ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 3, 4ಕ್ಕೆ ಸಿಇಟಿ: ಈ ಬಾರಿ ಆನ್‌ಲೈನ್ ಕೌನ್ಸೆಲಿಂಗ್ ಪದ್ಧತಿ

Last Updated 19 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ವೈದ್ಯಕೀಯ/ ದಂತವೈದ್ಯಕೀಯ, ಎಂಜಿನಿಯರಿಂಗ್ ಮತ್ತು ವಾಸ್ತುಶಿಲ್ಪ ಕೋರ್ಸ್‌ಗಳ ಪ್ರವೇಶಕ್ಕೆ ಈ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೇ 3, 4ರಂದು ನಡೆಯಲಿದೆ. ಇದೇ ಮೊದಲ ಬಾರಿಗೆ ಆಂಧ್ರಪ್ರದೇಶದ ಮಾದರಿಯಲ್ಲಿ ಆನ್‌ಲೈನ್ ಕೌನ್ಸೆಲಿಂಗ್ ಮೂಲಕ ಸೀಟು ಹಂಚಿಕೆ ಮಾಡಲಾಗುತ್ತದೆ.

ಸಿಇಟಿ ಪರೀಕ್ಷೆಗೆ ಸಂಬಂಧಿಸಿದ ವಿವರವಾದ ವೇಳಾಪಟ್ಟಿ ವಾರದಲ್ಲಿ ಪ್ರಕಟವಾಗಲಿದ್ದು, ಈ ತಿಂಗಳ ಅಂತ್ಯದಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ಗುರುವಾರ ನಡೆದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಸಿಇಟಿ ದಿನಾಂಕವನ್ನು ಅಂತಿಮಗೊಳಿಸಲಾಯಿತು ಎಂದು ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸಿದ್ದಯ್ಯ `ಪ್ರಜಾವಾಣಿ~ಗೆ ತಿಳಿಸಿದರು.

ಮೇ 3ರಂದು ಜೀವವಿಜ್ಞಾನ, ಗಣಿತ, 4ರಂದು ರಸಾಯನ ವಿಜ್ಞಾನ ಮತ್ತು ಭೌತವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ. ಮೇ 5ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ ವಿಷಯದ ಪರೀಕ್ಷೆ ನಡೆಯಲಿದೆ. ಈ ಬಾರಿಯ ಕೈಪಿಡಿಯಲ್ಲಿ ಸಿಇಟಿ ಪರೀಕ್ಷೆಗೆ ಸಂಬಂಧಿಸಿದ ವಿಷಯವನ್ನು ಮಾತ್ರ ಮುದ್ರಿಸಿ ವಿದ್ಯಾರ್ಥಿಗಳಿಗೆ ನೀಡ ಲಾಗುತ್ತದೆ. ನಂತರ ಕೌನ್ಸೆಲಿಂಗ್‌ಗೆ ಸಂಬಂಧಿಸಿದ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುತ್ತದೆ.  ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷಾ ಶುಲ್ಕ ಪಾವತಿಸಲು ಆಯ್ದ ಬ್ಯಾಂಕ್ ಶಾಖೆಗಳಲ್ಲಿ ಅವಕಾಶ ಕಲ್ಪಿಸಲಾಗುತ್ತದೆ. 
 
ಕಳೆದ ವರ್ಷದ ಶುಲ್ಕದಲ್ಲಿ ಯಾವುದೇ ವ್ಯತ್ಯಾಸ ಇರುವುದಿಲ್ಲ. ಸುಮಾರು 1.20 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಸಿಇಟಿ ಪರೀಕ್ಷೆ ತೆಗೆದು ಕೊಳ್ಳುವ ನಿರೀಕ್ಷೆ ಇದೆ.

ಆನ್‌ಲೈನ್ ಕೌನ್ಸೆಲಿಂಗ್: ಸೀಟು ಹಂಚಿಕೆಗೆ ಪ್ರತಿ ವರ್ಷ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ವರ್ಷ ಆನ್‌ಲೈನ್ ಮೂಲಕ ಸೀಟು ಹಂಚಿಕೆ ಮಾಡಲು ಉದ್ದೇಶಿಸಿದೆ. ದೆಹಲಿ, ಚಂಡೀಗಡ, ಹೈದರಾಬಾದ್ ಸೇರಿದಂತೆ ಹಲವೆಡೆ ಆನ್‌ಲೈನ್ ಮೂಲಕ ಸೀಟು ಹಂಚಿಕೆ ಮಾಡುವ ವ್ಯವಸ್ಥೆ ಜಾರಿಯಲ್ಲಿದೆ. ಪ್ರಾಧಿಕಾರದ ಅಧಿಕಾರಿಗಳು ಅಲ್ಲಿಗೆ ಭೇಟಿ ನೀಡಿ ಅಧ್ಯಯನ ಮಾಡಿದ ನಂತರ ರಾಜ್ಯದಲ್ಲೂ ಆ ಪದ್ಧತಿಯನ್ನು ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದ್ದು, ಆಡಳಿತ ಮಂಡಳಿ ಸಭೆ ಇದಕ್ಕೆ ತಾತ್ವಿಕ ಒಪ್ಪಿಗೆ ನೀಡಿದೆ. ಇದರ ರೂಪುರೇಷೆಗಳನ್ನು ಸದ್ಯದಲ್ಲೇ ಅಂತಿಮಗೊಳಿಸಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರು ತಮ್ಮ ಸಲಹೆ ಸೂಚನೆಗಳನ್ನು ನೀಡಬಹುದಾಗಿದೆ ಎಂದು ಸಿದ್ದಯ್ಯ ತಿಳಿಸಿದರು.

ಆನ್‌ಲೈನ್ ಕೌನ್ಸೆಲಿಂಗ್‌ನಿಂದ ಸಮಯ ಮತ್ತು ಹಣ ಉಳಿತಾಯವಾಗಲಿದೆ. ವಿದ್ಯಾರ್ಥಿಗಳೊಂದಿಗೆ ಪೋಷಕರು ಕೌನ್ಸೆಲಿಂಗ್ ಕೇಂದ್ರಗಳಿಗೆ ಅಲೆದಾಡುವುದು ತಪ್ಪಲಿದೆ. ಅಲ್ಲದೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಯಲಿದ್ದು, `ಸೀಟ್ ಬ್ಲಾಕ್~ ಮಾಡಲು ಅವಕಾಶ ಇರುವುದಿಲ್ಲ. ಸೀಟು ಆಯ್ಕೆ ಮಾಡಿಕೊಂಡ ವಿದ್ಯಾರ್ಥಿ ಸಂಬಂಧಪಟ್ಟ ಕಾಲೇಜಿನಲ್ಲಿ ದಾಖಲಾಗಿದ್ದಾನೆಯೇ ಎಂಬುದು ಆನ್‌ಲೈನ್ ಮೂಲಕ ಸುಲಭವಾಗಿ ಗೊತ್ತಾಗಲಿದೆ. ಹೀಗಾಗಿ ಅವ್ಯವಹಾರಕ್ಕೆ ಆಸ್ಪದ ಇರುವುದಿಲ್ಲ.

ಕೌನ್ಸೆಲಿಂಗ್‌ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಗೆ ಸರ್ಕಾರಿ ಪಾಲಿಟೆಕ್ನಿಕ್‌ಗಳು, ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯವಸ್ಥೆ ಮಾಡಲಾಗುತ್ತದೆ. ಅಲ್ಲದೆ ಆನ್‌ಲೈನ್ ಮೂಲಕ ನಡೆಯುವ ಸೀಟು ಹಂಚಿಕೆ ಮಾದರಿ ಬಗ್ಗೆಯೂ ತಿಳಿಸಿಕೊಡಲಾಗುತ್ತದೆ. ಮೀಸಲಾತಿ ಮತ್ತು ಸಿಇಟಿಯಲ್ಲಿ ಗಳಿಸಿರುವ ರ‌್ಯಾಂಕ್‌ಗೆ ಅನುಗುಣವಾಗಿ ಸೀಟು ಹಂಚಿಕೆ ಮಾಡಲಾಗುತ್ತದೆ ಎಂದು ಹೇಳಿದರು.

ತರಬೇತಿ: ಸಿಇಟಿ ಪರೀಕ್ಷೆ ತೆಗೆದುಕೊಳ್ಳುವ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಅಷ್ಟೇ ಅಲ್ಲದೆ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೂ ಇದೇ 30ರಿಂದ ದೂರದರ್ಶನ ಮೂಲಕ ತರಬೇತಿ ನೀಡಲಾಗುತ್ತದೆ. ಮೊದಲ ಹಂತದಲ್ಲಿ ಜ.30ರಿಂದ ಮಾರ್ಚ್ 11ರವರೆಗೆ ಮೂರು ವಿಭಾಗ ವಿದ್ಯಾರ್ಥಿಗಳಿಗೆ ತರಬೇತಿ ಇರುತ್ತದೆ. ಪಿಯುಸಿ ಪರೀಕ್ಷೆ ನಂತರ 2ನೇ ಹಂತದಲ್ಲಿ ಸಿಇಟಿ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಮಾತ್ರ ತರಬೇತಿ ನೀಡಲಾಗುತ್ತದೆ.

ವಿಜ್ಞಾನ ವಿಷಯಗಳ ಜೊತೆಗೆ ಈ ವರ್ಷ ಇಂಗ್ಲಿಷ್, ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಲೆಕ್ಕಶಾಸ್ತ್ರ, ವಾಣಿಜ್ಯಶಾಸ್ತ್ರ ವಿಷಯದಲ್ಲೂ ತರಬೇತಿ ನೀಡಲು ನಿರ್ಧರಿಸಲಾಗಿದೆ. ಮುಂದಿನ ವರ್ಷದಿಂದ ರಾಷ್ಟ್ರೀಯ ಪಠ್ಯಕ್ರಮ ಜಾರಿಗೆ ಬರುವುದರಿಂದ ಏಪ್ರಿಲ್‌ನಿಂದಲೇ ಬ್ರಿಜ್ ಕೋರ್ಸ್ ಆರಂಭವಾಗಲಿದೆ. ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಭಾಷಾ ಸಾಮರ್ಥ್ಯದ ಬಗ್ಗೆ ತಿಳಿಸಿಕೊಡಲಾಗುತ್ತದೆ.  ಇದಲ್ಲದೆ 2013ನೇ ಸಾಲಿನಲ್ಲಿ ಸಿಇಟಿ ಬರೆಯುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಈ ವರ್ಷ ಜುಲೈನಿಂದಲೇ ಸಿಇಟಿ ತರಬೇತಿ ಆರಂಭಿಸಿ, ವರ್ಷಪೂರ್ತಿ ಮುಂದುವರಿಸಲು ನಿರ್ಧರಿಸಲಾಗಿದೆ ಎಂದರು.

ಆಡಳಿತ ಮಂಡಳಿಗಳೊಂದಿಗೆ 30ಕ್ಕೆ ಮಾತುಕತೆ...

ಸೀಟು ಹಂಚಿಕೆ ಮತ್ತು ಶುಲ್ಕ ನಿಗದಿಗೆ ಸಂಬಂಧಿಸಿದಂತೆ ಇದೇ 30ರಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳೊಂದಿಗೆ ಸರ್ಕಾರ ಮಾತುಕತೆ ನಡೆಸಲಿದೆ. ಮುಂದಿನ ಶೈಕ್ಷಣಿಕ ಸಾಲಿನಲ್ಲಿ ವೈದ್ಯಕೀಯ/ದಂತ ವೈದ್ಯಕೀಯ ಮತ್ತು ಎಂಜಿನಿಯರಿಂಗ್‌ನಲ್ಲಿ ಸರ್ಕಾರಿ ಮತ್ತು ಕಾಮೆಡ್-ಕೆ ಕೋಟಾ ಸೀಟುಗಳಿಗೆ ಎಷ್ಟು ಶುಲ್ಕ ನಿಗದಿಪಡಿಸಬೇಕು ಎಂಬ ಬಗ್ಗೆ ಮೊದಲ ಸುತ್ತಿನ ಚರ್ಚೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT