ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಮಹಾನಗರ ಪಾಲಿಕೆಗಳಲ್ಲಿ ವಾರ್ಡ್‌ಗೊಂದು ಆಸ್ಪತ್ರೆ'

Last Updated 19 ಡಿಸೆಂಬರ್ 2012, 20:01 IST
ಅಕ್ಷರ ಗಾತ್ರ

ಬೆಂಗಳೂರು: `ರಾಜ್ಯದ ಎಲ್ಲ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಪ್ರತಿ ವಾರ್ಡ್‌ಗೆ ಒಂದರಂತೆ ಆಸ್ಪತ್ರೆ ಸೌಲಭ್ಯ ಕಲ್ಪಿಸಲು ಚಿಂತಿಸಲಾಗಿದ್ದು, ಪ್ರಾಯೋಗಿಕವಾಗಿ ಈ ಯೋಜನೆಯನ್ನು ಬೆಂಗಳೂರಿನಲ್ಲಿ ಅನುಷ್ಠಾನಕ್ಕೆ ತರಲಾಗುತ್ತದೆ' ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಂ.ಮದನಗೋಪಾಲ್ ಪ್ರಕಟಿಸಿದರು.

ನಗರದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಕುಟುಂಬ ಕಲ್ಯಾಣ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಅವರು, ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. `ಬೆಂಗಳೂರಿನಲ್ಲಿ ಯೋಜನೆ ಯಶಸ್ವಿಯಾದರೆ ರಾಜ್ಯದ ಉಳಿದ ಪಾಲಿಕೆಗಳಿಗೂ ಈ ಸೌಲಭ್ಯವನ್ನು ವಿಸ್ತರಿಸಲಾಗುವುದು' ಎಂದು ಹೇಳಿದರು.

`ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದ (ಎನ್‌ಯುಎಚ್‌ಎಂ) ಅಡಿಯಲ್ಲಿ ಈ ಸೌಲಭ್ಯವನ್ನು ಕಲ್ಪಿಸಲು ಉದ್ದೇಶಿಸಲಾಗಿದೆ. ವಾರ್ಡ್ ಮಟ್ಟದಲ್ಲಿ ಆಸ್ಪತ್ರೆಗಳು ಇದ್ದರೆ ಸಣ್ಣ-ಪುಟ್ಟ ಕಾಯಿಲೆಗಳಿಗೆ ಜನ ದೊಡ್ಡ ಆಸ್ಪತ್ರೆಗೆ ಬರುವುದು ತಪ್ಪುತ್ತದೆ. ಹಾಗೆಯೇ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೊಂದು ಸುಸಜ್ಜಿತ ಆಸ್ಪತ್ರೆ ಮತ್ತು ವಲಯ ಮಟ್ಟದಲ್ಲೊಂದು ಸಮುದಾಯ ಆರೋಗ್ಯ ಕೇಂದ್ರ ತೆರೆಯಲು ಯೋಜನೆ ಸಿದ್ಧಪಡಿಸಲಾಗಿದೆ' ಎಂದು  ವಿವರಿಸಿದರು.

`ಸರ್ಕಾರಿ ಆಸ್ಪತ್ರೆ ತೆರೆಯಲಾಗದ ವಾರ್ಡ್‌ಗಳಲ್ಲಿ ಖಾಸಗಿ ಆಸ್ಪತ್ರೆ ಜೊತೆಯಲ್ಲಿ ಒಪ್ಪಂದ ಮಾಡಿಕೊಂಡು ಆರೋಗ್ಯ ಸೇವೆ ಕಲ್ಪಿಸಲಾಗುವುದು' ಎಂದು ಮದನಗೋಪಾಲ್ ತಿಳಿಸಿದರು.

`ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದ (ಎನ್‌ಆರ್‌ಎಚ್‌ಎಂ) ಮೊದಲ ಹಂತದಲ್ಲಿ ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಶೇ 90ರಷ್ಟು ಪ್ರಗತಿ ಸಾಧಿಸಲಾಗಿದೆ. ಎರಡನೇ ಹಂತದಲ್ಲಿ ಸಾವಿರ ಕೋಟಿ ಅನುದಾನ ಸಿಕ್ಕಿದೆ. ತಿಂಗಳಾಂತ್ಯದ ವೇಳೆಗೆ ಶೇ 75ರಷ್ಟು ಅನುದಾನ ಬಳಕೆ ಮಾಡಿಕೊಳ್ಳುವ ಗುರಿಯನ್ನು ಹೊಂದಲಾಗಿದೆ' ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT