರೂ 50ನ್ನೂ ಪಾವತಿ ಮಾಡದ ಕಾರ್ಮಿಕರಿಗೆ ತಿಳಿ ಹೇಳಿ ಯೋಜನೆಯ ಲಾಭ ಪಡೆಯಲು ಪ್ರೋತ್ಸಾಹಿಸಲಾಗುತ್ತಿದೆ ಎಂದರು.

ಕಾರ್ಮಿಕ ಕಲ್ಯಾಣ ಮಂಡಳಿ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಪ್ರಥಮವಾಗಿ ಕಾರ್ಮಿಕರಿಗೆ ಯೋಜನೆಗಳ ಬಗ್ಗೆ ಅರಿವು ಮೂಡಿಸುವುದು ಮುಖ್ಯ. ಜಿಲ್ಲೆಯಲ್ಲಿ ಒಟ್ಟು 40 ಸಾವಿರ ಕಾರ್ಮಿಕರು ವಿವಿಧ ನಿರ್ಮಾಣ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಈಗಾಗಲೇ 7 ಸಾವಿರ ಕಾರ್ಮಿಕರು ನೋಂದಣಿ ಮಾಡಿಸಿಕೊಂಡಿದ್ದು, ಬಾಕಿ ಉಳಿದಿರುವ ಕಾರ್ಮಿಕರು ನೋಂದಣಿ ಮಾಡಿಸಿಕೊಂಡರೆ ಸೌಲಭ್ಯಗಳನ್ನು ಪಡೆಯಲು ಸಹಾಯವಾಗುತ್ತದೆ.

ನೋಂದಣಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ವಕೀಲರು ಉಚಿತ ನೆರವು ನೀಡಲಿದ್ದಾರೆ. ಮಂಡಳಿಯಿಂದ ಕಾರ್ಮಿಕರಿಗೆ ವಸತಿ ನಿವೇಶನ ಕೊಡಲೂ ಉದ್ದೇಶಿಸಲಾಗಿದೆ. ಇನ್ನಷ್ಟು ಅನುಕೂಲಗಳನ್ನು ಕೊಡಲು ಹೈಕೋರ್ಟ್ ನಿರ್ದೇಶನ ನೀಡಬೇಕು ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ವಿ.ಅಂಗಡಿ, ಕಾರ್ಮಿಕರ ಕಲ್ಯಾಣಕ್ಕಾಗಿ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ಹಲವಾರು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದರು.

ಸಹಾಯಕ ಕಾರ್ಮಿಕ ಆಯುಕ್ತ ಮಲ್ಲಿಕಾರ್ಜುನ ತಿಮ್ಮೊಲಿ ಕಾರ್ಮಿಕ ಇಲಾಖೆ ಹಾಗೂ ಕಲ್ಯಾಣ ಮಂಡಳಿಯ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ವಕೀಲ ಬಸವಪ್ರಭು ಹೊಸಕೇರಿ ಕಾರ್ಯಕ್ರಮ ನಿರೂಪಿಸಿದರು. ನ್ಯಾಯಧೀಶೆ ಕೆ.ಕಾತ್ಯಾಯಿನಿ ವಂದಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT