ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನ ಹಕ್ಕು: ಜಾಗೃತಿ ಆಂದೋಲನ

Last Updated 3 ಏಪ್ರಿಲ್ 2013, 9:39 IST
ಅಕ್ಷರ ಗಾತ್ರ

ಮಡಿಕೇರಿ: ಪ್ರಜಾಪ್ರಭುತ್ವದಲ್ಲಿ ಮತ ಚಲಾಯಿಸುವುದು ಪ್ರತಿಯೊಬ್ಬರ ಹಕ್ಕು. 2013ರ ಜನವರಿ 1ಕ್ಕೆ 18 ವರ್ಷ ತುಂಬಿದವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಲು ಅರ್ಹರು ಎಂದು ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಜಿಲ್ಲಾ ಸಮಿತಿ ಅಧ್ಯಕ್ಷ ಕೆ.ಬಿ.ಅಂಜನಪ್ಪ ತಿಳಿಸಿದರು.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ಮತದಾನದ ಹಕ್ಕಿನ ಮಹತ್ವ ಕುರಿತು ಅರಿವು ಮೂಡಿಸಲು ಹಮ್ಮಿಕೊಂಡ ಜಾಗೃತಿ ಅಭಿಯಾನಕ್ಕೆ ನಗರದ ಗದ್ದುಗೆ ಬಳಿ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಸಂಬಂಧಿಸಿದಂತೆ ಜಾಗೃತಿ ಜಾಥಾ, ಬೀದಿ ನಾಟಕ, ಸೈಕಲ್ ಜಾಥಾ ಮತ್ತಿತರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸಮಿತಿ ಸದಸ್ಯ, ನಗರಸಭೆ ಆಯುಕ್ತ ಎನ್.ಎಂ. ಶಶಿಕುಮಾರ್ ಮಾತನಾಡಿ, ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.   

ಜಾಥಾ ಗದ್ದುಗೆಯಿಂದ ಹೊರಟು ಮಹದೇವ ಪೇಟೆ, ಖಾಸಗಿ ಬಸ್ ನಿಲ್ದಾಣದ ಮೂಲಕ ಸಾಗಿ, ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಲಾಯಿತು.

ಜಾಥಾದಲ್ಲಿ ಸಮಿತಿ ಸದಸ್ಯರಾದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್. ಶಿವಕುಮಾರ್, ಜಿಲ್ಲಾ ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆಯ ಅಧಿಕಾರಿ ಲಕ್ಷ್ಮಣ ಜೆ. ಗಂಟಿ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅರುಣಾಚಲ ಶರ್ಮ, ಭೂಮಾಪನ ಇಲಾಖೆಯ ಉಪ ನಿರ್ದೇಶಕ ಅಜ್ಜಪ್ಪ ಮತ್ತಿತರರು ಪಾಲ್ಗೊಂಡಿದ್ದರು.

ಮತದಾನ: ಅರಿವು ಜಾಥಾ
ಸೋಮವಾರಪೇಟೆ:
`ಪ್ರಜಾಪ್ರಭುತ್ವದ ಬಲವರ್ಧನೆಗೆ ಕಡ್ಡಾಯವಾಗಿ ಮತದಾನ ಮಾಡಿ, ಮತದಾರರ ಪಟ್ಟಿಯಲ್ಲಿ ಹೆಸರಿರುವುದನ್ನು ಖಚಿತಪಡಿಸಿಕೊಳ್ಳಿ' ಎಂಬ ಘೋಷಣೆಯೊಂದಿಗೆ ಇಲ್ಲಿನ ಪಟ್ಟಣ ಪಂಚಾಯಿತಿ ವತಿಯಿಂದ ಮಂಗಳವಾರ ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಯಿತು.

ಪಂಚಾಯಿತಿ ಮುಖ್ಯಾಧಿಕಾರಿ ರಂಜನ್ ನೇತೃತ್ವದಲ್ಲಿ ಪಂಚಾಯಿತಿ ಸಿಬ್ಬಂದಿ ಹಾಗೂ ಸಾರ್ವಜನಿಕರು ಜಾಥಾದಲ್ಲಿ ಭಾಗವಹಿಸಿದ್ದರು. ಪಟ್ಟಣದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿ, 2013ರ ಜನವರಿ 1ಕ್ಕೆ 18ವರ್ಷ ತುಂಬಿದವರೆಲ್ಲ ಮತಪಟ್ಟಿಗೆ ಹೆಸರು ಸೇರ್ಪಡೆಗೊಳಿಸಬೇಕು. ಯಾವುದೇ ಆಸೆ ಆಮಿಷಗಳಿಗೆ ತುತ್ತಾಗದೇ ನಿರ್ಭೀತಿಯಿಂದ ಮತ ಚಲಾಯಿಸಿ, ಇನ್ನೊಬ್ಬರ ಹೆಸರಿನಲ್ಲಿ ಮತದಾನ ಮಾಡುವುದು ಅಕ್ಷಮ್ಯ ಅಪರಾಧ ಮತ್ತು ಶಿಕ್ಷಾರ್ಹ, ಚುನಾವಣಾ ಗುರುತಿನ ಚೀಟಿ ಇದ್ದರೂ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ಮತದಾನಕ್ಕೆ ಅವಕಾಶವಿಲ್ಲ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸಿಕೊಳ್ಳಿ ಎಂಬ ಕರಪತ್ರಗಳನ್ನು ಹಂಚಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT