ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಗದ್ದೆ- ಒಣಜಾರು: ಕಿರು ಸೇತುವೆಗೆ ಶಿಲಾನ್ಯಾಸ

Last Updated 19 ಫೆಬ್ರುವರಿ 2013, 8:39 IST
ಅಕ್ಷರ ಗಾತ್ರ

ಉಡುಪಿ: `ಎಲ್ಲ ಜನಪ್ರತಿನಿಧಿಗಳು ಒಟ್ಟಿಗೆ ಸೇರಿ ಕೆಲಸ ಮಾಡಿದರೆ ಗ್ರಾಮದ ಅಭಿವೃದ್ಧಿ ಸಾಧ್ಯ' ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕಾರ್ಕಳ ತಾಲ್ಲೂಕಿನ ನಾಡ್ಪಾಲು ಗ್ರಾಮದ ಮೇಗದ್ದೆ- ಒಣಜಾರು ಎಂಬಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಸೀತಾನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಕಿರು ಸೇತುವೆಗೆ ಸೋಮವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಅನುದಾನವನ್ನು ಮೀಸಲಿಟ್ಟಿದ್ದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮೂಲಕವೂ ಹಲವು ಕಾಮಗಾರಿಗಳನ್ನು ಕೈಗೊಳ್ಳುತ್ತಿದೆ. ಕರಾವಳಿ ಜಿಲ್ಲೆಗೆ ಸಂಬಂಧಿಸಿದ ಸೌಭಾಗ್ಯ ಸಂಜೀವಿನಿ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಕಿಂಡಿ ಅಣೆಕಟ್ಟೆಗಳನ್ನು ನಿರ್ಮಿಸಲು 49 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ ಎಂದು ಅವರು ಹೇಳಿದರು.

ಮೇಗದ್ದೆ ವಣಜಾರಿನ ಮುಖ್ಯಪ್ರಾಣ ದೇವರ ದೇವಸ್ಥಾನ ಅಭಿವೃದ್ಧಿಗೆ ಇಲಾಖೆಯಿಂದ ಎರಡು ಲಕ್ಷ ರೂಪಾಯಿ ನೀಡುವುದಾಗಿ ಸಚಿವರು ಘೋಷಿಸಿದರು.

`ಕೂಡ್ಲುತೀರ್ಥ ಫಾಲ್ಸ್ ಅನ್ನು ಒಂದು ಅತ್ಯುತ್ತಮ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿ ಮಾಡಬೇಕಾಗಿದೆ. `ಬೀಚ್ ಟೂರಿಸಂ' ಜೊತೆ ಇದನ್ನು ಸೇರಿಸಿಕೊಳ್ಳಬೇಕು. ಇದಕ್ಕಾಗಿ ಇಲ್ಲಿನ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು' ಎಂದು ಶಾಸಕ ಕೆ.ಗೋಪಾಲ ಭಂಡಾರಿ ಹೇಳಿದರು.

50ಲಕ್ಷ ರೂಪಾಯಿ ವೆಚ್ಚದಲ್ಲಿ ಕಿರು ಸೇತುವೆ ನಿರ್ಮಿಸಲು ಶಿಲಾನ್ಯಾಸ ಮಾಡಲಾಗಿದೆ. ವಾಸ್ತವವಾಗಿ ಇಲ್ಲಿ ಎರಡು ಕೋಟಿ ರೂಪಾಯಿ ವೆಚ್ಚದ ದೊಡ್ಡ ಸೇತುವೆಯೇ ನಿರ್ಮಾಣ ಆಗಬೇಕಿತ್ತು. ಈ ವಣಜಾರು, ಮೇಗದ್ದೆ, ಕೂಡ್ಲು ಫಾಲ್ಸ್‌ನ ಸುತ್ತಮುತ್ತ ಮೂಲಸೌಕರ್ಯ ಒದಗಿಸಲು ಕನಿಷ್ಠ ಹತ್ತು ಕೋಟಿ ರೂಪಾಯಿಯನ್ನು ಸರ್ಕಾರ ಮಂಜೂರ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಅಭಿವೃದ್ಧಿ ಕಾಮಗಾರಿಗಳಿಗೆ ಅರಣ್ಯ ಇಲಾಖೆಯ ನಿಯಮಗಳು ಅಡ್ಡಿಯಾಗಿವೆ. ಮೂಲಸೌಕರ್ಯ ಒದಗಿಸುವ ಸಂದರ್ಭದಲ್ಲಿ ಮರ ಕಡಿಯಲೂ ಅರಣ್ಯ ಇಲಾಖೆ ಅಧಿಕಾರಿಗಳು ಬಿಡುವುದಿಲ್ಲ. ಕೇಂದ್ರ ಸರ್ಕಾರದ ಕಾಯ್ದೆ ಅನ್ವಯ ಕೂಡ್ಲುವಿನ ಅರಣ್ಯ ನಿವಾಸಿಗಳಿಗೆ ಹಕ್ಕು ಪತ್ರ ನೀಡಲಾಗಿತ್ತು. ಆದರೆ ಆ ಮನೆಗಳಿಗೆ ವಿದ್ಯುತ್ ಸಂಪರ್ಕ ಕೊಡಿಸಲು ಹರಸಾಹಸ ಮಾಡಬೇಕಾಯಿತು. ಮೂಲಸೌಕರ್ಯದ ವಿಷಯ ಬಂದಾಗ ಅರಣ್ಯ ಇಲಾಖೆಯವರೂ ಸಹಕಾರ ನೀಡುವಂತೆ ಸರ್ಕಾರ ನೋಡಿಕೊಳ್ಳಬೇಕು ಎಂದು ಭಂಡಾರಿ ಹೇಳಿದರು.

`ನಾನು ಹುಟ್ಟಿ ಬೆಳೆದ ಊರಿನಲ್ಲಿ ಸೇತುವೆ ನಿರ್ಮಾಣ ಮಾಡುತ್ತಿರುವುದು ಸಂತಸ ತಂದಿದೆ. ಮೇ ತಿಂಗಳ ಅಂತ್ಯದೊಳಗೆ ಸೇತುವೆ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗುತ್ತದೆ' ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಹೇಳಿದರು.

ನಾಡ್ಪಾಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿ ದಯಾನಂದ ಸ್ವಾಗತಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಮಂಜುನಾಥ ಪೂಜಾರಿ, ತಾಲ್ಲೂಕು ಪಂಚಾಯಿತಿ ಸದಸ್ಯ ಚಂದ್ರಶೇಖರ ಶೆಟ್ಟಿ, ಮಾಜಿ ಶಾಸಕ ಸುನಿಲ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ. ರವಿರಾಜ್ ನಾರಾಯಣ್, ನಾಡ್ಪಾಲು ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ  ಜಗದೀಶ್ ಹೇರಳೆ, ಸದಸ್ಯ ಸತೀಶ್ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ಪುರಂದರ್, ಕಾರ್ಯದರ್ಶಿ ಪ್ರಸಾದ್ ಭಂಡಾರಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT