ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರ ಚಿನ್ನದ ಸರ ಅಪಹರಣ

Last Updated 26 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಸರಗಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು ಮಡಿವಾಳ ಮತ್ತು ಕಮರ್ಷಿಯಲ್‌ಸ್ಟ್ರೀಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮಹಿಳೆಯರ ಚಿನ್ನದ ಸರ ದೋಚಲಾಗಿದೆ.

ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಹಿಳೆಯೊಬ್ಬರ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ಘಟನೆ ಕಮರ್ಷಿಯಲ್‌ಸ್ಟ್ರೀಟ್‌ನ ಸಮ್ಮದ್‌ಹೌಸ್ ಕಲ್ಯಾಣ ಮಂಟಪ ರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದಿದೆ.  ಪರ್ವೀನ್ ತಾಜ್ ಸರ ಕಳೆದುಕೊಂಡವರು. ಅವರು ವಿವಾಹ ಸಮಾರಂಭದಲ್ಲಿ ಪಾಲ್ಗೊಂಡು ಮನೆಗೆ ಹೋಗುತ್ತಿದ್ದ ವೇಳೆ ಈ ಕೃತ್ಯ ಎಸಗಲಾಗಿದೆ. ಕಲ್ಯಾಣ ಮಂಟಪದಿಂದ ಹೊರಗೆ ಬಂದ ಪರ್ವೀನ್ ಅವರ ಪತಿ ಮಹಮ್ಮದ್ ಫಾಜಿಲ್ ಅವರು ಪಾರ್ಕಿಂಗ್ ಸ್ಥಳದಿಂದ ಕಾರು ತರಲು ಹೋಗಿದ್ದಾಗ ಪರ್ವಿನ್ ಒಬ್ಬರೇ ನಿಂತಿದ್ದರು. ಈ ಸಂದರ್ಭದಲ್ಲಿ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸರದ ಬೆಲೆ 1.50 ಲಕ್ಷ ರೂಪಾಯಿ ಎಂದು ಪೊಲೀಸರು ತಿಳಿಸಿದ್ದಾರೆ. ಕಮರ್ಷಿಯಲ್‌ಸ್ಟ್ರೀಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯ ವರ್ತುಲ ರಸ್ತೆಯಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಉಮಾ ಎಂಬುವರ ಚಿನ್ನದ ಸರವನ್ನು ದೋಚಿದ್ದಾರೆ. ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಸರ 58 ಗ್ರಾಂ ತೂಕದ್ದು ಎಂದು ಪೊಲೀಸರು ತಿಳಿಸಿದ್ದಾರೆ. ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತ: ಇಬ್ಬರ ಸಾವು
ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸಾಫ್ಟ್‌ವೇರ್ ಎಂಜಿನಿಯರ್ ಮೃತಪಟ್ಟಿರುವ ಘಟನೆ ಎಚ್‌ಎಎಲ್ ಪೊಲೀಸ್ ಠಾಣೆ ಸಮೀಪ ಭಾನುವಾರ ನಡೆದಿದೆ.

ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಸಂಪತ್‌ಶ್ರೀನಿವಾಸ್ (23) ಮೃತಪಟ್ಟವರು. ಆಂಧ್ರಪ್ರದೇಶದ ವಿಶಾಖ ಪಟ್ಟಣದವರಾದ ಅವರು ಕೆಲ ತಿಂಗಳುಗಳ ಹಿಂದೆ ನಗರಕ್ಕೆ ಬಂದಿದ್ದರು. ಕೋಡಿಹಳ್ಳಿಯಲ್ಲಿ ಅವರು ನೆಲೆಸಿದ್ದರು. ಸಂಜೆ ಏಳು ಗಂಟೆ ಸುಮಾರಿಗೆ ಎಚ್‌ಎಎಲ್ ಪೊಲೀಸ್ ಠಾಣೆ ಸಮೀಪ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಅವರ ಮೇಲೆ ಅದೇ ವಾಹನದ ಹಿಂದಿನ ಚಕ್ರ ಹರಿದ ಪರಿಣಾಮ ತೀವ್ರವಾಗಿ ಗಾಯಗೊಂಡು  ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಏರ್‌ಪೋರ್ಟ್ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ. ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.
ವಾಹನ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದೆ.

ಕಾಮಾಕ್ಷಿಪಾಳ್ಯ: ಶಾಲಾ ಮಿನಿ ಬಸ್ ಮತ್ತು ದ್ವಿಚಕ್ರ ವಾಹನ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರು  ಸಾವನ್ನಪ್ಪಿದ ದಾರುಣ ಘಟನೆ ಸುಂಕದಕಟ್ಟೆಯ ಕೆಬ್ಬೆಹಳ್ಳ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ಲಗ್ಗೆರೆಯ ನಿವಾಸಿ ನೀಲಕಂಠಪ್ಪ (55) ಮೃತಪಟ್ಟವರು. ಅನ್ನಪೂರ್ಣೇಶ್ವರಿನಗರದಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ಅವರು ಬೆಳಿಗ್ಗೆ ಕೆಲಸಕ್ಕೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ಹಿಂದಿನಿಂದ ಬಂದ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಅವರ ಮೇಲೆ ಅದೇ ವಾಹನದ ಹಿಂದಿನ ಚಕ್ರ ಹರಿದ ಪರಿಣಾಮ ಅವರು ಸಾವನ್ನಪ್ಪಿದ್ದಾರೆ ಎಂದು ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT