ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲ್ಲೇಶ್ವರ ಬಾಂಬ್ ಸ್ಫೋಟ ಪ್ರಕರಣ: ಆರೋಪಿ ಬಂಧನ

Last Updated 10 ಜುಲೈ 2013, 19:52 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಮಲ್ಲೇಶ್ವರ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡಿನ ವಿಶೇಷ ತನಿಖಾ ದಳದ (ಎಸ್‌ಐಬಿ) ಪೊಲೀಸರು ತೆಂಕಸಿ ಹನೀಫ್ (32) ಎಂಬಾತನನ್ನು ಬಂಧಿಸಿದ್ದಾರೆ.

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ಬಟ್ಲಗುಂಡು ಗ್ರಾಮದ ಹನೀಫ್, ಘಟನೆ ನಂತರ ತಲೆಮರೆಸಿಕೊಂಡಿದ್ದ. ಪ್ರಕರಣ ಸಂಬಂಧ ಈ ಹಿಂದೆ ಬಂಧಿಸಲಾಗಿದ್ದ ಆರೋಪಿಗಳು ನೀಡಿದ ಮಾಹಿತಿ ಆಧರಿಸಿ ಆತನನ್ನು ಬಂಧಿಸಲಾಯಿತು. ಬಿಜೆಪಿ ಮುಖಂಡ ಎಲ್.ಕೆ.ಅಡ್ವಾಣಿ ಅವರು 2011ರಲ್ಲಿ ತಮಿಳುನಾಡು ಪ್ರವಾಸ ಕೈಗೊಂಡಿದ್ದಾಗ ತಿರುಮಂಗಲದಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣದಲ್ಲೂ ಹನೀಫ್ ಆರೋಪಿಯಾಗಿದ್ದ ಎಂದು ಎಸ್‌ಐಬಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ನಗರದ ಸಿಸಿಬಿ ಪೊಲೀಸರು ಹೇಳಿದ್ದಾರೆ.

ಎಸ್‌ಐಬಿ ಅಧಿಕಾರಿಗಳು ಹನೀಫ್‌ನನ್ನು ತಿರುಮಂಗಲ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದು, ನ್ಯಾಯಾಧೀಶರು ಆತನನ್ನು ಜುಲೈ 22ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ. ನ್ಯಾಯಾಲಯದ ಅನುಮತಿ ಪಡೆದು ಹೆಚ್ಚಿನ ತನಿಖೆಗಾಗಿ ಆತನನ್ನು ವಶಕ್ಕೆ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ಕೋಮುಗಲಭೆ ಸಂಭವಿಸಿ ಆರು ಮಂದಿ ಸಾವನ್ನಪ್ಪಿದ್ದ ಪ್ರಕರಣ ಹಾಗೂ ಹಿಂದೂಪರ ಸಂಘಟನೆ ಸದಸ್ಯರೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸರು ಹನೀಫ್‌ನನ್ನು ಈ ಹಿಂದೆ ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಆ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆತ ಮಲ್ಲೇಶ್ವರ ಬಾಂಬ್ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ. ಆತ ಸ್ಫೋಟಕ್ಕೆ ಬೇಕಿದ್ದ ಸ್ಫೋಟಕ ವಸ್ತುಗಳನ್ನು ಪೊರೈಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಕಚೇರಿ ಸಮೀಪ ಏ.17ರಂದು ಸಂಭವಿಸಿದ್ದ ಬಾಂಬ್ ಸ್ಫೋಟದಲ್ಲಿ ರಾಜ್ಯ ಮೀಸಲು ಪೊಲೀಸ್ ಪಡೆ ಸಿಬ್ಬಂದಿ ಸೇರಿದಂತೆ 19 ಮಂದಿ ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT