ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಷಿ ವರದಿ ಪರಿಷ್ಕರಿಸಲು ಸಮಿತಿ

Last Updated 4 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಈಗಿನ ಸನ್ನಿವೇಶಕ್ಕೆ ತಕ್ಕಂತೆ ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಲು ಸಮಿತಿಯೊಂದನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಶನಿವಾರ ಇಲ್ಲಿ ತಿಳಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿಧಾನಸೌಧದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಹೊರ ರಾಜ್ಯಗಳ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ 103 ವಿದ್ಯಾರ್ಥಿಗಳಿಗೆ 2011-12ನೇ ಸಾಲಿನ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿದ ಅವರು, ಪ್ರಾಧಿಕಾರದ ಅಧ್ಯಕ್ಷ `ಮುಖ್ಯಮಂತ್ರಿ~ ಚಂದ್ರು ಅವರೂ ಸಮಿತಿಯಲ್ಲಿ ಇರುತ್ತಾರೆ ಎಂದರು.

ಹೊರ ರಾಜ್ಯಗಳ ವಿ.ವಿ.ಗಳಲ್ಲಿರುವ ಕನ್ನಡ ಅಧ್ಯಯನ ಪೀಠಗಳಿಗೆ ಅಗತ್ಯವಿರುವ ನೆರವು ನೀಡಲು ಸರ್ಕಾರ ಸಿದ್ಧವಿದೆ. ಬೇಡಿಕೆಗಳ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಪ್ರಸ್ತಾವ ಕಳುಹಿಸಿಕೊಡಿ ಎಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅಧ್ಯಯನ ಪೀಠಗಳ ಮುಖ್ಯಸ್ಥರಿಗೆ ಸೂಚಿಸಿದರು.

ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ ಒಂದರಂದು ಸರ್ಕಾರಿ ಕಚೇರಿಗಳಲ್ಲಿ ಅಷ್ಟೇ ಅಲ್ಲದೆ, ಅರೆ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಕನ್ನಡ ಧ್ವಜ ಹಾರಿಸುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸುತ್ತೋಲೆ ಹೊರಡಿಸಲು ಸರ್ಕಾರ ಬದ್ಧವಾಗಿದೆ.
 
ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸದನದಲ್ಲೂ ಈ ಬಗ್ಗೆ ಚರ್ಚಿಸಿ ಸರ್ಕಾರದ ನಿರ್ಧಾರವನ್ನು ಪ್ರಕಟಿಸಲಾಗುವುದು ಎಂದರು. ಒಂದರಿಂದ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ನೀಡಬೇಕು ಎಂದು ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ನೀಡಿದ ಸಲಹೆಗೆ ಪ್ರತಿಕ್ರಿಯಿಸಿದ ಸದಾನಂದ ಗೌಡ, ಈ ವಿಷಯ  ನ್ಯಾಯಾಲಯದ ಮುಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ ಭಾಷಾ ಸಮಸ್ಯೆಗೆ ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ನುಡಿದರು.

ಪಂಪನ ಹೆಸರಿನಲ್ಲಿ ಸಂಶೋಧನಾ ಕೇಂದ್ರ ತೆರೆಯುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಚಂದ್ರು, ನಾಡಗೀತೆ ಹಾಡಲು ಕಾಲಮಿತಿ ನಿಗದಿಪಡಿಸಬೇಕು, ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದವರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ಎಂದು ಸರ್ಕಾರಿ ಆದೇಶ ಹೊರಡಿಸಬೇಕು, ವೃತ್ತಿಪರ ಕೋರ್ಸ್‌ಗಳಲ್ಲಿ ಕನ್ನಡ ಪಠ್ಯವನ್ನು ಕಡ್ಡಾಯಗೊಳಿಸಬೇಕು ಎಂದು ಆಗ್ರಹಿಸಿದರು.

2011-12ನೇ ಸಾಲಿನಲ್ಲಿ 103 ವಿದ್ಯಾರ್ಥಿಗಳಿಗೆ ವಾರ್ಷಿಕ 20 ಸಾವಿರ ರೂಪಾಯಿ ಪ್ರಕಾರ ಒಟ್ಟು 20.80 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ನೀಡಲಾಗಿದೆ. ಅಧಿಕಾರದಲ್ಲಿ ಯಾರೇ ಇದ್ದರೂ ನಿರಂತರವಾಗಿ ವಿದ್ಯಾರ್ಥಿ ವೇತನ ನೀಡುವ ಸಂಬಂಧ ಸುತ್ತೋಲೆ ಹೊರಡಿಸಿ ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್. ಆಚಾರ್ಯ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT