ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿಯಲ್ಲಿ ಶಾಂತಿ ಸಭೆ.ಸಾಮರಸ್ಯ ಕಾಪಾಡಲು ನಿರ್ಧಾರ

Last Updated 27 ಫೆಬ್ರುವರಿ 2011, 19:30 IST
ಅಕ್ಷರ ಗಾತ್ರ

ಮಡಿಕೇರಿ:  ವಿರಾಟ್ ಹಿಂದೂ ಸಮಾಜೋತ್ಸವದ ನಂತರ ನಡೆದ ಕಲ್ಲು ತೂರಾಟದಿಂದ ಉದ್ವಿಗ್ನ ಗೊಂಡಿದ್ದ ನಗರದಲ್ಲಿ ಶಾಂತಿ ಮರು ಸ್ಥಾಪಿಸಲು ಜಿಲ್ಲಾಡಳಿತದ ವತಿಯಿಂದ ಭಾನುವಾರ ಜನಪ್ರತಿನಿಧಿಗಳು,  ವಿವಿಧ ಧಾರ್ಮಿಕ ಮುಖಂಡರು ಹಾಗೂ ಸಂಘ, ಸಂಸ್ಥೆಗಳ ಪ್ರಮುಖರ ಶಾಂತಿ ಸೌಹಾರ್ದ ಸಭೆ  ನಡೆಯಿತು.ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಸಂಸದ ಎಚ್.ವಿಶ್ವನಾಥ್, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಎಂ.ಸಿ.ನಾಣಯ್ಯ, ದಕ್ಷಿಣ ವಲಯದ ಐಜಿಪಿ ಎ.ಎನ್.ಎಸ್. ಮೂರ್ತಿ, ಜಿಲ್ಲಾಧಿಕಾರಿ  ಕೆ.ಎಚ್.ಅಶ್ವತ್ಥನಾರಾಯಣಗೌಡ, ಎಸ್ಪಿ ಮಂಜುನಾಥ್ ಕೆ. ಅಣ್ಣಿಗೇರಿ, ಜಿ.ಪಂ. ಅಧ್ಯಕ್ಷ ಶಾಂತೆಯಂಡ   ರವಿಕುಶಾಲಪ್ಪ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಕಿಡಿಗೇಡಿಗಳ ಕೃತ್ಯವನ್ನು ತೀವ್ರವಾಗಿ ಖಂಡಿಸಲಾಯಿತು. ಅಲ್ಲದೆ, ಈ ಕೃತ್ಯವೆಸಗಿದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ಪೊಲೀಸ್ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಯಿತು.

ಈ ಮಧ್ಯೆ, ಸೋಮವಾರ ಸಂಜೆವರೆಗೆ ಮುಂದುವರಿಯಲಿರುವ ನಿಷೇಧಾಜ್ಞೆಯನ್ನು ನಗರದಲ್ಲಿ ಪರಿಸ್ಥಿತಿ ಸಂಪೂರ್ಣ ಸಹಜ ಸ್ಥಿತಿಗೆ ಮರಳಿರುವ ಹಿನ್ನೆಲೆಯಲ್ಲಿ ತಕ್ಷಣ ಹಿಂತೆಗೆಯಲು ವಿಧಾನ ಪರಿಷತ್ ಸದಸ್ಯ ಎಂ.ಸಿ.ನಾಣಯ್ಯ ಒತ್ತಾಯಿಸಿದರು. ಆದರೆ, ಮತ್ತೆ ಗಲಭೆ ನಡೆದರೆ ಅದಕ್ಕೆ ಜಿಲ್ಲಾಡಳಿತ ಅಥವಾ ಪೊಲೀಸ್ ವೈಫಲ್ಯವನ್ನು ದೂಷಿಸಿದಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನೋಡಿಕೊಂಡು ನಿಷೇಧಾಜ್ಞೆ ವಾಪಸ್ ತೆಗೆದುಕೊಳ್ಳುವ ಅಧಿಕಾರವನ್ನು ಜಿಲ್ಲಾಡಳಿತಕ್ಕೆ ಬಿಡಲಾಯಿತು. ಆದರೆ, ಸೋಮವಾರ ಸಂಜೆವರೆಗೆ ನಿಷೇಧಾಜ್ಞೆ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಕೆ.ಎಚ್. ಅಶ್ವತ್ಥನಾರಾಯಣಗೌಡ ತಿಳಿಸಿದ್ದಾರೆ.

ನಗರದಲ್ಲಿ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಶಾಂತಿ ಸಮಿತಿ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಇನ್ನೊಂದು ವಾರದೊಳಗೆ ಈ ಸಮಿತಿ ರಚಿಸುವುದಾಗಿ ಜಿಲ್ಲಾಧಿಕಾರಿ ಕೆ.ಎಚ್.ಅಶ್ವತ್ಥನಾರಾಯಣಗೌಡ ಸಭೆಯಲ್ಲಿ ಪ್ರಕಟಿಸಿದರು.ಈ ನಡುವೆ, ಫೆ. 24 ಹಾಗೂ 25ರಂದು ನಡೆದ ಕಲ್ಲು ತೂರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ಐದು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಯಾವುದೇ ಕಾರಣಕ್ಕೂ ಕಿಡಿಗೇಡಿಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ಮಂಜುನಾಥ್ ಅಣ್ಣಿಗೇರಿ ಸಭೆಗೆ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT